ದಕ್ಷಿಣ ಕನ್ನಡ

ಸರ್ಕಾರಿ ಬಸ್ ಸಿಬ್ಬಂದಿ ಮೇಲೆ ಹಲ್ಲೆ; ಟ್ರಿಪ್ ರದ್ದಾಗುವ ಸಾಧ್ಯತೆ

Published On :

ಪುತ್ತೂರು: ಕರ್ತವ್ಯ ನಿರತ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಮೇಲೆ ದೈಹಿಕ ಹಲ್ಲೆಯಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇದರಿಂದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದಾಗಿ ಸಿಬ್ಬಂದಿ ಸತತ ಗೈರುಹಾಜರಾಗುತ್ತಿದ್ದು, ಕೆಎಸ್ಸಾರ್ಟಿಸಿ ಬಸ್‌ಗಳ ಕೆಲವು ಟ್ರಿಪ್‌ಗಳು ರದ್ದಾಗುವ ಸಾಧ್ಯತೆಗಳಿವೆ ಎಂದು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಯಶವಂತ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 6 ತಿಂಗಳ ಅವಧಿಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕು ವ್ಯಾಪ್ತಿಯನ್ನೊಳಗೊಂಡ ಪುತ್ತೂರು ವಿಭಾಗದಲ್ಲಿ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಮೇಲೆ ಒಟ್ಟು 12 ಹಲ್ಲೆ ಪ್ರಕರಣಗಳು ನಡೆದಿದ್ದು, ಘಟನೆಗೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಕ್ಷುಲ್ಲಕ ಕಾರಣ ಮುಂದಿಟ್ಟುಕೊಂಡು ಗೂಂಡಾಗಿರಿ ಪ್ರದರ್ಶಿಸುವುದರಿಂದ ಬಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಹೆದರುವ ವಾತಾವರಣ ನಿರ್ಮಿಸಲಾಗುತ್ತಿದೆ. ಈ ಎಲ್ಲ ಹಲ್ಲೆ ಘಟನೆಗಳ ನೇರ ಪರಿಣಾಮ ಪ್ರಯಾಣಿಕರ ಮೇಲೆ ಬೀಳುವಂತಾಗಿದೆ ಎಂದು ತಿಳಿಸಿದರು.
ಪ್ರಯಾಣಿಕರೇ ಸಹಕರಿಸಿ: ಅಮಾಯಕ ಬಸ್ ಸಿಬ್ಬಂದಿ ಮೇಲೆ ವಿನಾ ಕಾರಣ ಹಲ್ಲೆ ನಡೆಸಲಾಗುತ್ತಿದ್ದರೂ, ಪ್ರಯಾಣಿಕರು ಅವರ ಬೆಂಬಲಕ್ಕೆ ಬರುತ್ತಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಕೂಡ ಹಲ್ಲೆಗೊಳಗಾದ ಸಿಬ್ಬಂದಿ ಪರ ನಿಲ್ಲುತ್ತಿಲ್ಲ. ಇದರಿಂದಾಗಿ ಸಿಬ್ಬಂದಿಯ ನೈತಿಕ ಸ್ಥೈರ್ಯ ಕುಂದುವಂತಾಗಿದೆ. ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುವಂತಾಗಿದೆ ಎಂದ ಯಶವಂತ ಕುಮಾರ್, ಇಂತಹ ಘಟನೆಗಳ ಸಂದರ್ಭ ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ ಎಂದರು.
ಕೆಎಸ್ಸಾರ್ಟಿಸಿ ಸಿಬ್ಬಂದಿ ತಪ್ಪು ಮಾಡಿದಲ್ಲಿ ದೂರು ನೀಡಿ, ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅದನ್ನು ಬಿಟ್ಟು ಹಲ್ಲೆ ನಡೆಸುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಕರ್ತವ್ಯ ನಿರತ ಬಸ್ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ ಎಂದರು.
ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗದ ಸಹಾಯಕ ವ್ಯವಸ್ಥಾಪಕ ನಾರಾಯಣ ಕಾಮತ್, ಕಾನೂನು ಅಧಿಕಾರಿ ನರಸಿಂಹ ವರ್ಮ, ಅಂಕಿ-ಅಂಶ ಲೆಕ್ಕಾಧಿಕಾರಿ ಜಯಕರ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.