ಅನ್ಯ ರಾಜ್ಯದವರಿಗೆ ಮತದಾನ: ವಾಗ್ವಾದ
ಮಂಗಳೂರು: ಕೇರಳದ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡುವ ವಿಚಾರದಲ್ಲಿ ನಗರದ ಸೆಬಾಸ್ಟಿಯನ್ ಮತಗಟ್ಟೆ ಹಾಗೂ ಕಪಿತಾನಿಯಾದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಅಥೆನಾ ಆಸ್ಪತ್ರೆ ದಾದಿಯೊಬ್ಬರು ತನ್ನ 25 ಮಂದಿ ಸಂಗಡಿಗರ ಜತೆ ಮತಗಟ್ಟೆಗೆ ಆಗಮಿಸಿದ್ದರು. ಇವರ ಹೆಸರು ಕೇರಳದಲ್ಲಿ ಮತದಾರರ ಪಟ್ಟಿಯಲ್ಲಿದ್ದು, ಮತದಾನಕ್ಕೆ ಅವಕಾಶ ನೀಡಬಾರದು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಆದರೆ ತಾನು ಕಳೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತ ಚಲಾಯಿಸಿದ್ದರಿಂದ ಈ ಬಾರಿ ತನಗೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಯುವತಿ ದಾಖಲೆ ಮುಂದಿಟ್ಟರು. ಬಳಿಕ ಮತಗಟ್ಟೆ ಅಧಿಕಾರಿಗಳು ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಅಷ್ಟರಲ್ಲಿ ಜಮಾಯಿಸಿದ್ದ ಉಭಯ ಪಕ್ಷಗಳ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದರು.
ಕಪಿತಾನಿಯಾದಲ್ಲಿ ಕಂಕನಾಡಿ ಹಾಸ್ಟೆಲ್‌ನ ಕೇರಳದ ವಿದ್ಯಾರ್ಥಿಗಳು ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದ ವಿದ್ಯಮಾನ ನಡೆಯಿತು. ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದಕ್ಕೆ ತೊಡಗಿದ್ದು, ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಲಾಠಿ ಬೀಸಿ ಕಾರ್ಯಕರ್ತರನ್ನು ಚದುರಿಸಿದರು. ಅಷ್ಟರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಸ್ಥಳಕ್ಕೆ ಆಗಮಿಸಿದರು. ಅರೆಸೇನಾ ಪಡೆ ಯೋಧರು ಆಗಮಿಸಿ ಎಲ್ಲರನ್ನು ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

