ಜಿಲ್ಲಾ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು: ವರಿಷ್ಠರ ಭೇಟಿಗೆ ನಿರ್ಧಾರ
ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಉದ್ಭವಿಸಿರುವ ಬಿಕ್ಕಟ್ಟನ್ನು ಪಕ್ಷದ ರಾಜ್ಯ ವರಿಷ್ಠರಿಗೆ ತಲುಪಿಸುವ ಮಟ್ಟದಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮಾತ್ರವಲ್ಲ, ಕೆಲವು ಸಂದರ್ಭಗಳಲ್ಲಿ ಸರ್ಕಾರ ತೋರಿದ ಮೃದು ಧೋರಣೆಯಿಂದಾಗಿ ಮುಂದಿನ ದಿನಗಳಲ್ಲಿ ಪಕ್ಷದ ಮೇಲೆ ಯಾವ ರೀತಿಯಲ್ಲಿ ದುಷ್ಪರಿಣಾಮ ಉಂಟಾಗಲಿದೆ ಎಂಬುದನ್ನು ತಿಳಿಸಿಕೊಡಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ಉದ್ದೇಶಿಸಿದ್ದಾರೆ. ಇದಕ್ಕಾಗಿ ಜ.22 ರಂದು ಭೇಟಿ ಮಾಡುವ ದಿನಾಂಕವನ್ನು ಸಹ ಗೊತ್ತುಪಡಿಸಿದ್ದಾರೆ.
ಒಡೆದ ಮನಸ್ಸುಗಳು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಸೋಲಾಗಿದ್ದರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದರು. ಆಗ ಜಿಲ್ಲಾ ಕಾಂಗ್ರೆಸ್ನ ಹಿರಿಯ ಉಪಾಧ್ಯಕ್ಷರಾಗಿ ಡಾ. ಡಿ.ಎಲ್. ವಿಜಯಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದರು.
ಅವರ ನೇಮಕ ಆಗುತ್ತಿದ್ದಂತೆ ಕಾಂಗ್ರೆಸ್ನ ಕೆಲವು ಮುಖಂಡರು ಪ್ರತ್ಯೇಕವಾಗಿ ಸಭೆಯನ್ನು ನಡೆಸಿ ನೂತನ ಅಧ್ಯಕ್ಷರ ನೇಮಕಾತಿ ನಿಯಮಬದ್ದವಾಗಿ ಆಗಿಲ್ಲ ಎಂಬ ಅಸಮಾಧಾನ ಹೊರ ಹಾಕಿದ್ದರು. ಅಂದಿನಿಂದ ಮುಖಂಡರಲ್ಲಿ ಗುಂಪುಗಾರಿಕೆ ಕಾಣಿಸಿಕೊಂಡಿತು. ಆದರೆ, ಡಾ. ಡಿ.ಎಲ್. ವಿಜಯಕುಮಾರ್ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ತಮ್ಮ ವಿರೋಧ ಇಲ್ಲ ಎಂದು ಹೇಳುತ್ತಲೇ ಬಂದರು.
ಆಂತರಿಕ ಬಿಕ್ಕಟ್ಟು: ಆದರೆ, ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟನ್ನು ಇರುವುದನ್ನು ಸುದ್ದಿಗೋಷ್ಠಿಯಲ್ಲಿ ಹೊರ ಹಾಕಿದರು. ಇದಕ್ಕೆ ಕೆಲವು ಕಾರಣವನ್ನು ಸಹ ನೀಡಿದ್ದರು. ಪಕ್ಷದಲ್ಲಿನ ಆಂತರಿಕ ವಿಷಯವನ್ನು ಮಾಧ್ಯಮಗಳ ಮೂಲಕ ಹೊರ ಹಾಕಿರುವ ಅವರಿಗೆ ನೊಟೀಸ್ ಜಾರಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ರೀತಿಯ ಕ್ರಮಕ್ಕೆ ಮುಂದಾದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂಬುದು ಮನವರಿಕೆಯಾಗಿದ್ದರಿಂದ ಈ ನಿಲುವು ಕೈಬಿಡಲಾಗಿದೆ. ಅದುದರಿಂದ ಎಂ.ಎಲ್. ಮೂರ್ತಿ ಸೇರಿದಂತೆ ಕೆಲವು ಕಾಂಗ್ರೆಸ್ ಮುಖಂಡರನ್ನು ಕರೆಸಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲು ಉದ್ದೇಶಿಸಲಾಗಿದೆ.
ಜಿಲ್ಲೆಯ ಕೆಲವು ಸಮಸ್ಯೆಗಳ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಅವರು ದೆಹಲಿಗೆ ಹೋಗಿದ್ದು, ಅವರುಗಳು ಸೋಮವಾರ ಚಿಕ್ಕಮಗಳೂರಿಗೆ ಬಂದ ನಂತರ ಪಕ್ಷದ ಸಭೆಯನ್ನು ಕರೆದು ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿಸಲಾಗಿದೆ.
ಪಕ್ಷದಲ್ಲಿನ ಆಂತರಿಕ ಪರಿಸ್ಥಿತಿಯನ್ನು ಬಗೆಹರಿಸಲು ಈವರೆಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮುಂದಾಗದೆ ಇರುವುದರಿಂದ ಜ.22 ರಂದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಲು ಕೆಲವು ಮುಖಂಡರು ತೀರ್ಮಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

