ಬಸವ ವಸತಿ: ಹಣ ನೀಡಲು ಆಗ್ರಹ
ಚಿಕ್ಕಮಗಳೂರು: ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಕನಕರಾಜ್ ಅರಸ್ ನೇತೃತ್ವದಲ್ಲಿ ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಧರಣಿ ನಡೆಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ 3.25 ಲಕ್ಷ ಮನೆಗಳು ಮಂಜೂರಾಗಿದ್ದು, ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 4520 ಮಂದಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದಿಂದ ಸಕಾಲದಲ್ಲಿ ಮನೆಗಳಿಗೆ ಹಣ ಬಿಡುಗಡೆ ಮಾಡದೆ ಇರುವುದರಿಂದ ಫಲಾನುಭವಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಅನೇಕರು ಗೋಡೆಗಳವರೆಗೆ ಮನೆಗಳನ್ನು ನಿರ್ಮಾಣ ಮಾಡಿದ್ದು, ಮಳೆಗಾಲದಲ್ಲಿ ಅವುಗಳು ಬೀಳುವ ಪರಿಸ್ಥಿತಿ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಾಲ ಮಾಡಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವವರಿಗೆ ಇದೊಂದು ಮನೆಯಲ್ಲ ಎಂದು ಹೇಳಿ ಹಣ ನೀಡಲು ಹಿಂದೇಟು ಹಾಕಲಾಗುತ್ತಿದೆ. ಫಲಾನುಭವಿಗಳ ಗ್ರಾಮದಲ್ಲೇ ರಾಷ್ಟ್ರೀಕೃತ ಬ್ಯಾಂಕ್ಗಳಿದ್ದರೂ ಸಹ ಅವುಗಳನ್ನು ಬಿಟ್ಟು ಸುಮಾರು 25 ಕಿ.ಮೀ. ದೂರದಲ್ಲಿರುವ ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕ್ಗಳಲ್ಲಿ ಖಾತೆ ತೆರೆಯುವಂತೆ ಕಡ್ಡಾಯಗೊಳಿಸಿ ಬಡವರನ್ನು ಮತ್ತಷ್ಟು ಕಂಗಾಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ರಿಂದ 8 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುತ್ತಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಕೇವಲ 20 ಮನೆಗಳನ್ನು ಮಾತ್ರ ಮಂಜೂರು ಮಾಡಲಾಗುತ್ತಿದೆ. ಇದರಿಂದಾಗಿ ಕಡು ಬಡವರಿಗೆ ತುಂಬಾ ತೊಂದರೆಯಾಗುತ್ತಿದ್ದು, ಮಳೆಗಾಲದಲ್ಲಿ ಮನೆಗಳ ಗೋಡೆ ಕುಸಿದು ಹೋಗುವ ಮುನ್ನ ವಸತಿ ಯೋಜನೆಯ ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್, ಜಿಲ್ಲಾ ಮಾಜಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ, ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ, ಮುಖಂಡರಾದ ಕೋಟೆ ರಂಗನಾಥ್, ಮನೋಹರ, ಮೋಹನ್ ಕುಮಾರ್, ಚಂದ್ರಶೇಖರ್, ವಿರೂಪಾಕ್ಷ, ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

