ರಾಜೇಂದ್ರ ಕುಮಾರ್ಗೆ 'ಸಹಕಾರ ರತ್ನ' ಪ್ರಶಸ್ತಿ
ಮಂಗಳೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ಗೆ ರಾಜ್ಯ ಮಟ್ಟದ 'ಸಹಕಾರ ರತ್ನ' ಪ್ರಶಸ್ತಿ ಘೋಷಣೆಯಾಗಿದೆ.
ಅಖಿಲ ಭಾರತ ಸಹಕಾರಿ ಸಪ್ತಾಹದ 60ನೇ ವರ್ಷಾಚರಣೆ ಸಂದರ್ಭ ಈ ಪ್ರಶಸ್ತಿ ಪ್ರಕಟವಾಗಿದೆ. ನ.14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆಯಲ್ಲಿ ರಾಜೇಂದ್ರ ಕುಮಾರ್ ಪ್ರಶಸ್ತಿ ಸ್ವೀಕರಿಸುವರು. ಕಳೆದ ಎರಡೂವರೆ ದಶಕಗಳಿಂದ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ರಾಜೇಂದ್ರ ಕುಮಾರ್, ಬ್ಯಾಂಕಿನ ಅಧ್ಯಕ್ಷರಾಗಿ 19 ವರ್ಷದಿಂದ ಬ್ಯಾಂಕ್ನ್ನು ಮುನ್ನಡೆಸುತ್ತಿದ್ದಾರೆ. ಇವರ ಸಾಧನೆಗೆ ಕಳೆದ ವರ್ಷ 'ಸಹಕಾರ ವಿಶ್ವ ಬಂಧುಶ್ರೀ' ಅಂತಾರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಈ ವರ್ಷ ಪ್ರತಿಷ್ಠಿತ 'ಮದರ್ ತೆರೆಸಾ ಸದ್ಭಾವನಾ' ಪ್ರಶಸ್ತಿ ಲಭಿಸಿದೆ. ಕೊಲಂಬೋ ಮುಕ್ತ ವಿಶ್ವವಿದ್ಯಾಲಯ ಮಲೇಷಿಯಾದಲ್ಲಿ ನಡೆದ ಘಟಿಕೋತ್ಸವದಲ್ಲಿ ಇವರಿಗೆ ಕಳೆದ ವರ್ಷ ಗೌರವ ಡಾಕ್ಟರೇಟ್ ಪದವಿ ನೀಡಿತ್ತು. ಎಸ್ಸಿಡಿಸಿಸಿ ಬ್ಯಾಂಕ್ ಸಹಕಾರಿ ಕ್ಷೇತ್ರದ ಬ್ಯಾಂಕ್ ಆದರೂ ವಾಣಿಜ್ಯ ಬ್ಯಾಂಕ್ಗಳಿಗೆ ಸರಿಸಮಾನಾದ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ. ಈ ಬ್ಯಾಂಕ್ಗೆ 15 ಬಾರಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 12 ಬಾರಿ ನಬಾರ್ಡ್ ಪ್ರಶಸ್ತಿ ದೊರಕಿದೆ. ಸಹಕಾರ ಕ್ಷೇತ್ರವನ್ನು ಅವಿಭಜಿತ ದ.ಕ.ಜಿಲ್ಲೆಯಲ್ಲಿ ಬಲಿಷ್ಠಗೊಳಿಸಿದ ಹೆಗ್ಗಳಿಕೆ ಇವರದ್ದು. ನವೋದಯ ಸ್ವಸಹಾಯ ಸಂಘ ರಚನೆಯಲ್ಲಿ, ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೂಲಕ ನವೋದಯ ಸಂಘಗಳ ಸಂಘಟನೆಯನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

