ಬೈಕ್ ಸವಾರ ಸಾವು
ಉಪ್ಪಿನಂಗಡಿ: ಇಲ್ಲಿನ ಸಮೀಪದ ಹೊಸಮಠ ಎಂಬಲ್ಲಿನ ಸೇತುವೆಯ ಬಳಿ ಬೈಕ್ ಅಪಘಾತಕ್ಕೀಡಾಗಿ ಸವಾರ ರಾಜು ತೋಮಸ್ (45) ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಯಾಗಿರುವ ರಾಜು ತೋಮಸ್ ಮನೆಯಿಂದ ಕಡಬ ಸಮೀಪದ ಕಲಾರ ಎಂಬಲ್ಲಿರುವ ತನ್ನ ಅಂಗಡಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ಮಗುಚಿ ಬಿದ್ದಾಗ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದರು. ಕಡಬ ಪೊಲಿಸರು ಪ್ರಕರಣ ದಾಖಲಿಸಿದ್ದಾರೆ.
ವೃದ್ಧೆ ಆತ್ಮಹತ್ಯೆ
ಹೆಬ್ರಿ: ಇಲ್ಲಿನ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ವಯೋವೃದ್ಧ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರು ಬಾಬಕ್ಕ ಶೇರಿಗಾರ್ (80), ಆಕೆ ಮಗಳು ವನಜಾ ಶೇರಿಗಾರ್ತಿ ಎಂಬವರ ಮನೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಮನೆ ಬಳಿಯ ಆವರಣ ಇಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದಿಂದ ಬಿದ್ದಾತ ಸಾವು
ಮಂಗಳೂರು: ತೆಂಗಿನ ಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ಮಳವೂರಿನ ಕೊಪ್ಪಳ ನಿವಾಸಿ ವೆಂಕಟೇಶ್(47)ಸಾವಿಗೀಡಾದ ಘಟನೆ ಭಾನುವಾರ ಸಂಭವಿಸಿದೆ.
ಮೇ 18ರಂದು ಈ ಘಟನೆ ನಡೆದಿದ್ದು, ಗಾಯಾಳುವನ್ನು ವೆನ್ಲಾಕ್ ಆಸ್ಪತ್ರೆ ಬಳಿಕ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಸಹೋದರ ಗಿರಿಯಪ್ಪ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಕೊಟ್ಟ ಮಾತು ಉಳಿಸಿದೆ: ಜನಾರ್ದನ ಪೂಜಾರಿ
ಮಂಗಳೂರು: ಕಾಂಗ್ರೆಸ್ ಚುನಾವಣೆಗೆ ಮೊದಲು ಮಾತು ಕೊಟ್ಟಂತೆ ರಾಜ್ಯದ ಸಚಿವ ಸಂಪುಟದಲ್ಲಿ ಕಳಂಕಿತರಿಗೆ ಮಣೆ ಹಾಕಿಲ್ಲ ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷ ಮತ್ತು ಪಾರದರ್ಶಕ ಆಡಳಿತ ನೀಡುವ ಸಲುವಾಗಿ ಕೊಟ್ಟ ಮಾತಿನಂತೆ ಹೈಕಮಾಂಡ್ ಪ್ರಕರಣ ಇಲ್ಲದ 28 ಮಂದಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಹಾಗಾಗಿ ಯಾವುದೇ ಸಣ್ಣ ತಪ್ಪು ಮಾಡಿದರೂ ಉಳಿಗಾಲವಿಲ್ಲ ಎಂಬ ಹೈಕಮಾಂಡ್ ಸಂದೇಶವನ್ನು ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಮನವರಿಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಹಲವು ವರ್ಷಗಳ ನಂತರ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದೆ. ಕೇಂದ್ರದಿಂದ ಹೆಚ್ಚಿನ ಅನುದಾನವನ್ನು ಪಡೆದು ರಾಜ್ಯದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕಾಗಿದೆ. ಅವಿಭಜಿತ ಜಿಲ್ಲೆಯ ಸಚಿವರು ಮಾದರಿ ಮಂಗಳೂರು ನಗರವನ್ನು ಸೃಷ್ಟಿಸುವಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಆಸ್ತಿ ತೆರಿಗೆ, ನೀರಿನ ಬಿಲ್ಲನ್ನು ಕಡಿಮೆಗೊಳಿಸುವ ಭರವಸೆ ನೀಡಿದ್ದು, ಜನರ ನಂಬಿಕೆ ಉಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

