ನೂತನ ಕ್ರೀಡಾನೀತಿ ರೂಪಿಸಲು ಚಿಂತನೆ: ಅಭಯಚಂದ್ರ ಜೈನ್
ಬೆಳ್ತಂಗಡಿ: ರಾಜ್ಯ ಸರ್ಕಾರ ನೂತನ ಕ್ರೀಡಾನೀತಿಯೊಂದನ್ನು ರೂಪಿಸುತ್ತಿದ್ದು, ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಯುವಜನ ಸೇವೆ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಅವರು ಶುಕ್ರವಾರ ಬೆಳಾಲು ಎಸ್ಡಿಎಂ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್ಡಿಎಂ ಪ್ರೌಢಶಾಲೆ ಬೆಳಾಲು ಇದರ ಸಹಭಾಗಿತ್ವದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕರ ಮತ್ತು ಬಾಲಿಕೆಯರ ಕಬಡ್ಡಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದ್ದು, ಹೊಸದಾಗಿ ನಾಲ್ಕು ಸಿಂಥೆಟಿಕ್ ಟ್ರ್ಯಾಕ್ಗಳ ನಿರ್ಮಾಣಗೊಳ್ಳಲಿದೆ ಎಂದರು.
ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ. ಯಶೋವರ್ಮ ಶುಭ ಹಾರೈಸಿದರು.
ಜಿ.ಪಂ. ಸದಸ್ಯರಾದ ತುಳಸಿ ಹಾರಬೆ, ಸಿ.ಕೆ. ಚಂದ್ರಕಲಾ, ಚಂದ್ರಕಾಂತ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷೆ ಲಲಿತಾ, ತಾ.ಪಂ. ಸದಸ್ಯ ಬಾಲಕೃಷ್ಣ ಶೆಟ್ಟಿ, ಅಂತಾರಾಷ್ಟ್ರೀಯ ಮಾಜಿ ಆಟಗಾರ ಬೇಬಿ ಕುಂದರ್, ದ.ಕ. ಜಿಲ್ಲಾ ಕಬಡ್ಡಿ ಸಂಸ್ಥೆಯ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಅಂತಾರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಪ್ರೇಮನಾಥ ಉಳ್ಳಾಲ್, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮೊಸೆಸ್ ಜಯಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲ ಪಿ., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹಾಂತೇಶಪ್ಪ, ಜಿಲ್ಲೆಯ ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.
ಕ್ರೀಡಾ ಕೂಟದಲ್ಲಿ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮೈಸೂರು, ಗುಲ್ಬರ್ಗಾ ಹಾಗೂ ಬೆಳಗಾವಿಯನ್ನು ಪ್ರತಿನಿಧಿಸಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ತಲಾ ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಬೆಳಾಲು ಎಸ್ಡಿಎಂ ಪ್ರೌಢಶಾಲೆಯ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. ಸಂಘಟನಾ ಸಮಿತಿ ಅಧ್ಯಕ್ಷ ಪದ್ಮ ಗೌಡ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಬಿ. ಕೇಶವ ಪ್ರಸ್ತಾವಿಕ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ವಂದಿಸಿದರು. ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಮತ್ತು ರಾಧಾಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

