ಚಿತ್ರದುರ್ಗ

ಮುಷ್ಕರ: ರೋಗಿಗಳ ಪರದಾಟ

Published On :

ಚಿತ್ರದುರ್ಗ: ಸರ್ಕಾರಿ ವೈದ್ಯರ ಅನಿರ್ದಿಷ್ಟ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳು ರೋಗಿಗಳ ದಟ್ಟಣೆಯಿಂದ ತುಂಬಿ ಹೋಗಿವೆ. ಐಸಿಯುಗಳು ಮತ್ತು ಉಸಿರಾಟದ ಐಸಿಯುಗಳು ಹೆಚ್ಚಿನ ರೋಗಿಗಳಿಗೆ ಅವಕಾಶವಿಲ್ಲದಷ್ಟು ಸೇವೆ ನೀಡುತ್ತಿವೆ.
ಕೆಲವು ಖಾಸಗಿ ನರ್ಸಿಂಗ್‌ಹೋಮ್‌ಗಳಲ್ಲಿ ರೋಗಿಗಳನ್ನು ನೋಡಲು ಸಾಧ್ಯವಾಗದಷ್ಟು ದಟ್ಟಣೆ ಉಂಟಾಗಿದೆ. ನರ್ಸ್‌ಗಳು ಮತ್ತು ವಾರ್ಡ್‌ಬಾಯ್‌ಗಳು ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಹೋಗುವಂತೆ ಸೂಚಿಸುತ್ತಿದ್ದುದು ಮಾಮೂಲಾಗಿದೆ. ಕೆಲ ರೋಗಿಗಳನ್ನು ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಲಾಗಿದೆ. ಇನ್ನೊಂದೆಡೆ ಪ್ರತಿನಿತ್ಯ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡುವ ಜಿಲ್ಲಾ ಆಸ್ಪತ್ರೆ ಕರ್ಫ್ಯೂ ವಿಧಿಸಿದ ದಿನದಂತೆ ಬಿಕೋ ಎನ್ನುತ್ತಿತ್ತು.
ತುರ್ತು ಚಿಕಿತ್ಸಾ ವಿಭಾಗವನ್ನು ಸಹ ಮುಚ್ಚಲಾಗಿತ್ತು. ಜ್ವರದಿಂದ ಬಳಲುತ್ತಿದ್ದ ಒಳರೋಗಿ ತಿಪ್ಪೇಸ್ವಾಮಿ  ಎಂಬುವರಿಗೆ ಚಿಕಿತ್ಸೆ ನೀಡುವವರಿಲ್ಲದೆ ಅವರನ್ನು ದಾವಣಗೆರೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ರೋಗಿಯ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕರ ಅಸಮಾಧಾನ: ಜಿಲ್ಲಾ ಆಸ್ಪತ್ರೆಗೆ ಕರೆ ತರಲಾಗಿದ್ದ ಒಂದಿಬ್ಬರು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯುವಷ್ಟರಲ್ಲೇ ಅವರು ಅಂತಿಮ ಉಸಿರು ಎಳೆದಿದ್ದಾಗಿ ವರದಿಯಾಗಿದೆ. ವೈದ್ಯರ ಸಂಘದಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ಇತ್ತ ಗಮನಹರಿಸದೆ ಇರುವುದು ಸಾರ್ವಜನಿಕರ  ಅಸಮಾಧಾನಕ್ಕೆ ಕಾರಣವಾಗಿದೆ. ಜಿಲ್ಲಾ ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೇ  ಉಳಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ವೈದ್ಯರು ಮುಷ್ಕರನಿರತರಾಗಿದ್ದಾರೆ. ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಇದೇ ಪರಿಸ್ಥಿತಿ ಉಂಟಾಗಿದೆ.
ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಆರ್. ಮಹಾಲಿಂಗಪ್ಪ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ಸೇವೆಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ವೈದ್ಯರು ಮತ್ತು ಆಯುಷ್ ವೈದ್ಯರನ್ನು ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಲವಾರು ವೈದ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವಂತೆ ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗೆ ರೋಗಿಗಳನ್ನು ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.