ನೇತ್ರಾ ಉಚಿತ ಶಿಬಿರ, ಶಸ್ತ್ರಚಿಕಿತ್ಸೆ
ಕಡೂರು: ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಕಡೂರಿನ ಶರತ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣು ಪರೀಕ್ಷಾ ಶಿಬಿರ ಮತ್ತು ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ಡಿ.ಆರ್.ರಂಗಪ್ಪ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಪ್ರತೀ ಸಲದಂತೆ ಮಂಗಳವಾರ, ಗುರುವಾರ ಮತ್ತು ಶನಿವಾರ ಕಣ್ಣಿನ ಪರೀಕ್ಷೆ ನಡೆಸಲಾಗುವುದು. ಪ್ರತೀ ಬುಧವಾರ, ಶುಕ್ರವಾರ ಮತ್ತು ಭಾನುವಾರ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಬಿಪಿಎಲ್ ಕಾರ್ಡ್ದಾರರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿ ಮಸೂರ ಅಳವಡಿಸಿ ಕಪ್ಪು ಕನ್ನಡಕ ನೀಡಲಾಗುವುದು. ಶಸ್ತ್ರ ಚಿಕಿತ್ಸೆ ಕಡೂರಿನ ಶರತ್ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ. ಮಾಹಿತಿಗಾಗಿ 9448607394 ಮತ್ತು 08267-221044ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ರೈತರ ಸಾಲ ಮನ್ನಾಕ್ಕೆ ಹಸಿರು ಸೇನೆ ಆಗ್ರಹ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ವೈಫಲ್ಯದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶಶಿಧರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತಾಲೂಕಿನ ಲಕ್ಯಾ, ಕಸಬಾ ಹೋಬಳಿಗಳ ಕೆಲವು ಭಾಗ, ಅಂಬಳೆ ಹೋಬಳಿಗಳಲ್ಲಿ ಬರಗಾಲದ ಛಾಯೆ ತಾಂಡವವಾಡುತ್ತಿದೆ. ಮುಂಗಾರು ಪ್ರಾರಂಭದಲ್ಲಿ ಭರವಸೆ ಮೂಡಿದ ಮಳೆರಾಯ ದಿನ ಕಳೆದಂತೆ ರೈತರ ಮೇಲೆ ಮುನಿಸು ತೋರುತ್ತಿದ್ದಾನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭರಣಿ ಮಳೆ ಉತ್ತಮವಾಗಿ ಬಂದಿದ್ದರಿಂದ ಅಂಬಳೆ ಹೋಬಳಿಯಾದ್ಯಂತ ರೈತರು ಆಲೂಗೆಡ್ಡೆ ಬಿತ್ತನೆ ಮಾಡಿದ್ದರು, ಕಳಪೆ ಗುಣಮಟ್ಟದ ಆಲೂಗೆಡ್ಡೆ ಮತ್ತು ಬಟಾಣಿ ಬಿತ್ತನೆ ಬೀಜದ ಪರಿಣಾಮ ಶೇ.60 ರಿಂದ 70 ಭಾಗ ಹಾಳಾಗಿವೆ. ರೈತರು ಬ್ಯಾಂಕ್, ಸೇವಾ ಸಹಕಾರ ಸಂಘ ಮತ್ತು ಚಿನ್ನ ಗಿರವಿ ಇಟ್ಟು ಸಾಲ ಮಾಡಿ ಬೆಳೆ ಮಾಡಿದ್ದು, ಪ್ರಕೃತಿಯ ಮುನಿಸಿನಿಂದ ರೈತರು ದಿವಾಳಿಯ ಅಂಚು ತಲುಪಿದ್ದಾರೆ. ಕಳಪೆ ಗುಣಮಟ್ಟದ ಬೀಜ ಮಾರಾಟಗಾರರ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ರೈತರು ಪ್ರತಿವರ್ಷ ನಷ್ಟ ಅನುಭವಿಸಬೇಕಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಜಾರಿ
ಚಿಕ್ಕಮಗಳೂರು: ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಹೋಬಳಿ ಮಟ್ಟದಲ್ಲಿ ವಿವಿಧ ಆಧಿಸೂಚಿತ ಬೆಳೆಗಳನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ, ಸಂಸ್ಥೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.ಈ ಯೋಜನೆಯಡಿ ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಲಾಗಿರುವ ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರು ಜೂ. 30 ರೊಳಗೆ ವಿಮಾ ಕಂತನ್ನು ಪಾವತಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

