ಚಿಕ್ಕಮಗಳೂರು

ಇಂದಿನಿಂದ ಕಾಂಗ್ರೆಸ್ 'ಭಾರತ ನಿರ್ಮಾಣ ಯಾತ್ರೆ'

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮಾ.10
ಕೆಪಿಸಿಸಿ ಸೂಚನೆಯ ಮೇರೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮಂಗಳವಾರದಿಂದ ಎಂಟು ದಿನಗಳ ಕಾಲ ಭಾರತ ನಿರ್ಮಾಣ ಯಾತ್ರೆ ಹಮ್ಮಿಕೊಂಡಿದೆ.
ಈ ಜಾಥಾ ಜಿಲ್ಲೆಯ 12 ಬ್ಲಾಕ್‌ಗಳಲ್ಲಿ ಸಂಚರಿಸಲಿದ್ದು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಮಂಗಳವಾರ ಬೆಳಗ್ಗೆ ಮೂಡಿಗೆರೆ ತಾಲೂಕಿನಲ್ಲಿ ಈ ಯಾತ್ರೆಯನ್ನು ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರು ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಇತರೆ ಜನಪರ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಕೊಡಲಾಗುವುದು ಎಂದರು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಜಿಲ್ಲೆಯಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಉಭಯ ಜಿಲ್ಲೆಗಳಲ್ಲಿ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಆದರೆ, ಜಿಲ್ಲೆಯಲ್ಲಿ ಇತರೆ ಪ್ರಮುಖ ರಾಜಕೀಯ ಪಕ್ಷದವರಿಗೆ ತಮ್ಮ ಅಭ್ಯರ್ಥಿ ಯಾರೆಂದು ಈವರೆಗೆ ಹೇಳಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಕ್ಷೇತ್ರದಲ್ಲಿ ನಾಲ್ಕು ಬಾರಿ ಜಯ ಗಳಿಸಿರುವ ಬಿಜೆಪಿಗೂ ಈ ಪರಿಸ್ಥಿತಿ ಬಂದಿವೆ ಎಂದು ವ್ಯಂಗ್ಯವಾಡಿದರು.
ಬಾಲಿಶ ಹೇಳಿಕೆ: ಶಾಸಕ ಸಿ.ಟಿ. ರವಿ ಅವರು ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ, ಅವರು ತಮ್ಮ ಅವಧಿಯಲ್ಲಿ ಕ್ಷೇತ್ರದಲ್ಲಿ ಯಾವ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆಂಬುದು ಪ್ರಶ್ನಿಸಬೇಕಾಗಿದೆ. ಸಗೀರ್ ಅಹಮದ್ ಅವರು ಚಿಕ್ಕಮಗಳೂರು ಕ್ಷೇತ್ರದ ಶಾಸಕರಾಗಿದ್ದಾಗ ಬಡವರಿಗೆ ನಿವೇಶನ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸ ಮಾಡಿದ್ದರು. ಸಿ.ಟಿ. ರವಿ ಅವರು ಶಾಸಕರಾಗಿದ್ದಾಗ ಕೈಗೆತ್ತಿಕೊಳ್ಳಲಾಗಿದ್ದ ಚಿಕ್ಕಮಗಳೂರಿನ ಬಸವನಹಳ್ಳಿ ಕೆರೆ ಹಾಗೂ ಕೋಟೆ ಕೆರೆ ಅಭಿವೃದ್ಧಿ ಕೆಲಸಗಳು ಯಾವ ಮಟ್ಟದಲ್ಲಿ ಪೂರ್ಣಗೊಂಡಿವೆ ಎಂಬುದು ಜನರಿಗೆ ತಿಳಿದಿದೆ. ಸಂಸದರ ಬಗ್ಗೆ ಬಾಲಿಶ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ನಗರಸಭೆಯ ಮಾಜಿ ಸದಸ್ಯ ಸಂದೀಪ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.