ಜಾಗೃತಿಯಿಂದ ರೋಗ ದೂರ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಜೂ.3
ಸಾಂಕ್ರಾಮಿಕ ರೋಗಗಳು ಹರಡುವ ಮುನ್ನ ಅವುಗಳ ಬಗ್ಗೆ ಮುನ್ನೆಚರಿಕೆ ಕ್ರಮ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವುದರಿಂದ ರೋಗಗಳ ನಿಯಂತ್ರಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಹಾಗೂ ಆರೋಗ್ಯ ಇಲಾಖೆಯ ಹಲವು ಕಾರ್ಯಕ್ರಮಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳು ಬ್ಯಾಕ್ಟೀರಿಯಾ, ವೈರಸ್ಗಳ ಮೂಲಕ ಹಾಗೂ ನೀರು, ನೊಣ, ಸೊಳ್ಳೆ, ಉಣ್ಣೆ ಮುಂತಾದ ರೋಗವಾಹಕಗಳಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಇವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಮಾಡಬೇಕೆಂದು ಸೂಚನೆ ನೀಡಿದರು.
ಎನ್.ಆರ್. ಪುರದ ಕಟ್ಟಿಮನೆ ವ್ಯಾಪ್ತಿಯಲ್ಲಿ ಕ್ಯಾಸನೂರು ಪ್ರಕರಣ ಕಂಡುಬಂದಿದ್ದು, ಇದರ ನಿಯಂತ್ರಣಕ್ಕೆ ಬಾಳೆಹೊನ್ನೂರು, ಬಾಳೆಹೊಳೆ, ಅತ್ತಿಗುಂಡಿ, ಸಿರವಾಸೆ, ಜೇನುಗುಡ್ಡ ಹಾಗೂ ಕಟ್ಟಿಮನೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕಲಾಗಿದೆ ಎಂದ ಅವರು, ಅರಣ್ಯದಲ್ಲಿ ಅಸ್ವಾಭಾವಿಕವಾಗಿ ಮಂಗಗಳು ಸತ್ತಿರುವುದು ಕಂಡು ಬಂದಲ್ಲಿ ತಕ್ಷಣದಲ್ಲಿಯೇ ಅರಣ್ಯ ಇಲಾಖೆಯವರು ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ತಿಳಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಅನುಷ್ಠಾನದಲ್ಲಿದ್ದು, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಿದ್ದು, ಇವುಗಳ ಮಾರಾಟ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಬೇಕು ಎಂದರು.
ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಇವುಗಳ ನಿಯಂತ್ರಣಕ್ಕೆ ಸ್ಕ್ಯಾನಿಂಗ್ ಘಟಕಗಳಿಗೆ ಪಿಸಿ ಮತ್ತು ಪಿಡಿಎನ್ಟಿ ಸದಸ್ಯರು ಅನಿರೀಕ್ಷಿತ ಭೇಟಿ ನೀಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜನನ- ಮರಣ ಹಾಗೂ ತಾಯಂದಿರ ಮರಣದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದರ ಜತೆಗೆ ತಾಯಂದಿರು ಮರಣ ಹೊಂದಿದ ಸಂಬಂಧಿಕರಿಂದ ಮರಣದ ಬಗ್ಗೆ ವಿವರವಾದ ಮಾಹಿತಿ ಪಡೆದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ಜಿಪಂ ಉಪ ಕಾರ್ಯದರ್ಶಿ ರಾಜಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಡಾ. ತೀರ್ಥನಾಥ್, ಡಾ. ಪ್ರಭು, ನಗರಸಭಾ ಆಯುಕ್ತ ನಾಗಭೂಷಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ, ತಾಲೂಕಿನ ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

