ಕಾಫಿ ನಾಡಲ್ಲಿ ಮಾಜಿ ಸಚಿವರ ಮಧ್ಯೆ ಹಣಾಹಣಿ
-ಆರ್. ತಾರಾನಾಥ್
ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನಾಗಿ ಕರಾವಳಿಯವರನ್ನೇ ಆಯ್ಕೆ ಮಾಡಿಕೊಂಡಿವೆ.
ಇಲ್ಲಿನ ಇನ್ನೊಂದು ವಿಶೇಷವೆಂದರೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳು ಮಾಜಿ ಸಚಿವರುಗಳು.
ಕರಾವಳಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೆ. ಜಯಪ್ರಕಾಶ್ ಹೆಗ್ಡೆ, ಜೆಡಿಎಸ್ ನಿಂದ ಧನಂಜಯಕುಮಾರ್, ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡಿದ್ದಾರೆ. ಈ ಮೂವರಲ್ಲಿ ಜಯಪ್ರಕಾಶ್ ಹೆಗ್ಡೆ ಇದೇ ಕ್ಷೇತ್ರದವರು. ಧನಂಜಕುಮಾರ್ ಹಾಗೂ ಶೋಬಾ ಕರಂದ್ಲಾಜೆ ದಕ್ಷಿಣ ಕನ್ನಡ ಜಿಲ್ಲೆಯವರು. ಅಂದರೆ ಹೊರಗಿನವರು.
ಕೆ. ಜಯಪ್ರಕಾಶ್ ಹೆಗ್ಡೆ: ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿ ಸ್ಪರ್ಧೆ ಮಾಡಿರುವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೂಲತಹ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದವರು.
ಅವರು 1994ರಲ್ಲಿ ಬ್ರಹ್ಮಾವರ ಕ್ಷೇತ್ರದಿಂದ ವಿಧಾನಸಭೆಗೆ ಜನತಾದಳದಿಂದ ಸ್ಪರ್ಧೆ ಮಾಡಿ ಜಯಗಳಿಸಿದ್ದರು. ಆಗ ಜನತಾದಳ ಸರ್ಕಾರದಲ್ಲಿ ಬಂದರು ಮತ್ತು ಮೀನುಗಾರಿಕೆ ಸಚಿವರಾಗಿದ್ದರು.
2009ರಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಆಗ ಅವರು 3,74,423 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
2012ರಲ್ಲಿ ನಡೆದ ಉಪ ಚುನಾವಣೆಯಲ್ಲಿ 3,52,999 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಮತ್ತೆ ಸ್ಪರ್ಧೆ ಮಾಡಿದ್ದಾರೆ.
ಧನಂಜಯಕುಮಾರ್: ಧನಂಜಯಕುಮಾರ್ ಅವರ ಮೊದಲ ರಾಜಕೀಯ ಜೀವನ ಪ್ರಾರಂಭವಾಗಿದ್ದು ಬಿಜೆಪಿಯ ಮೂಲಕ. ಅವರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಜಯಗಳಿಸಿದ್ದರು. ಕಾಂಗ್ರೆಸ್ನ ಹಿರಿಯ ನಾಯಕರಾದ ಜನಾರ್ಧನ ಪೂಜಾರಿಯವರನ್ನು ಚುನಾವಣೆಯಲ್ಲಿ ಮಣಿಸಿದ್ದರು. 1996ರಲ್ಲಿ ಅವರು ಕೇಂದ್ರದ ಪ್ರವಾಸೋದ್ಯಮ ಸಚಿವರಾಗಿದ್ದರು. ನಂತರದಲ್ಲಿ 1999ರಲ್ಲಿ ಕೇಂದ್ರ ಹಣಕಾಸು ರಾಜ್ಯ ಸಚಿವರಾಗಿ, 2000 ರಲ್ಲಿ ಜವಳಿ ಸಚಿವರಾಗಿದ್ದರು. ಈ ಬಾರಿ ಚುನಾವಣೆಯಲ್ಲಿ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ.
