ಚಿಕ್ಕಮಗಳೂರು

ಉಸ್ತುವಾರಿ ಸಚಿವರ ಬದಲಾಯಿಸಿ

Published On :

ಕ.ಪ್ರ.ವಾರ್ತೆ    ಚಿಕ್ಕಮಗಳೂರು    ಮೇ 5
ಜಿಲ್ಲಾ ಉಸ್ತುವಾರಿ ಸಚಿವರನ್ನು ಈ ಜಿಲ್ಲೆಯಿಂದ ಮುಕ್ತಗೊಳಿಸಿ ಬೇರೋಬ್ಬರನ್ನು ನೇಮಿಸುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ದೇವರಾಜ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸುತ್ತಿಲ್ಲ. ಕಡೂರು, ತರೀಕೆರೆ ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಕಾಟಾಚಾರದ ಸಭೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಪತ್ರಿಕಾ ಗೋಷ್ಠಿಯಲ್ಲಿ ಎಚ್ಚರಿಸಿದರು.
ಮಸಗಲಿ ಅರಣ್ಯ ವ್ಯಾಪ್ತಿಯಲ್ಲಿ ಗಡಿ ಗುರುತು ಕೆಲಸ ಆರಂಭಗೊಂಡಿದ್ದು, ಪರಿಶಿಷ್ಟ ಜನಾಂಗ ವಾಸಿಸುವ 10 ಗ್ರಾಮಗಳ ಜನರು ತೆರವುಗೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣ ಗಡಿ ಗುರುತಿಸುವ ಕೆಲಸ ನಡೆದಿದೆ. ಹೊರಕೆರೆ, ತೋಟದಮಕ್ಕಿ, ನಿಡಗೋಡು, ಮಲ್ಲಂದೂರು, ಲಕ್ಷ್ಮೀಪುರ ಸೇರಿದಂತೆ 10 ಗ್ರಾಮಗಳ ಜನರನ್ನು ತೆರವುಗೊಳಿಸುವ ಕಾರ್ಯ ಬಾಕಿ ಉಳಿದಿದೆ ಎಂದು ಹೇಳಿದರು.
ಗಡಿ ಗುರುತು: 10 ಎಕರೆವರೆಗಿನ ಒತ್ತುವರಿದಾರರನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸುವುದಿಲ್ಲವೆಂದು ಈ ಹಿಂದೆ ಸರ್ಕಾರ ತಿಳಿಸಿತ್ತು. ಜಂಟಿ ಸರ್ವೆ ನಡೆಸದೆ ಅರಣ್ಯ ಇಲಾಖೆ ವತಿಯಿಂದ ಗಡಿ ಗುರುತಿಸುವ ಕೆಲಸ ಆರಂಭಗೊಂಡಿದೆ. ಈ ಕುರಿತು ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಧ್ವನಿ ಎತ್ತದಿದ್ದರೆ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಚುನಾವಣೆ ಬಳಿಕ ರಾಜ್ಯ ಸರ್ಕಾರ ಅನೇಕ ಜನವಿರೋಧಿ ನೀತಿಗಳನ್ನು ಕೈಗೊಂಡಿದೆ. ಬಸ್ ದರ ಹೆಚ್ಚಳಗೊಳಿಸುವ ಮೂಲಕ ಬಡವರ ಜೇಬಿಗೆ ಕತ್ತರಿ ಹಾಕಿದೆ. ಟೋಲ್ ಗೇಟ್ ಶುಲ್ಕ 35 ರು.ಗಳಿಂದ 135 ರು.ಗಳವರೆಗೆ ಹೆಚ್ಚಿಸಲಾಗಿದೆ. ವಿದ್ಯುತ್ ದರ ಹೆಚ್ಚಿಸುವ ಸಾಧ್ಯತೆಗಳಿವೆ. ಕೂಡಲೇ ಸರ್ಕಾರ ಜನವಿರೋಧಿ ನೀತಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ವರದಿ ತಿರಸ್ಕರಿಸಿ: ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ಸರ್ಕಾರದ ತೀರ್ಮಾನ ಅವೈಜ್ಞಾನಿಕವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಆಯಾ ಪಂಚಾಯಿತಿ ಮಟ್ಟದಿಂದ ಪಡೆದುಕೊಂಡು ಗ್ರಾಮೀಣ ಪ್ರದೇಶಕ್ಕೆ ವರದಿಯಿಂದ ಅನಾನುಕೂಲವಾಗುತ್ತಿದ್ದು, ತಕ್ಷಣ ವರದಿಯನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಜಿಲ್ಲಾ ಕಾರ್ಯದರ್ಶಿ ರೆಹಮಾನ್, ಮುಖಂಡ ಭೈರೇಗೌಡ ಉಪಸ್ಥಿತರಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.