ದಕ್ಷಿಣ ಕನ್ನಡ

ಅಡಕೆ ಬೆಳೆಗಾರರ ಸಾಲ ಮನ್ನಾ ಪ್ಯಾಕೇಜ್ ಕೊಡಿ

Published On :

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕೊಡಗು ಜಿಲ್ಲೆಯ ಅಡಕೆ ಬೆಳೆಗಾರರ ಎಲ್ಲ ಕೃಷಿ ಸಾಲ ಮನ್ನಾ ಪ್ಯಾಕೇಜ್ಗಾಗಿ ಪ್ರಸಕ್ತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸುವಂತೆ ರೈತ ಸಂಘ ಹಸಿರುಸೇನೆಯ ಜಿಲ್ಲಾ ಮುಖಂಡರು ಭಾನುವಾರ ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ದ.ಕ. ಮತ್ತು ಉತ್ತರ ಕೊಡಗು ಜಿಲ್ಲೆಯ ಅಡಕೆ ಕೃಷಿಕರು ಕಳೆದ ಒಂದು ದಶಕದಿಂದೀಚೆಗೆ ಹಳದಿ ರೋಗ, ಕೊಳೆ ರೋಗ, ಬೇರು ಹುಳ, ಬೆಳೆ ಹಾನಿ, ಮಾರುಕಟ್ಟೆ ದರ ಕುಸಿತ ಇತ್ಯಾದಿ ಸಮಸ್ಯೆಗಳಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಡಕೆ ಕೃಷಿಯನ್ನೇ ನಂಬಿ ವಿವಿಧ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪಡೆದ ಸಾಲ ಮರು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ವಿವಿಧ ಪಕ್ಷಗಳಿಗೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ದಾಖಲೆ ಸಹಿತ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅವರು ಮನವಿಯಲ್ಲಿ ದೂರಿದ್ದಾರೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗೆ ವಿದ್ಯುತ್ ಯೋಜನೆಗಳಿಗೆ ಅಣೆಕಟ್ಟು ನಿರ್ಮಿಸಲು ಸರ್ಕಾರ ಅನುಮತಿ ನೀಡುತ್ತಿದೆ. ಆದರೆ ಸಂಬಂಧಿತ ಕಂಪೆನಿಗಳು ಯಾವುದೇ ನಿಬಂಧನೆಗಳನ್ನು ಪಾಲಿಸದೆ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗುತ್ತಿದ್ದು, ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲವಿದ್ಯುತ್ ಯೋಜನೆಗೆ ಅವಕಾಶ ನೀಡಬಾರದು ಎಂದು ರೈತ ಮುಖಂಡರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಶಾಸಕರಿಂದ ಭರವಸೆ: ಅಡಕೆ ಬೆಳೆಗಾರರ ಸಮಸ್ಯೆ ಬಗ್ಗೆ ತಾನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ ಶಾಸಕಿ ಶಕುಂತಳಾ ಶೆಟ್ಟಿ, ಅಡಕೆಯ ಬಗ್ಗೆ ಪ್ರಥಮವಾಗಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ಉಲ್ಲೇಖಿಸಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ರೈತರ ಸಮಸ್ಯೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ತಿಳಿಸಿದರು.
ತಾನು ಜಲವಿದ್ಯುತ್ ಯೋಜನೆಗೆ ಅಣೆಕಟ್ಟು ನಿರ್ಮಿಸುವುದನ್ನು ವಿರೋಧಿಸುವುದಿಲ್ಲ. ಆದರೆ ಸಂತ್ರಸ್ತ ರೈತರಿಗೆ ಸಮರ್ಪಕವಾದ ಪರಿಹಾರದ ಬಗ್ಗೆ ರೈತ ಸಂಘದ ಅಹವಾಲನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ರೈತ ಸಂಘ ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ರಾಜ್ಯ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಡಿಲ ಈಶ್ವರಭಟ್, ಜಿಲ್ಲಾ ಉಪಾಧ್ಯಕ್ಷ ಧರ್ಣಪ್ಪ ಗೌಡ ಇಡ್ಯಾಡಿ, ಜಿಲ್ಲಾ ಕಾರ್ಯದರ್ಶಿ ಈಶ್ವರ ಗೌಡ ಪಾತಿಚ್ಚಾರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.