ಚಿಕ್ಕಮಗಳೂರು

ಪಡಿತರ ವಿತರಣೆಗೆ ಇ-ಯಂತ್ರ ಬಳಸಿ

Published On :

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರಗಳ ವಿತರಣೆಯ ಸಂದರ್ಭದಲ್ಲಿ ಇ- ಪಡಿತರ ಯಂತ್ರಗಳನ್ನು ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೀವ್ ಚಾವ್ಲಾ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಪಾಯಿಂಟ್ ಆಫ್ ಸೇಲ್ ಇ-ಪಡಿತರ ಯಂತ್ರವನ್ನು ನೀಡಲಾಗಿದ್ದು, ಪಡಿತರ ವಿತರಣಾ ಸಂದರ್ಭದಲ್ಲಿ ಇವುಗಳ ಸಮರ್ಪಕ ಬಳಕೆಯಾಗಬೇಕೆಂದ ಅವರು, ಜಿಲ್ಲೆಯಲ್ಲಿ ಈಗಾಗಲೇ ವಿತರಣೆಯಾಗಿರುವ ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಹೊಸ ಪಡಿತರ ಚೀಟಿಗಳನ್ನು ನಿಗದಿತ ಅವಧಿಯೊಳಗೆ ನೀಡಬೇಕೆಂದು ತಿಳಿಸಿದರು.
ಮೂಲ ಸೌಕರ್ಯ ಒದಗಿಸಿ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒಳಗೊಂಡಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅನ್ನಭಾಗ್ಯ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ಬಿಸಿಯೂಟ ಹಾಗೂ ಹಾಲು ವಿತರಣೆಯು ವ್ಯವಸ್ಥಿತವಾಗಿರಬೇಕು. ಶಿಕ್ಷಣದ ಹಕ್ಕಿನ ಬಗ್ಗೆ ಜಿಲ್ಲಾದಾಧ್ಯಂತ ಹೆಚ್ಚಿನ ಪ್ರಚಾರ ನೀಡಬೇಕೆಂದು ಹೇಳಿದರು.
ತಿಂಗಳೊಳಗೆ ನಿವೇಶನ ಹಂಚಿಕೆ: ಜಿಲ್ಲೆಯಲ್ಲಿ ವಸತಿ ಯೋಜನೆಯ ಪ್ರಗತಿ ಕಾರ್ಯ ಕುಂಠಿತಗೊಂಡಿದ್ದು, ಇದರ ವೇಗವನ್ನು ಹೆಚ್ಚಿಸಬೇಕು ಹಾಗೂ ಗ್ರಾಮೀಣ ಭಾಗದಲ್ಲಿ ನಿವೇಶನಗಳ ಹಂಚಿಕೆಯ ಕೆಲಸ ಒಂದು ತಿಂಗಳೊಳಗೆ ಆಗಬೇಕು ಎಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆ ಅಧಿಕಾರಿಗಳಿಂದ ಬೆಳೆಗಳ ವಿವರ ಹಾಗೂ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾಹಿತಿ ಪಡೆದು ಮಾತನಾಡಿದ ಅವರು, ಅವುಗಳ ಸಮರ್ಪಕ ವಿತರಣೆಯಾಗಬೇಕೆಂದು ತಿಳಿಸಿದರು.
ಹಾಸ್ಟೆಲ್‌ಗಳ ಭೇಟಿ ಸಂದರ್ಭದಲ್ಲಿ ಅಲ್ಲಿಯ ವಾತಾವರಣ ಶುಚಿ ಇಲ್ಲದೆ ಹಾಗೂ ಕಳಪೆ ಆಹಾರ ಧಾನ್ಯ ಕಂಡು ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷೀಣ ಕ್ರಮ ಕೈಗೊಳ್ಳಲಾಗುವುದೆಂದ ಅವರು, ಕಂದಾಯ ಇಲಾಖೆ ಅಧಿಕಾರಿಗಳ ಹಾಸ್ಟೆಲ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.