ತನಿಖಾ ವರದಿ ಬಹಿರಂಗ ಸಾಧ್ಯವಿಲ್ಲ: ಕೆ.ಜೆ. ಜಾರ್ಜ್
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು, ಜೂ.9
ತನಿಕೋಡು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡಿದ್ದು, ವರದಿ ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಸೋಮವಾರ ಸಂಜೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶೂಟೌಟ್ನಲ್ಲಿ ಮೃತಪಟ್ಟ ಕಬೀರ್ ಕುಟುಂಬದವರಿಗೆ ಘೋಷಿಸಿರುವ ರು. 10 ಲಕ್ಷ ಪರಿಹಾರದ ಚೆಕ್ ಸಿದ್ಧವಿದ್ದು, ಸದ್ಯದಲ್ಲಿಯೇ ಅದನ್ನು ಅವರ ಕುಟುಂಬಕ್ಕೆ ತಲುಪಿಸಲಾಗುವುದು ಎಂದರು. ಎಎನ್ಎಫ್ ಕ್ಯಾಂಪ್ಗಳಲ್ಲಿ ಮೂಲಭೂತ ಸವಲತ್ತುಗಳಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರು ಕ್ಯಾಂಪ್ ಸುಧಾರಣೆಗಾಗಿ ರು. 9 ಕೋಟಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಎಎನ್ಎಫ್ ಸಿಬ್ಬಂದಿಗೆ ನೀಡಲಾಗುವ ವಿಶೇಷ ಭತ್ಯೆ ಸೇರಿಕೊಂಡಿದೆ ಎಂದ ಅವರು, ಎಎನ್ಎಫ್ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಸರ್ಕಾರ ಮಾಡಿಲ್ಲ ಎಂದು ಹೇಳಿದರು.
ಮಲೆನಾಡಿನ ಭಾಗದಲ್ಲಿರುವ ಕೆಲವು ನಕ್ಸಲರು, ಸ್ವಯಂ ಸೇವಾ ಸಂಸ್ಥೆ (ಎನ್ಜಿಓ) ಮೂಲಕ ಶರಣಾಗತಿಗೆ ಆಸಕ್ತಿ ವಹಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರಿಯಲಾಗುವುದು. ನಕ್ಸಲಿಯರು ಶಸ್ತ್ರಗಳನ್ನು ತ್ಯಜಿಸಬೇಕು. ಸರ್ಕಾರ ಅವರ ಚಟುವಟಿಕೆ ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು, ಏನೇ ಪರಿಹಾರ ಕಂಡುಕೊಳ್ಳಲು ಅದು ಮಾತುಕತೆಯ ಮೂಲಕ ಮಾತ್ರ ಸಾಧ್ಯ ಎಂದು ತಿಳಿಸಿದರು.
ನಾಳೆ ವಿಚಾರಣೆ
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ತನಿಕೋಡು ಬಳಿ ಕಳೆದ ಏಪ್ರಿಲ್ 19 ರಂದು ರಾತ್ರಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 11 ರಂದು ವಿಚಾರಣೆ ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಶೃಂಗೇರಿ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಮ್ಯಾಜಿಸ್ಟ್ರೀಯಲ್ ವಿಚಾರಣೆ ನಡೆಸಲಿದ್ದಾರೆ.
ರಾತ್ರಿ ಜಾನುವಾರು ಸಾಗಿಸುತ್ತಿದ್ದ ವೇಳೆ ತನಿಕೋಡು ಅರಣ್ಯ ತಪಾಸಣಾ ಕೇಂದ್ರದ ಬಳಿ ಎಎನ್ಎಫ್ ಸಿಬ್ಬಂದಿ ನವೀನ್ ನಾಯಕ್ ಹಾರಿಸಿದ ಗುಂಡಿಗೆ ಕಬೀರ್ ಮೃತಪಟ್ಟಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ಈಗಾಗಲೇ ಎರಡು ಹಂತಗಳಲ್ಲಿ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆಯಲ್ಲಿ ಕಬೀರ್ ಸಂಬಂಧಿಕರು, ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ, ತನಿಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ನವೀನ್ ನಾಯಕ್ ಅವರು ಕೊಲೆ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದರು. ಆದುದರಿಂದ ಅವರು ಜಿಲ್ಲಾಧಿಕಾರಿ ಮುಂದೆ ತನಿಖೆಯ ವೇಳೆಯಲ್ಲಿ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅವರಿಗೆ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಆದುದರಿಂದ ಜೂ. 11 ರಂದು ನಡೆಯಲಿರುವ ವಿಚಾರಣೆಯಲ್ಲಿ ಭಾಗವಹಿಸುವಂತೆ ಅವರಿಗೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಇದರ ಜತೆಗೆ ಕಬೀರ್ ಸಂಬಂಧಿಕರು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವವರು ಅಂದು ಹಾಜರಾಗುವಂತೆ ಜಿಲ್ಲಾಡಳಿತ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

