ಒಳನಾಡಿಗೂ ಮೂಲ ಸೌಕರ್ಯ ಕಲ್ಪಿಸಿ
ಚಿಕ್ಕಮಗಳೂರು: ಮಲೆನಾಡಿನ ಭಾಗದ ದೂರದ ಒಳನಾಡು ಪ್ರದೇಶಗಳ ಜನರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ದೂರದ ಒಳನಾಡು ಪ್ರದೇಶಗಳ ಅಭಿವೃದ್ಧಿ ಕಾರ್ಯಕ್ರಮಗಳ (ನಕ್ಸಲ್ ಪೀಡಿತ ಪ್ರದೇಶಗಳ) ಪ್ರಗತಿ ಪರಿಶೀಲನೆ ಹಾಗೂ ವಿಶೇಷ ಘಟಕ ಯೋಜನೆ ಅನುಷ್ಠಾನಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೂಲ ಸೌಕರ್ಯ: ಮಲೆನಾಡಿನ ದೂರದ ಒಳನಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ರಸ್ತೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಸೌಲಭ್ಯ ಒಳಗೊಂಡಂತೆ ಹಲವು ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದು ತಿಳಿಸಿದರು.
ಈ ಭಾಗದಲ್ಲಿ ತೂಗುಸೇತುವೆ, ಕಿರುಸೇತುವೆ, ರಸ್ತೆ ಕಾಮಗಾರಿ, ಕುಡಿಯುವ ನೀರಿನ ಬಾವಿ ನಿರ್ಮಾಣ ಒಳಗೊಂಡಂತೆ 111 ಕಾಮಗಾರಿ ಕೈಗೊಂಡಿದ್ದು, ಅವುಗಳಲ್ಲಿ 87 ಪೂರ್ಣಗೊಂಡಿದೆ. 14 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದ ಅವರು, ಪ್ರಾರಂಭಿಸದ ಬಾಕಿ ಇರುವ 10 ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಆರಂಭಿಸಿ ಪೂರ್ಣಗೊಳಿಸಬೇಕು ಎಂದರು.
ಅಧಿಕಾರಿಗಳಿಗೆ ಸೂಚನೆ: ನೆಮ್ಮಾರು, ನಿಲಂದೂರು, ಕಿತ್ಲೆಮನೆ, ಬಲೆಕಡಿ ಹಾಗೂ ಹಾಗಲಂಜಿಗೆ ಗ್ರಾಮಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕೆಂದು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಕ್ಸಲ್ ಪೀಡಿತ ಪ್ರದೇಶಗಳ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬಂದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ, ವಿಶೇಷ ಘಟಕ ಯೋಜನೆಗಳ ಅನುಷ್ಠಾನದ ಬಗ್ಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಗ್ರಾಮೀಣ ಕೈಗಾರಿಕೆ, ಸಾರಿಗೆ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಮತ್ತಿತರ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸುರೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

