ಕುಡಿಯುವ ನೀರಿನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೇಖಾ
ಕನ್ನಡಪ್ರಭ ವಾರ್ತೆ ಟಿ ಚಿಕ್ಕಮಗಳೂರು ಟಿ ಜ.16
ಮುಂಬರುವ ಬೇಸಿಗೆ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಬೇಕೆಂದು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬರಪೀಡಿತ ಪ್ರದೇಶಗಳು ಒಳಗೊಂಡಂತೆ ಇತರೆ ಪ್ರದೇಶಗಳಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಸಿವಿಲ್ ಕಾಮಗಾರಿ ಹಾಗೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ವಿಳಂಬವಿಲ್ಲದೆ ಪೂರ್ಣಗೊಳಿಸಿ ಮುಂಬರುವ ಬೇಸಿಗೆ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಸಮನ್ವಯದ ಕೊರತೆ: ಈಗಾಗಲೇ ಪೂರ್ಣಗೊಂಡಿರುವ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬವಾಗಿರುವುದು ಕಂಡುಬರುತ್ತಿದ್ದು, ಮೆಸ್ಕಾಂ ಹಾಗೂ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಲ್ಲಿ ಸಮನ್ವಯದ ಕೊರತೆ ಇರುವುದು ಕಂಡುಬರುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸರ್ವೀಸ್ ನೀಡುವಾಗ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಡಿಸಿಸಿ ಬ್ಯಾಂಕ್ನಲ್ಲಿ ಬೆಳೆ ಸಾಲ ಮಂಜೂರು ಮಾಡುವ ಸಂದರ್ಭದಲ್ಲಿ ತಾರತಮ್ಯವಾಗುತ್ತಿದೆ ಎಂಬುದರ ಬಗ್ಗೆ ದೂರುಗಳು ಬರುತ್ತಿದೆ ಎಂದ ಅವರು, ಸಣ್ಣ- ಪುಟ್ಟ ರೈತರಿಗೆ ತೊಂದರೆ ಆಗದಂತೆ ಮಲೆನಾಡು ಮತ್ತು ಬಯಲುಸೀಮೆಯಲ್ಲಿ ಬೇರೆ ಬೇರೆ ಬೆಳೆ ಬೆಳೆಯುವುದರಿಂದ ಆಯಾ ಪ್ರದೇಶಕ್ಕನುಗುಣವಾಗಿ ಸಾಲ ಮಂಜೂರು ಮಾಡುವ ಕ್ರಮ ವಹಿಸಬೇಕೆಂದರು.
ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮಹಿಳೆಯರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ನಿಗದಿತ ಗುರಿ ಸಾಧಿಸಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಫಾರಸು: ಸಭೆಗೆ ಹಾಜರಾಗದ ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲು ಸೂಚನೆ ನೀಡಿದರು.
ಆಹಾರ ಮತ್ತು ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಪಡಿತರ ಚೀಟಿಗಳ ವಿತರಣೆಗಳ ಮಾಹಿತಿ ಪಡೆದು ಮಾತನಾಡಿ, ಎಲ್ಪಿಜಿ ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಪಡೆಯಲು ಜಿಲ್ಲೆಯ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಬೇಕೆಂದು ಸೂಚನೆ ನೀಡಿದರು.
ವಸತಿ ಯೋಜನೆ ಅನುಷ್ಠಾನದಲ್ಲಿ ಕುಂಠಿತವಾಗಲು ಅವಕಾಶ ನೀಡದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್, ಕೈಗಾರಿಕಾ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ನಿರಂಜನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

