ಮಿಯ್ಯಾರು ವಸತಿ ಶಾಲೆ ಕಳಪೆ ಕಾಮಗಾರಿ; ಅಧಿಕಾರಿಗಳಿಂದ ತನಿಖೆ
ವಿಧಾನಸಭೆ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಳಪೆ ಕಾಮಗಾರಿ ಕುರಿತಂತೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುವುದಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಅವರ ಗಮನಸೆಳೆಯುವ ಸೂಚನೆಗೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಪರವಾಗಿ ಉತ್ತರ ನೀಡಿದ ಸಚಿವರು, ವಸತಿ ಶಾಲೆ ಕಾಮಗಾರಿ ಕಳಪೆಯಾಗಿದ್ದರೆ ಈ ಕುರಿತು ತನಿಖೆ ನಡೆಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಸುನೀಲ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಮಿಯ್ಯಾರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಗುತ್ತಿಗೆಯನ್ನು ಕೆ. ರಾಮಚಂದ್ರರಾಜು ಎಂಬುವರಿಗೆ ನೀಡಲಾಗಿದೆ. ಅವರು ಈ ವರೆಗೆ 3.38 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯದ ಕಟ್ಟಡ ಹೊರತುಪಡಿಸಿ ಉಳಿದ ಕಾಮಗಾರಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದರು.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಶಾಲಾ ಕಟ್ಟಡದ ಹಿಂಭಾಗದ ಗೋಡೆಗಳಲ್ಲಿ ತೇವಾಂಶ ಕಂಡುಬಂದಿರುವುದು ಇಲಾಖೆ ಅಧಿಕಾರಿಗಳು ಪರಿಶೀಲಿಸಿದಾಗ ಕಂಡುಬಂದಿದೆ. ಈ ಕುರಿತಂತೆ ಗುತ್ತಿಗೆದಾರರು ಮತ್ತು ತಾಂತ್ರಿಕ ಸಲಹೆಗಾರರಿಗೆ ನೋಟಿಸ್ ಜಾರಿ ಮಾಡಿದ್ದು, ನ್ಯೂನ್ಯತೆ ಸಪಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಉತ್ತರದಿಂದ ಅಸಮಾಧಾನಗೊಂಡ ಸುನೀಲ್ ಕುಮಾರ್, ಸುಮಾರು 5.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಮೊದಲ ವರ್ಷವೇ ಸೋರಿಕೆಯಾಗುತ್ತದೆ ಎಂದರೆ ಕಾಮಗಾರಿ ಎಷ್ಟೊಂದು ಕಳಪೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.
ಆದ್ದರಿಂದ ಈ ಕುರಿತು ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸಚಿವರು ಸಮ್ಮತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

