ಅಂಗನವಾಡಿ ಖಾಸಗೀಕರಣ: ಪ್ರತಿಭಟನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ.10
ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ರಸ್ತೆ ತಡೆ ನಡೆಸಿದರು.
ಹುನ್ನಾರ: ಇದೇ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ರಾಧಾ ಸುಂದರೇಶ್, ಮಕ್ಕಳಿಗೆ ಅನೌಪಚಾರಿಕ ಶಾಲಾ ಪೂರ್ವ ಶಿಕ್ಷಣ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ಆರೋಗ್ಯ ತಪಾಸಣೆ, ಮಾಹಿತಿ ಸೇವೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಜನಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸಲು ಮುಂದಾಗದ ಸರ್ಕಾರಗಳು ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಗೊಳಿಸುವ ಹುನ್ನಾರದಲ್ಲಿ ನಿರತವಾಗಿವೆ ಎಂದು ಆರೋಪಿಸಿದರು.
1000 ಗೌರವಧನ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಕಲ್ಯಾಣ ಯೋಜನೆಯನ್ನು ಪುನರ್ ರಚಿಸುವ ನೆಪದಲ್ಲಿ ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಈ ಪ್ರಕ್ರಿಯೆಯ ಭಾಗವಾಗಿ ಪ್ರತಿ ಅಂಗನವಾಡಿ ಕೇಂದ್ರಕ್ಕೆ ಎರಡು ಜನ ಹೆಚ್ಚುವರಿಯಾಗಿ ಒಬ್ಬ ಲಿಂಕ್ ವರ್ಕರ್ ಹಾಗೂ ಒಬ್ಬ ಸಹಾಯಕಿಯನ್ನು ಮಾಸಿಕ 1000 ಗೌರವಧನ ನೀಡಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಕಾಯಂಗೊಳಿಸಿ: ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಲವಾರು ವರ್ಷಗಳಿಂದ ಅತೀ ಕಡಿಮೆ ಸಂಭಾವನೆ ಪಡೆದು ಸೇವಾ ಮನೋಭಾವನೆಯಿಂದ ದುಡಿಯುತ್ತಿದ್ದಾರೆ. ಅವರಿಗೆ ಉದ್ಯೋಗ ಭದ್ರತೆಯಾಗಲೀ, ಸೇವಾವಧಿಯ ಮೂಲಭೂತ ಸವಲತ್ತುಗಳನ್ನು ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಅದುದರಿಂದ ಕೂಡಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕ್ರಮವಾಗಿ “Ò’ ಮತ್ತು “t’ ಗ್ರೂಪ್ ದರ್ಜೆಯ ನೌಕರರನ್ನಾಗಿ ಪರಿಗಣಿಸಿ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
12,500 ನಿಗದಿಗೊಳಿಸಿ: ಮಾಸಿಕ ಸಂಬಳ 12,500 ರುಪಾಯಿ ನಿಗಧಿಗೊಳಿಸಬೇಕು. 6 ತಿಂಗಳ ಹೆರಿಗೆ ರಜೆ ಸಂಬಳ ಸಹಿತ ಎಲ್ಲಾ ರೀತಿಯ ಭತ್ಯೆಗಳನ್ನು ನೀಡಬೇಕು. ನಿವೃತ್ತಿ ವೇತನ, ಪಿಂಚಣಿ ಯೋಜನೆ ಹಾಗೂ ಇಎಸ್ ಐ ಮತ್ತು ಭವಿಷ್ಯ ನಿಧಿ ಯೋಜನೆಗೆ ಒಳಪಡಿಸಬೇಕು. ಇಲಾಖೆಯ ಕೆಲಸಗಳಿಗೆ ಹಾಗೂ ಸಭೆಗಳಿಗೆ ಹಾಜರಾಗುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪ್ರಯಾಣ ಮತ್ತು ಊಟ- ತಿಂಡಿಯ ಭತ್ಯೆಯನ್ನು ನೀಡಬೇಕು ಎಂದರು.
ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ನ ತಾಲೂಕು ಕಾರ್ಯದರ್ಶಿ ಮಂಗಳ, ಕಡೂರು ತಾಲೂಕು ಅಧ್ಯಕ್ಷೆ ಪುಷ್ಪಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದರು.
ಕಡೂರಿನಲ್ಲಿ ರಸ್ತೆ ತಡೆ
ಕಡೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರವು “Ò’ ಅಥವಾ “t’ ದರ್ಜೆ ನೌಕರರು ಎಂದು ಪರಿಗಣಿಸುವುದು,ಪಿಂಚಣಿ ನೀಡುವುದು, ಕನಿಷ್ಠ ಮಾಸಾಶನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಡೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪಟ್ಟಣದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಸ್ಪಂದಿಸದ ಸರ್ಕಾರ: ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅಮ್ಜದ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೇವಲ ಕನಿಷ್ಠ ಗೌರವಧನ ಪಡೆದು ಜೀವನ ನಡೆಸುವುದು ಕಷ್ಟವಾಗಿದೆ. ಆರೋಗ್ಯ ಸುಧಾರಣೆ, ಮಕ್ಕಳ ಬೆಳವಣಿಗೆ ಸೇರಿದಂತೆ ವಿವಿಧ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ಮಾಡುತ್ತಾ ವಿವಿಧ ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಸುತ್ತಿದ್ದರೂ ಸಹ ಯಾವ ಸರ್ಕಾರಗಳು ಕೂಡ ಸ್ಪಂದಿಸುತ್ತಿಲ್ಲ ಎಂದರು. ಆನಂತರ ಪ್ರತಿಭಟನಾಕಾರರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂದಿರುವ ಶಿವಮೊಗ್ಗ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಈ ವೇಳೆ ಪದಾಧಿಕಾರಿಗಳಾದ ಅನ್ನಪೂರ್ಣಮ್ಮ, ಮಂಜುಳಾ, ಮೀನಾಕ್ಷಿ ಇದ್ದರು.
ನರಸಿಂಹರಾಜಪುರದಲ್ಲೂ...
ನರಸಿಂಹರಾಜಪುರ: ಅಂಗನವಾಡಿ ಖಾಸಗೀಕರಣಕ್ಕೆ ವಿರೋಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ, ರಸ್ತೆ ತಡೆ ನಡೆಸಲಾಯಿತು. ಎಐಟಿಯುಸಿ ರಾಜ್ಯ ಸಂಚಾಲಕ ಕೆಲವಳ್ಳಿ ಕಳಸಪ್ಪ, ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಸದಸ್ಯೆ ಪದ್ಮಾವತಿ, ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಸಂಧ್ಯಾರಾಣಿ, ಕಾರ್ಯದರ್ಶಿ ಅನಸೂಯ, ಖಜಾಂಚಿ ಅನ್ನಮ್ಮ ನೇತೃತ್ವದಲ್ಲಿ 250 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ತಾಲೂಕು ಕಚೇರಿ ಎದುರು ಧರಣಿ ನಡೆಸಿದರು. ಪಟ್ಟಣದ ವಾಟರ್ ಟ್ಯಾಂಕ್ ಸಮೀಪದ ಸರ್ಕಲ್ನಲ್ಲಿ ಮಾನವ ಸರಪಳಿ ನಡೆಸಿ ರಸ್ತೆ ತಡೆ ನಡೆಸಿದರು. ತಹಸೀಲ್ದಾರ್ಗೆ ಮನವಿ ಅರ್ಪಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಸದಸ್ಯೆ ಪದ್ಮಾವತಿ, ತಾಲೂಕು ಘಟಕದ ಅಧ್ಯಕ್ಷೆ ಸಂಧಾರಾಣಿ ಮಾತನಾಡಿದರು.
ಬಂಧನ: ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ತಡೆಯೊಡ್ಡಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

