ಚಿಕ್ಕಮಗಳೂರು

ಬಜೆಟ್‌ನಲ್ಲಿ ಜಿಲ್ಲೆಗೆ ಹೊಸ ಯೋಜನೆ ಮಂಜೂರು ಮಾಡಿ

Published On :

ಚಿಕ್ಕಮಗಳೂರು: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಹೊಸ ಯೋಜನೆಗಳನ್ನು ಮಂಜೂರು ಮಾಡುವಂತೆ ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಹೊಸ ಯೋಜನೆ ಮಂಜೂರು ಮಾಡಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಒತ್ತಾಯಿಸಿದರು.
ಎಂಜಿನಿಯರಿಂಗ್ ಕಾಲೇಜು: ಜಿಲ್ಲೆಗೆ ಮಂಜೂರಾಗಿ ಮೀಸಲಿಟ್ಟಿರುವ ರು. 20 ಕೋಟಿ ರುಪಾಯಿಯಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ತಕ್ಷಣವೇ ಪ್ರಾರಂಭಿಸಬೇಕು ಹಾಗೂ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಪ್ರಾರಂಭಿಸಲಾಗುವುದೆಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದು, ಅದರಂತೆ ಮುಂದಿನ ಬಜೆಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೆಡಿಕಲ್ ಕಾಲೇಜಿಗೂ ಅನುದಾನ ನಿಗದಿಪಡಿಸಬೇಕೆಂದು ಆಗ್ರಹಿಸಿದರು.
ಗಣರಾಜ್ಯೋತ್ಸವ ಸಂದೇಶದ ಭಾಷಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳನ್ನು ಉಲ್ಲೇಖಿಸಿದ್ದಾರೆ. ಆದರೆ, ಇದರಲ್ಲಿ ಯಾವುದೇ ಹೊಸ ಯೋಜನೆ ಪ್ರಕಟಿಸದೇ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಜೂರಾಗಿ, ಕಾರ್ಯಾದೇಶ ಪಡೆದು ನಗರದಲ್ಲಿ ಕಾಮಗಾರಿ ನಡೆಯುತ್ತಿರುವ ರು. 28 ಕೋಟಿ ವೆಚ್ಚದ ಕೆಎಆರ್‌ಬಿ ಯೋಜನೆಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿವೆ ಎಂದರು.
ರು. 57 ಕೋಟಿ ವೆಚ್ಚದ ಒಳಚರಂಡಿ ಕಾಮಗಾರಿ, ರು. 30 ಕೋಟಿ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ, ಚರಂಡಿ ಕಾಮಗಾರಿ ಮತ್ತು ಜಿಲ್ಲೆಯ ಕಡೂರು ಮತ್ತು ಬೀರೂರು ಪಟ್ಟಣಗಳಿಗೆ ಭದ್ರಾ ನದಿಯಿಂದ ನೀರು ಒದಗಿಸುವ ಯೋಜನೆ ಇದೆ.
ಆದರೆ, ಈ ಸರ್ಕಾರದಿಂದ ಯಾವುದೇ ಪ್ರಮುಖ ಹೊಸ ಯೋಜನೆ ಮಂಜೂರು ಮಾಡದೇ ಹಿಂದಿನ ಸರ್ಕಾರದ ಈ ಯೋಜನೆಗಳನ್ನು ತಮ್ಮ ಸರ್ಕಾರ ಜಾರಿಗೊಳಿಸಿದೆ ಎಂದು ಉಲ್ಲೇಖಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ದ್ವಂದ್ವ ಹೇಳಿಕೆ: ಅಡಕೆ ಬೆಳೆಗಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಆದರೆ, ಅವರ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ಅಡಿಕೆ ಬೆಳೆ ಆರೋಗ್ಯಕ್ಕೆ ಹಾನಿಕಾರ ಹೌದೋ, ಅಲ್ಲವೋ ಎಂಬುದಕ್ಕೆ ಮತ್ತೊಮ್ಮೆ ಈಗ ಅಧ್ಯಯನ ಮಾಡಲು ಸಮಿತಿ ನೇಮಿಸಿದೆ. ಆದ್ದರಿಂದ ಸಚಿವರು ಮತ್ತು ಮುಖ್ಯಮಂತ್ರಿಗಳು ಅಡಕೆ ಬೆಳೆಗಾರರಿಗೆ ದ್ವಂದ್ವ ಹೇಳಿಕೆ ಮುಖಾಂತರ ಆತಂಕ ಉಂಟುಮಾಡಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ, ಪುಷ್ಪರಾಜ್, ಸಿಡಿಎ ಮಾಜಿ ಅಧ್ಯಕ್ಷ ಬಿ. ರಾಜಪ್ಪ ಹಾಗೂ ಜಿಲ್ಲಾ ಸಹ ವಕ್ತಾರ ಪುಟ್ಟೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.