ನಕ್ಸಲ್ಪೀಡಿತ ಪ್ರದೇಶಾಭಿವೃದ್ಧಿಗೆ 5 ಕೋಟಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ. 9
ನಕ್ಸಲ್ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಜಿಲ್ಲೆಯ ನಕ್ಸಲ್ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 5 ಕೋಟಿ ಬಿಡುಗಡೆಯಾಗಿದೆ ಎಂದು ಸುದ್ದಿಗಾರರೊಂದಿಗೆ ಗುರುವಾರ ತಿಳಿಸಿದರು.
ನಕ್ಸಲ್ಪೀಡಿತ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಮೂಲ ಸೌಲಭ್ಯ ನೀಡಲು ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಆದ್ದರಿಂದ ಹಣ ಬಿಡುಗಡೆ ಮಾಡುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮರಳು ನೀತಿ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಬಂದಿದೆ. ಹೊಸ ಮರಳು ಬ್ಲಾಕ್ ಗುರುತು ಮಾಡಲು ಮುಂದಿನ ವಾರದಲ್ಲಿ ಕೆಲವು ಪ್ರದೇಶಕ್ಕೆ ಭೇಟಿ ನೀಡಲಾಗುವುದು. ಮರಳು ಇರುವಿಕೆಯ ಬಗ್ಗೆ ದೃಢಪಡಿಸಿದ ನಂತರದಲ್ಲಿ ಕಟ್ಟಡ ಮಾಲೀಕರಿಗೆ ಸುಲುಭವಾಗಿ ಮರಳು ಸಿಗುವಂತೆ ಮಾಡಲು ಶೃಂಗೇರಿ, ಕೊಪ್ಪ, ಮೂಡಿಗೆರೆ ಹಾಗೂ ಚಿಕ್ಕಮಗಳೂರಿನಲ್ಲಿ ಮರಳು ಡಿಪೋ ತೆರೆಯಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೆರೆ ಹಾಗೂ ಸ್ಮಶಾನ ಜಾಗ ಒತ್ತುವರಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಕೆರೆಗಳ ಒತ್ತುವರಿಯ ಬಗ್ಗೆ ಸರ್ವೆ ಮಾಡಿ, ಗಡಿ ಗುರುತು ಮಾಡುವಂತೆ ಸಣ್ಣ ನೀರಾವರಿ ಇಲಾಖೆಗೆ ಸೂಚನೆ ನೀಡಲಾಗಿದೆ. ಆದರೆ, ಸರ್ವೆಯರ್ಗಳ ಕೊರತೆಯಿಂದ ಈ ಕೆಲಸ ವಿಳಂಬವಾಗುತ್ತಿದೆ ಎಂದರು.
ಕಳಪೆ ರಸಗೊಬ್ಬರ ತಯಾರಿಕೆ ಮತ್ತು ವಿತರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘದವರು ಆಗ್ರಹಿಸಿದ್ದಾರೆ. ರಸಗೊಬ್ಬರವನ್ನು ಪ್ರಯೋಗಶಾಲೆಗೆ ಕಳುಹಿಸಲಾಗಿದ್ದು, ಪ್ರಾಥಮಿಕ ವರದಿ ಬಂದಿದ್ದು, ಎರಡನೇ ವರದಿ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕ್ರಿಯಾಯೋಜನೆಗೆ ಸೂಚನೆ: ಕಡೂರು ಬರಪೀಡಿತ ತಾಲೂಕೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಇತರೆ ಕ್ರಮ ವಹಿಸಲು ಸರ್ಕಾರದಿಂದ ಹಣ ಬರಬೇಕಾಗಿದೆ. ಅದಕ್ಕೂ ಮುನ್ನ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೀರೂರು ಮತ್ತು ಕಡೂರು ಪಟ್ಟಣಗಳಿಗೆ ಭದ್ರಾ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ತಿಳಿಸಿದರು.
15 ರಂದು ಸಿಎಂ ಭೇಟಿ: ಜ. 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸ್ಪಷ್ಟ ತೀರ್ಮಾನ: ಕಳಸ ಇನಾಂ ಭೂಮಿಗೆ ಸಂಬಂಧಿಸಿದಂತೆ ಚರ್ಚಿಸಲು ಉಚ್ಚ ನ್ಯಾಯಾಲಯದ ಅಡ್ವೋಕೇಟ್ ಜನರಲ್ ಅವರ ಕಚೇರಿಯಲ್ಲಿ ಗುರುವಾರ ಸಭೆ ಕರೆಯಲಾಗಿತ್ತು. ಆದರೆ, ಅವರು ದೆಹಲಿಗೆ ತುರ್ತಾಗಿ ಹೋಗಿದ್ದರಿಂದ ಸಭೆ ಮುಂದೂಡಲಾಗಿದೆ. ಜ. 28 ರೊಳಗೆ ಸರ್ಕಾರ ಸ್ಪಷ್ಟ ತೀರ್ಮಾನಕ್ಕೆ ಬರಲಿದೆ ಎಂದರು.
ನ್ಯಾಯಾಲಯದ ಆದೇಶ ಅನ್ವಯವಾಗುವ ಪ್ರದೇಶ ಹೊರತುಪಡಿಸಿ ದತ್ತಪೀಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅಲ್ಲಿ ತೆಗೆದುಕೊಳ್ಳುವ ಕಾಮಗಾರಿಗಳು ಪರಿಸರಕ್ಕೆ ಪೂರಕವಾಗಿರುತ್ತವೆ ಎಂದು ಹೇಳಿದರು.
ಖರೀದಿ ಕೇಂದ್ರ: 1800 ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲು ಜ. 20 ರಂದು ಕಡೂರು ತಾಲೂಕಿನ ಸಿಂಗಟಗೆರೆ ಹಾಗೂ ಪಂಚನಹಳ್ಳಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.
ಷೋಕಾಸ್ ನೋಟಿಸ್: ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಬುಧವಾರದಂದು ಭದ್ರಾ ಮೇಲ್ದಂಡೆ ಯೋಜನೆಯಡಿ ತಮ್ಮ ಗ್ರಾಮಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸ್ಥಳೀಯರು ನಡೆಸಿದ ಪ್ರತಿಭಟನೆಯಲ್ಲಿ ಸೊಕ್ಕೆಯ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.
ಈ ಸಂಬಂಧ ಶಾಲೆಯ ಆಡಳಿತ ಮಂಡಳಿ ಹಾಗೂ ತರೀಕೆರೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಷೋಕಾಸ್ ನೋಟಿಸ್ ಜಾರಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

