ಜನಸಂಖ್ಯಾ ದಿನಾಚರಣೆ 11ರಂದು ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು: ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜು.11 ರಂದು ನಗರದಲ್ಲಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಜನಸಂಖ್ಯಾ ದಿನಾಚರಣೆಯ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ನಗರದ ಹಳೇ ತಾಲೂಕು ಕಚೇರಿ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ಜನಸಂಖ್ಯಾ ಸ್ಥಿರತೆ ಬಗ್ಗೆ ಅರಿವು ಮೂಡಿಸುವ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಆಕರ್ಷಕ ಉದ್ಘೋಷಣೆಗಳ ಪ್ಲೇಕಾರ್ಡ್: ಜಾಥಾದಲ್ಲಿ ಸಂಘ ಸಂಸ್ಥೆಯ ಪದಾಧಿಕಾರಿಗಳು, ಆಶಾ ಕಾರ್ಯಕರ್ತರು, ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ನಗರದ ಪ್ರಮುಖ ಬೀದಿಯಲ್ಲಿ ಜನಸಂಖ್ಯಾ ಸ್ಥಿರತೆಯ ಬಗ್ಗೆ ಘೋಷಣೆ ಹಾಗೂ ಆಕರ್ಷಕ ಉದ್ಘೋಷಣೆಗಳನ್ನು ಒಳಗೊಂಡ ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.
ಸಭಾ ಕಾರ್ಯಕ್ರಮದಲ್ಲಿ ಜನಸಂಖ್ಯಾ ಸೇವೆಯ ಬಗ್ಗೆ ಉಪನ್ಯಾಸ ನಡೆಯಲಿದೆ ಎಂದು ಹೇಳಿದರು. ಕುಟುಂಬ ಯೋಜನಾ ಸೇವೆಗಳನ್ನು ಜಿಲ್ಲಾದ್ಯಂತ ಆದ್ಯತೆ ಮೇಲೆ ಒದಗಿಸಲು ವ್ಯವಸ್ಥೆ ಮಾಡಿ ಅದಕ್ಕೆ ವ್ಯಾಪಕ ಪ್ರಚಾರ ಹಾಗೂ ಕ್ಷೇತ್ರ ಮಟ್ಟದಲ್ಲಿ ಮನವೊಲಿಕೆಯ ಕಾರ್ಯಕ್ರಮ ತೀವ್ರಗೊಳಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಪ್ರತೀ ತಾಲೂಕು ಕೇಂದ್ರಗಳಲ್ಲಿಯೂ ಜು. 11ರಂದು ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಹಮ್ಮಿಕೊಳ್ಳಲಾಗುವುದು. ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜುಲೈ 1 ರಿಂದ 25 ರವರೆಗೆ ಕುಟುಂಬ ಕಲ್ಯಾಣ ಸೇವೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ಜನ್ ಡಾ. ದೊಡ್ಡಮಲ್ಲಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ, ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

