ಗುಣಮಟ್ಟದ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 7
ಮುಂಬರುವ ಮುಂಗಾರು ಹಂಗಾಮಿಗೆ ರೈತರ ಬೇಡಿಕೆ ಅನುಗುಣವಾಗಿ ಉತ್ತಮ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಮಾರಾಟಾಧಿಕಾರಿಗಳಿಗೆ ಸೂಚನೆ ನೀಡಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಸರಬರಾಜು ಹಾಗೂ ಸಮರ್ಪಕ ವಿತರಣೆ ಬಗ್ಗೆ ಚರ್ಚಿಸಲು ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಮಾರಾಟಾಧಿಕಾರಿಗಳು ಮತ್ತು ರಸಗೊಬ್ಬರ ಮಾರಾಟಗಾರರ ಸಂಘದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭರದ ಬಿತ್ತನೆ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗುವ ನಿರೀಕ್ಷೆ ಇದೆ. ರೈತರ ಕೃಷಿ ಚಟುವಟಿಕೆಗೆ ಅಗತ್ಯಕ್ಕನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸರಬರಾಜು ಮತ್ತು ಸಮರ್ಪಕ ವಿತರಣೆಯಾಗುವಂತೆ ಕಾರ್ಯಪ್ರವೃತ್ತರಾಗಬೇಕು. ವಿತರಣೆಯಲ್ಲಿ ಯಾವುದೇ ಗೊಂದಲ ಹಾಗೂ ದೂರಿಗೆ ಅವಕಾಶ ಆಗದಂತೆ ಎಚ್ಚರ ವಹಿಸಬೇಕು ಎಂದರು.
ಕಳಪೆ ರಸಗೊಬ್ಬರ ಹಾಗೂ ತೂಕದಲ್ಲಿ ವ್ಯತ್ಯಾಸವಾಗದಂತೆ ಸಕಾಲದಲ್ಲಿ ಗೊಬ್ಬರ ಪೂರೈಸಬೇಕು ಹಾಗೂ ಕಳಪೆ ಅಥವಾ ನಕಲಿ ರಸಗೊಬ್ಬರ ಸರಬರಾಜಿನಿಂದ ರೈತರ ವರ್ಷದ ವರಮಾನ ಹಾಳಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಲು ಕಾರಣವಾಗುತ್ತದೆ. ಈ ರೀತಿ ಮಾರಾಟ ಕಂಡುಬಂದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ರಶೀದಿ ನೀಡಬೇಕು: ರಸಗೊಬ್ಬರ ತಯಾರಿಕಾ ಸಂಸ್ಥೆಗಳು ನಿಗದಿಪಡಿಸಿರುವ ಎಂ.ಆರ್.ಪಿ. ದರದಲ್ಲಿಯೇ ಮಾರಾಟ ಮಾಡಬೇಕು ಹಾಗೂ ಮಾರಾಟದ ಸಮಯದಲ್ಲಿ ಪ್ರತಿಯೊಬ್ಬ ರೈತರಿಗೆ ರಶೀದಿ ನೀಡಬೇಕು. ಇದರ ಬಗ್ಗೆ ಕೃಷಿ ಇಲಾಖಾ ಅಧಿಕಾರಿಗಳು ನಿಗಾವಹಿಸಿ ಪರಿಶೀಲಿಸಬೇಕು ಎಂದರು.
ಕೃಷಿ ಪರಿಕರಗಳ ಗುಣಮಟ್ಟ, ಸಕಾಲದಲ್ಲಿ ಪೂರೈಕೆ ಹಾಗೂ ನಿಗದಿತ ದರದಲ್ಲಿ ಅವುಗಳ ಮಾರಾಟ ಮಾಡುವುದರ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸಹಾಯಕ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ವಿಚಕ್ಷಣಾ ತಂಡವನ್ನು ರಚಿಸಲಾಗಿದೆ ಎಂದರು.
ರೈತರಿಗೆ ಕೃಷಿ ಚಟುವಟಿಕೆ ನಿರ್ವಹಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ರಸಗೊಬ್ಬರ ವಿತರಣೆ ಸಮರ್ಪಕವಾಗಿ ರೈತರಿಗೆ ನೀಡಲು ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರಾಜು, ಜಿಪಂ ಉಪ ಕಾರ್ಯದರ್ಶಿ ರಾಜ್ ಗೋಪಾಲ್, ತಾಲೂಕು ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ಕಂಪನಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

