ಚಿಕ್ಕಮಗಳೂರು

'ಈ ಬಾರಿ ಕೇಂದ್ರದಲ್ಲಿ ಬಿಎಸ್ಪಿ ನಿರ್ಣಾಯಕ'

Published On :

ಚಿಕ್ಕಮಗಳೂರು: ಭಾರತದ ಸಂವಿಧಾನವನ್ನು ಪಕ್ಷದ ಪ್ರಣಾಳಿಕೆ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಈ ಬಾರಿ ಕೇಂದ್ರದಲ್ಲಿ ಆಡಳಿತ ನಡೆಸಲು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಎಸ್ಪಿಯ ಸಂಯೋಜಕ ಕೆ.ಟಿ. ರಾಧಾಕೃಷ್ಣ ಹೇಳಿದ್ದಾರೆ.
ಈ ಬಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಎಸ್ಪಿಯಿಂದ ಸ್ಪರ್ಧೆ ಮಾಡುತ್ತಿರುವ ಜಾಕೀರ್ ಹುಸೇನ್ ಅವರಿಗೆ ಮತ ನೀಡಿ ಪಕ್ಷವನ್ನು ಬಲಪಡಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮತದಾರರಿಗೆ ಮನವಿ ಮಾಡಿದರು.
ಕಳೆದ 60 ವರ್ಷಗಳಿಂದ ದೇಶವನ್ನು ಆಳಿದ ರಾಜಕೀಯ ಪಕ್ಷಗಳಿಗೆ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ನೀತಿ ಮರೆತು ಹೋಗಿದೆ. ದೇಶದಲ್ಲಿ ಅರಾಜಕತೆ, ಬಡತನ, ನಿರುದ್ಯೋಗ, ಅಪೌಷ್ಟಿಕತೆ, ಆರ್ಥಿಕ ಅಸಮಾನತೆ, ಮುಂತಾದ ಗಂಭೀರ ಸಮಸ್ಯೆಗಳು ಎದುರಾಗಿವೆ ಎಂದರು.
ಜಿಲ್ಲೆಯಲ್ಲಿ ಪಕ್ಷ ಸದೃಢವಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಪಕ್ಷದ ಓರ್ವ ಸದಸ್ಯರು ಇದ್ದಾರೆ. 2 ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷ ಅಧಿಕಾರದಲ್ಲಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 112 ಸದಸ್ಯರಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಧಾರ್ಮಿಕ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಎಲ್ಲಾ ಜಾತಿ ಬಡವರು ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಇದು, ಪಕ್ಷದ ಅಭ್ಯರ್ಥಿಯ ಗೆಲವಿಗೆ ಸಹಕಾರಿಯಾಗಲಿದೆ ಎಂದರು.
ಬಿಎಸ್ಪಿ ಜಿಲ್ಲಾಧ್ಯಕ್ಷ ಜಾಕೀರ್ ಹುಸೇನ್ ಅವರನ್ನು ಪಕ್ಷ ಈ ಬಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡುವಂತೆ ಸೂಚನೆ ಮಾಡಿದೆ. ಅವರು ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದವರಾಗಿದ್ದು, ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಜಾಕೀರ್ ಹುಸೇನ್ ಮಾತನಾಡಿ, ತಾವು 2008ರ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೆ. ಕಳೆದ 17 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ವಿಧಾನಸಭಾ ಕ್ಷೇತ್ರವಾರು ಪಕ್ಷದ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.