ರಾಜ್ಯ ಸರ್ಕಾರಿ ನೌಕರರಿಗೂ ಶೇ.10 ತುಟ್ಟಿಭತ್ಯೆಗೆ ಆಗ್ರಹ
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ರೀತಿಯಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಶೇ. 10ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.
ಕೇಂದ್ರ ಸರ್ಕಾರವು ಬೆಲೆ ಸೂಚ್ಯಂಕ ಆಧರಿಸಿ ತನ್ನ ನೌಕರರಿಗೆ ಜನವರಿ 1 ಕ್ಕೆ ಪೂರ್ವಾನ್ವಯವಾಗುವಂತೆ ಶೇ. 10 ರಷ್ಟು ತುಟ್ಟಿ ಭತ್ಯೆಯನ್ನು ಈಗಾಗಲೇ ಮಂಜೂರು ಮಾಡಿದೆ. ಅದೇ ರೀತಿ ರಾಜ್ಯ ಸರ್ಕಾರ ಸಹ ತನ್ನ ನೌಕರರಿಗೆ ಕೇಂದ್ರದ ಮಾದರಿಯಲ್ಲೇ ತುಟ್ಟಿ ಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ಮಂಜೂರು ಮಾಡಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎ. ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.
ನೆರವಿಗೆ ಧಾವಿಸಿ: ಸಂಘದ ಮನವಿ ಮೇರೆಗೆ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿಗಳು ಈಗಾಗಲೇ ಆಯವ್ಯಯದಲ್ಲಿ ಘೋಷಿಸಿರುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಮೂಲಕ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ನೌಕರರ ನೆರವಿಗೆ ಧಾವಿಸಬೇಕು ಎಂದು ಹೇಳಿದ್ದಾರೆ.
ಹೈದರಾಬಾದ್- ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 371(ಜೆ) ಅಧಿನಿಯಮವನ್ನು ಅನುಷ್ಠಾನಕ್ಕೆ ತರಲು ರೂಪುರೇಷೆ ಸಿದ್ಧಪಡಿಸಿದೆ. ಆದರೆ, ವಿಧೇಯಕ ಅಂತಿಮಗೊಳ್ಳುವವರೆಗೆ ಎಲ್ಲಾ ಇಲಾಖೆಗಳ ಮುಂಬಡ್ತಿ ತಡೆಹಿಡಿದಿರುವುದರಿಂದ ನಿವೃತ್ತಿ ಅಂಚಿನಲ್ಲಿರುವ ನೌಕರರು ಬಡ್ತಿಯಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಆಡಳಿತಾತ್ಮಕ ಸಮಸ್ಯೆ: ಕೆಲವೊಂದು ಇಲಾಖೆಗಳಲ್ಲಿ ಆಡಳಿತಾತ್ಮಕ ಸಮಸ್ಯೆಗಳು ಸಹ ಇದರಿಂದಾಗಿ ಉದ್ಭವಿಸಿ ಅಧಿಕಾರಿ ನೌಕರರು ಸಾಮಾಜಿಕ ಅನ್ಯಾಯಕ್ಕೆ ತುತ್ತಾಗುತ್ತಿದ್ದಾರೆ ಎಂದಿರುವ ಅವರು, ಈ ಹಿನ್ನೆಲೆಯಲ್ಲಿ ಮುಂಬಡ್ತಿ ತಡೆ ಹಿಡಿದಿರುವುದನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಮಹಿಳಾ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಬಾರದು ಎಂದು ಒತ್ತಾಯಿಸಿರುವ ಅವರು, ಅಂತಹ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಚುನಾವಣಾ ಕಾರ್ಯದಲ್ಲಿ ನಿಯೋಜನೆಗೊಳ್ಳುವ ನೌಕರರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

