ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮಾ. 30
ಡೆಂಘೀ, ಚಿಕೂನ್ಗುನ್ಯ, ಮಲೇರಿಯಾ ಹಾಗೂ ಮಂಗನ ಕಾಯಿಲೆಯಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಘೀ ಹಾಗೂ ಮಂಗನಕಾಯಿಲೆಗಳ ಸ್ಥಿತಿಗತಿಗಳ ಬಗ್ಗೆ ಅವಲೋಕನ ಮಾಡಿ ಮಾತನಾಡಿ, ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಪ್ರಕರಣಗಳು ಈಗಾಗಲೇ ವರದಿ ಆಗಿದ್ದು, ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ದುರಸ್ತಿ ಕಾರ್ಯ: ಕೆಲವು ರೋಗಗಳು ಸೊಳ್ಳೆಯಿಂದ ಹರಡುತ್ತಿದ್ದು, ಇವುಗಳ ಉತ್ಪತ್ತಿಗೆ ಕಾರಣವಾಗುವ ತಾಣಗಳನ್ನು ನಿರ್ಮೂಲನೆಗೊಳಿಸಲು ವ್ಯವಸ್ಥಿತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ಮಾಡಬೇಕು, ನೀರಿನ ಪೈಪ್ ಒಡೆದು ಹೋದಲ್ಲಿ ಶೀಘ್ರದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಚರಂಡಿಗಳಲ್ಲಿ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ವ್ಯವಸ್ಥೆ ಹಾಗೂ ಘನ ಹಾಗೂ ದ್ರವ ತ್ಯಾಜ್ಯಗಳ ಸಕಾಲಿಕ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಗ್ರಾಮ ನೈರ್ಮಲ್ಯ ಸಮಿತಿಗಳ ಸಭೆ ಕರೆಯುವುದರೊಂದಿಗೆ ಗ್ರಾಮ ಪರಿಸರದ ಸುಸ್ಥಿತಿಗೆ ಒತ್ತು ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು. ಅರಣ್ಯದಲ್ಲಿ ಮಂಗಗಳು ಸತ್ತಿರುವುದು ಕಂಡು ಬಂದರೆ ತಕ್ಷಣ ಅರಣ್ಯ ಇಲಾಖೆಯವರು ಈ ಬಗ್ಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ಸ್ವಚ್ಛತೆಗೆ ಆದ್ಯತೆ ನೀಡಿ: ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರೊಂದಿಗೆ ಸಂಪರ್ಕ ಸಭೆಗಳ ಮೂಲಕ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಬೇಕು. ಹೋಟೆಲ್ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಸಂಬಂಧಪಟ್ಟ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಬೇಕೆಂದು ಸಲಹೆ ನೀಡಿದರು.
ಔಷಧಿ ದಾಸ್ತಾನುಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಔಷಧಿಯ ಕೊರತೆಯಾಗದಂತೆ ಎಚ್ಚರದಿಂದ ಕಾರ್ಯನಿರ್ವಹಿಸಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ಜನ್ ಡಾ. ಆರ್. ದೊಡ್ಡಮಲ್ಲಪ್ಪ, ನಗರಸಭಾ ಆಯುಕ್ತ ನಾಗಭೂಷಣ್, ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

