ಚಿಕ್ಕಮಗಳೂರು

ಹಬ್ಬ- ಹರಿದಿನ ಸಾಮರಸ್ಯದಿಂದ ಆಚರಿಸಿ

Published On :

ಚಿಕ್ಕಮಗಳೂರು: ಎಲ್ಲಾ ಧರ್ಮದವರು ಮುಂಬರುವ ಹಬ್ಬ- ಹರಿದಿನಗಳನ್ನು ಸೌಹಾರ್ದತೆ ಮತ್ತು ಸಾಮರಸ್ಯದಿಂದ ಆಚರಿಸುವ ಮೂಲಕ ಜಿಲ್ಲೆಯಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಜಿಲ್ಲೆಯ ಜನತೆಗೆ ಮನವಿ ಮಾಡಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕರ ಸಂಕ್ರಾಂತಿ ಹಾಗೂ ಈದ್ ಮಿಲಾದ್ ಹಬ್ಬದ ದಿನಗಳಲ್ಲಿ ಎಲ್ಲಾ ಸಮೂಹದ ಜನರು ಸೌಹಾರ್ದತೆ ಮತ್ತು ಸಾಮರಸ್ಯದಿಂದ ಆಚರಿಸುವುದರೊಂದಿಗೆ ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎಂದರು.
ಮಾಹಿತಿ ನೀಡಿ: ಕೆಲವು ಕಿಡಿಗೇಡಿಗಳು ಸಮಾಜದಲ್ಲಿ ಅಶಾಂತಿ ಮೂಡಿಸಿ ಅಹಿತಕರ ಘಟನೆಗಳಿಗೆ ಪ್ರೇರೇಪಿಸಲು ಹುನ್ನಾರ ನಡೆಸಿದ್ದು, ಇವುಗಳಿಗೆ ಎಲ್ಲಾ ಸಮಾಜದವರು ಖಂಡಿಸುವುದರೊಂದಿಗೆ ಸಮಾಜಘಾತಕರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕೆಂದರು.
ಧಾರ್ಮಿಕ ಹಾಗೂ ಸೂಕ್ತ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವ ಬಗ್ಗೆ ಶೀಘ್ರದಲ್ಲಿ ಸಭೆ ಕರೆದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ, ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ರಾಧಾ ಸುಂದರೇಶ್, ಕೆ.ಟಿ. ರಾಧಾಕೃಷ್ಣ, ಕೆ. ಮೊಹಮ್ಮದ್ ಹಾಗೂ ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೋಲಿಯೊ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಲ್ಲಾದ್ಯಂತ ಪೋಲಿಯೊ ಲಸಿಕೆ ಕಾರ್ಯಕ್ರಮವು ಜ. 19 ಹಾಗೂ 23 ರಂದು ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೋಲಿಯೊ  ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋಲಿಯೊ ನಿರ್ಮೂಲನೆಯಲ್ಲಿ ದೇಶ ಅಪೂರ್ವ ಪ್ರಗತಿ ಸಾಧಿಸಿದೆ. ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಪೋಲಿಯೊ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿಲ್ಲ ಎಂದರು.
ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪೋಲಿಯೊ ಲಸಿಕಾ ಕೇಂದ್ರ ತೆರೆಯಲಾಗುವುದು. ಲಸಿಕಾ ಕೇಂದ್ರಗಳಲ್ಲಿ ಐದು ವರ್ಷ ಒಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗುವುದು ಎಂದರು.
ಕಾರ್ಯಕ್ರಮದ ಯಶಸ್ವಿಗೆ ವಾಹನ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದ ಅವರು, ವಲಸೆ ಕಾರ್ಮಿಕ ಮಕ್ಕಳಿಗೂ ಲಸಿಕೆ ಹಾಕಲು ಒತ್ತು ನೀಡಲಾಗುವುದು ಎಂದರು.ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ ಬಾರದೇ ಇದ್ದ ಮಕ್ಕಳ ಮನೆ ಮನೆಗೆ ಕಾರ್ಯಕರ್ತರು ಹೋಗಿ ಪೋಲಿಯೊ ಹಾಕಬೇಕೆಂದು ಸೂಚನೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.