ಸುದ್ದಿ ಸಂಕ್ಷೇಪ
ಉಡುಪಿ: ಶೇ.93 ಮಕ್ಕಳಿಗೆ ಪಲ್ಸ್ ಪೋಲಿಯೊ
ಉಡುಪಿ: ಭಾನುವಾರ ಜಿಲ್ಲೆಯಲ್ಲಿ ನಡೆದ 2ನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ 5 ವರ್ಷದೊಳಗಿನ ಶೇ.93ರಷ್ಟು ಕಂದಮ್ಮಗಳಿಗೆ ಪೋಲಿಯೊ ಹನಿ ಹಾಕಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 88,199 ಕಂದಮ್ಮಗಳಿದ್ದು, ಅವರಲ್ಲಿ 82,103 ಕಂದಮ್ಮಗಳಿಗೆ ಪೋಲಿಯೋ ಹನಿ ಹಾಕಲಾಗಿದೆ.
ಉಡುಪಿ ತಾಲೂಕಿನಲ್ಲಿ 41,345 ಮಕ್ಕಳಲ್ಲಿ 37,435 (ಶೇ 91), ಕುಂದಾಪುರ ತಾಲೂಕಿನಲ್ಲಿ 31,081 ಮಕ್ಕಳಲ್ಲಿ 29,750 (ಶೇ 96) ಮತ್ತು ಕಾರ್ಕಳ ತಾಲೂಕಿನಲ್ಲಿ 15,773 ಮಕ್ಕಳಲ್ಲಿ 14,917 (ಶೇ 95) ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಉಳಿದ ಮಕ್ಕಳಿಗೆ ನಗರ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಇಂದು, ನಾಳೆ ಮತ್ತು ನಾಡಿದ್ದು 3 ದಿನ ಸ್ವಯಂಸೇವಕರು ಮನೆಮನೆಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ.
ದ.ಕ.: ಶೇ. 86.78 ಪೋಲಿಯೊ ಲಸಿಕೆ
ಮಂಗಳೂರು: ಜಿಲ್ಲೆಯಾದ್ಯಂತ ಭಾನುವಾರ ನಡೆದ ಪೋಲಿಯೋ ಲಸಿಕೆ ಅಭಿಯಾನದಲ್ಲಿ ಶೇ. 89.78 ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಒ. ಶ್ರೀರಂಗಪ್ಪ ಹೇಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,63,860 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಿದ್ದು, 1,47,119 ಮಕ್ಕಳಿಗೆ ನೀಡಲಾಗಿದೆ. 1,39,063 ಬೂತಿನಲ್ಲಿ ಪೋಲಿಯೋ ಅಭಿಯಾನ ಕೈಗೊಳ್ಳಲಾಗಿತ್ತು. ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಶೇ. 94 ಹಾಗೂ ನಗರ ಪ್ರದೇಶದಲ್ಲಿ ಶೇ. 84.48 ಲಸಿಕೆ ನೀಡಲಾಗಿದೆ ಎಂದರು. ಪುತ್ತೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಶೇ. 97.67, ಬೆಳ್ತಂಗಡಿಯ ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ಶೇ. 96.71, ಬಂಟ್ವಾಳ ಗ್ರಾಮಾಂತರ ಮತ್ತು ನಗರದಲ್ಲಿ ಶೇ. 93.91, ಸುಳ್ಯದಲ್ಲಿ ಶೇ. 93.9 ಲಸಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಮಾರಾಮಾರಿ
ವಿಟ್ಲ; ಎರಡು ಕೋಮಿನ ವಿದ್ಯಾರ್ಥಿಗಳ ಗುಂಪಿನ ನಡುವೆ ಕ್ಷುಲ್ಲಕ ವಿಚಾರಕ್ಕೆ ಪರಸ್ಪರ ಮಾತಿನ ಚಕಮುಕಿ ನಡೆದು ಹೊಡೆದಾಟ ನಡೆದ ಘಟನೆ ಶನಿವಾರ ವಿಟ್ಲ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದಿದೆ. ಈ ಸಂಬಂಧ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಒಂದು ಕೋಮಿಗೆ ಸೇರಿದ ವಿದ್ಯಾರ್ಥಿನಿಯೊಂದಿಗೆ ಮತ್ತೊಂದು ಕೋಮಿನ ಹುಡುಗ ಮಾತನಾಡಿದ ಎಂಬ ವಿಚಾರವಾಗಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆ ನಡೆಯುತ್ತಿದ್ದಾಗ ಕೆಲ ವಿದ್ಯಾರ್ಥಿಗಳು ನೀಡಿದ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿ ಎಂಟು ಮಂದಿಯನ್ನು ವಶಕ್ಕೆ ತೆಗೆದುಕೊಂಡರು. ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯಾವುದೇ ವಿಚಾರಣೆ ನಡೆಸದಿದ್ದಲ್ಲಿ ಕಾಲೇಜಿನಲ್ಲಿ ಶಿಸ್ತು ಸಮಿತಿಯ ಮುಂದೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

