ಚಿಕ್ಕಮಗಳೂರು

ಬೇಸಿಗೆ ರಜೆ ಮುಕ್ತಾಯ: ನಾಳೆ ಶಾಲೆ ಶುರು

Published On :

ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಮೇ 29
ಬೇಸಿಗೆ ರಜೆ ಮುಕ್ತಾಯಗೊಂಡಿದ್ದು, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಮೊದಲ ದಿನವಾದ ಮೇ 31 ರಂದು ಶಾಲೆಗಳು ಪುನಾರಂಭಗೊಳ್ಳಲಿದೆ.
ಶಾಲೆ ಪುನಾರಂಭದ ಮುನ್ನ ದಿನವಾದ ಶುಕ್ರವಾರದಂದು ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಶಾಲೆಗೆ ಬರಬೇಕು. ಶಾಲೆಯ ಪರಿಸರ ಶುಚಿತ್ವ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತರಗತಿ ಕೊಠಡಿಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಬಿ. ರಾಜಪ್ಪ ತಿಳಿಸಿದ್ದಾರೆ.
ಮೇ 31 ರಂದು ಶಾಲೆಗೆ ಮಕ್ಕಳು ಆಗಮಿಸಲಿದ್ದು, ಅಂದು ಶಾಲಾ ಮಕ್ಕಳಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಶಿಕ್ಷಕರು ಪಠ್ಯಪುಸ್ತಕ ವಿತರಿಸಲಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಶೇ. 90 ಪಠ್ಯಪುಸ್ತಕ ಬಂದಿವೆ ಎಂದು ಹೇಳಿದರು.
ಮೊದಲ ದಿನದಂದು ಶಾಲಾ ಪ್ರಾರಂಭೋತ್ಸವ ನಡೆಯಲಿದ್ದು, ಮಕ್ಕಳಿಗೆ ಬಿಸಿಯೂಟದ ಜತೆಗೆ ಸಿಹಿಯೂಟವನ್ನು ವಿತರಣೆ ಮಾಡಲಾಗುವುದು. ಜೂನ್ 2 ರಂದು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪಾಠ ಪ್ರವಚನಗಳು ಆರಂಭಗೊಳ್ಳಲಿವೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಎಲ್ಲಾ ಸಿದ್ಧತೆಯನ್ನೂ  ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತಾವನೆ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಕ್ಷೀರ ಭಾಗ್ಯದಡಿಯಲ್ಲಿ ಹಾಲು ವಿತರಣೆ ಮಾಡಲಾಗುತ್ತಿದೆ. ಆದರೆ, ಅಂಧ ಮಕ್ಕಳ ಶಾಲೆ, ಗಿರಿಜನ ಇಲಾಖೆಯ ಆಶ್ರಮ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಕ್ಕಳಿಗೆ ಹಾಲು ವಿತರಣೆಯಾಗುತ್ತಿಲ್ಲ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು, ಮಧ್ಯಾಹ್ನ ಉಪಹಾರ ಯೋಜನೆಯ ಸಹ ನಿರ್ದೇಶಕ ಜಯಕುಮಾರ್ ಅವರು ಜಿಲ್ಲಾ ಪಂಚಾಯ್ತಿಗೆ ಸೂಚನೆ ನೀಡಿದ್ದಾರೆ.
ಬಿಸಿಯೂಟ ಯೋಜನೆ ಬಗ್ಗೆ ಪರಿಶೀಲನೆ ನಡೆಸಲು ಜಯಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿದ್ದರು. ಅವರು ಬುಧವಾರದಂದು ಎನ್.ಆರ್. ಪುರ ಹಾಗೂ ಶೃಂಗೇರಿ ತಾಲೂಕುಗಳಿಗೆ ಭೇಟಿ ನೀಡಿದ್ದರು. ತರೀಕೆರೆಗೆ ಭೇಟಿ ನೀಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಸಭೆಯನ್ನು ನಡೆಸಿದ್ದರು.
ಅಧಿಕಾರಿಗಳ ಸಭೆ: ಗುರುವಾರದಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಬಿಸಿಯೂಟ ಸಿದ್ಥತೆ ಬಗ್ಗೆ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಸಭೆ ನಡೆಸಿದ ಅವರು, ನಗರದ ಸೆಂಟ್ ಜೋಸೆಫ್ ಶಾಲೆ ಹಾಗೂ ಎಂ.ಎಂ.ಎಸ್. ಶಾಲೆಗೆ ಭೇಟಿ ನೀಡಿ ಬಿಸಿಯೂಟ ಕೊಠಡಿ ನಿರ್ಮಾಣದ ಕಾಮಗಾರಿ ಪರಿಶೀಲಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಧ ಮಕ್ಕಳ ಶಾಲೆ, ಗಿರಿಜನ ಇಲಾಖೆಯ ಆಶ್ರಮ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು ವಿತರಣೆ ಮಾಡಬೇಕು ಎಂದು ಸಾರ್ವಜನಿಕರಿಂದ ಅರ್ಜಿಗಳು ಬಂದಿದ್ದರ ಹಿನ್ನಲೆಯಲ್ಲಿ ಜಿಪಂ ಉಪಕಾರ್ಯದರ್ಶಿ ರಾಜಗೋಪಾಲ್ ಅಮೊರಂದಿಗೆ ಮಾತುಕತೆ ನಡೆಸಿದ ಜಯಕುಮಾರ್, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಬಿ. ರಾಜಪ್ಪ, ಮಧ್ಯಾಹ್ನ ಉಪಹಾರ ಯೋಜನೆಯ ಜಿಲ್ಲಾ ಶಿಕ್ಷಣಾಧಿಕಾರಿ ನಾಗೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.