ಶೋಭಾ ಕರಂದ್ಲಾಜೆ:
ಶೋಭಾ ಕರಂದ್ಲಾಜೆ ಅವರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಾರ್ವಾಕ ಗ್ರಾಮ. ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂಲಕ ಸಂಘಪರಿವಾರದಲ್ಲಿ ಗುರುತಿಸಿಕೊಂಡರು. ಅವರು 2004ರಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದರು. 2008ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಜಯಗಳಿಸಿದ್ದರು. ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. 2010ರಲ್ಲಿ ಜಗದೀಶ್ ಶೆಟ್ಟರ್ ಅವರ ಮಂತ್ರಿ ಮಂಡಲದಲ್ಲಿ ಇಂಧನ ಸಚಿವರಾಗಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆ: ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾದ ನಂತರ ಅಂದರೆ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕರಾವಳಿಯವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದವು. ಜೆಡಿಎಸ್ ಪಕ್ಷ ಸಿಪಿಐಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚಿಕ್ಕಮಗಳೂರು ಜಿಲ್ಲೆಯವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿತ್ತು.
2012ರಲ್ಲಿ ನಡೆದ ಉಪ ಚುನಾವಣೆಯಲ್ಲೂ ಸಹ ಬಿಜೆಪಿ ಮತ್ತು ಕಾಂಗ್ರೆಸ್ ಕರಾವಳಿ ಜಿಲ್ಲೆಯವರನ್ನು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದವು. ಜೆಡಿಎಸ್ ಮಲೆನಾಡಿನವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿತ್ತು. ಆದರೆ, ಈ ಚುನಾವಣೆ ಬಿಜೆಪಿ, ಕಾಂಗ್ರೆಸ್ ಕರಾವಳಿಯವರನ್ನು ಮತ್ತೆ ಕಣಕ್ಕೆ ಇಳಿಸಿವೆ. ಜೆಡಿಎಸ್ ಸಹ ಕರಾವಳಿಯ ಜಿಲ್ಲೆಯವರನ್ನು ಕಣಕ್ಕೆ ಇಳಿಸಿದೆ. ಪ್ರಮುಖ ರಾಜಕೀಯ ಪಕ್ಷಗಳು ಈ ಬಾರಿ ಅಭ್ಯರ್ಥಿಯ ಆಯ್ಕೆಯಲ್ಲಿ ಕರಾವಳಿಗೆ ಪ್ರಾತಿನಿಧ್ಯ ನೀಡಿವೆ.
ಹೆಚ್ಚು ಮತದಾರರು
2012ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ 12,03,466 ಮತದಾರರು ಇದ್ದರು. ಈ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 13,51,245ಕ್ಕೆ ಏರಿದೆ. ಈ ಎರಡು ಜಿಲ್ಲೆಗಳನ್ನು ಪ್ರತ್ಯೇಕವಾಗಿ ವಿಂಗಡಿಸಿದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 6,55,276, ಉಡುಪಿ ಜಿಲ್ಲೆಯಲ್ಲಿ 6,95,969 ಮತದಾರರು ಇದ್ದಾರೆ. ಅಂದರೆ ಚಿಕ್ಕಮಗಳೂರು ಜಿಲ್ಲೆಗೆ ಹೋಲಿಕೆ ಮಾಡಿದರೆ ಉಡುಪಿ ಜಿಲ್ಲೆಯಲ್ಲಿ 40,693 ಹೆಚ್ಚು ಮತದಾರರು ಇದ್ದಾರೆ. ಕರಾವಳಿ ಜಿಲ್ಲೆಯವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಇದು ಸಹ ಕಾರಣ ಇರಬಹುದು. ಒಟ್ಟಾರೆ ಮೂರು ರಾಜಕೀಯ ಪಕ್ಷಗಳು ಕರಾವಳಿ ಜಿಲ್ಲೆಯವರಿಗೇ ಮಣೆ ಹಾಕಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

