ಡಿ.15ರೊಳಗೆ ಲೋಕಸಭಾ ಕ್ಷೇತ್ರ ಬಿಜೆಪಿ ಸಮಾವೇಶ
ಮಂಗಳೂರು: ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಡಿ.15ರೊಳಗೆ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಬೂತ್ನಿಂದ ಕನಿಷ್ಠ 10 ಮಂದಿ ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸಬೇಕು ಎನ್ನುವುದು ಅಪೇಕ್ಷೆ. ಸಮಾವೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ, ಎನ್ಡಿಎ ಸರ್ಕಾರದ ಸಾಧನೆ ಬಗ್ಗೆ ಪ್ರಸ್ತಾಪಿಸಲಾಗುವುದು. ಅ.16ರಂದು ಬೆಂಗಳೂರಲ್ಲಿ ನಡೆಯುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರ್ಯಾಲಿಗೆ ಸಿದ್ಧತೆ ಕುರಿತು ಮಂಗಳವಾರ ಮುಂಬೈನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಸಭೆಯಲ್ಲಿ ತಿಳಿಸಲಾಗಿದೆ ಎಂದರು. ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸೇರ್ಪಡೆ ವಿಚಾರ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದು, ರಾಜ್ಯ ಬಿಜೆಪಿಯಿಂದ ಯಾವುದೇ ವಿರೋಧ ಇಲ್ಲ. ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಸರ್ಕಾರಕ್ಕೆ ಕುಂಭಕರ್ಣ ನಿದ್ರೆ: ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಜನತೆ ತತ್ತರಿಸುತ್ತಿದ್ದರೂ ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಕೊಳೆರೋಗ ಹಾನಿ ಮತ್ತು ಜಾನುವಾರಿಗೆ ಕಾಲುಬಾಯಿ ಜ್ವರ ವ್ಯಾಪಿಸಿದರೂ ಪರಿಹಾರ ನೀಡಿಲ್ಲ. ಅತಿವೃಷ್ಟಿ, ಅನಾವೃಷ್ಟಿ ಪರಿಶೀಲನೆಗೆ ಕೇಂದ್ರ ತಂಡ ಬಂದುಹೋಗಿ 15 ದಿನ ಕಳೆದರೂ ಕೇಂದ್ರದಿಂದ ಪರಿಹಾರ ಘೋಷಣೆಯಾಗಿಲ್ಲ. ವಿಧಾನಸಭೆ ಸ್ಪೀಕರ್ ಕೂಡ ಎಕರೆಗೆ ರು. 25 ಸಾವಿರ ಪರಿಹಾರ ನೀಡಿ ಎಂದರೆ, ಸರ್ಕಾರ ಹೆಕ್ಟೇರ್ಗೆ ರು. 12 ಸಾವಿರ ನೀಡಿ ಕೈತೊಳೆದುಕೊಂಡಿದೆ. ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಕೋರಿ ಬಿಜೆಪಿ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದರು.
ದ್ವೇಷದ ರಾಜಕಾರಣ: ಕಾಂಗ್ರೆಸ್ನ 21 ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರ ದುಗುಡ ಅರ್ಥವಾಗುತ್ತದೆ. ಆದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ್ದು ಅವರ ಕರ್ತವ್ಯ. ಕೊಳೆರೋಗ ಹಾನಿ ಹಾಗೂ ಕಾಲುಬಾಯಿ ಜ್ವರದ ಪರಿಹಾರ ಮೊತ್ತ ಹೆಚ್ಚಳ ಮಾಡದಿದ್ದರೆ ಬಿಜೆಪಿ ಹೋರಾಟ ನಡೆಸುವುದಾಗಿ ಹೇಳಿದರು.
ನಿಗಮ, ಮಂಡಳಿ, ಸರ್ಕಾರಿ ವಕೀಲರ ರಾಜಿನಾಮೆ ಕೇಳುವ ಮುಖೇನ ಈಗಿನ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಪ್ರಹ್ಲಾದ ಜೋಶಿ, ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ ಕೇಂದ್ರ ಹಾಗೂ ಕಾಂಗ್ರೆಸ್ ನಾಯಕರ ನೀತಿಯನ್ನು ವಿರೋಧಿಸುವುದಾಗಿ ನುಡಿದರು.
ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಭಟ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಿ.ಟಿ.ರವಿ, ಸುನೀಲ್ ಕುಮಾರ್, ಮೋನಪ್ಪ ಭಂಡಾರಿ, ಜಿಲ್ಲಾಧ್ಯಕ್ಷ ಪ್ರತಾಪ್ಸಿಂಹ ನಾಯಕ್ ಹಾಜರಿದ್ದರು.
ಮೋದಿ ಕಾರ್ಯಕ್ರಮಕ್ಕೆ ಶುಲ್ಕ:
ಕೋರ್ ಕಮಿಟಿ ಸಭೆ ವಿವೇಚನೆಗೆ
ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಶುಲ್ಕ ನಿಗದಿಪಡಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು. ಎತ್ತಿನಹೊಳೆ ಯೋಜನೆ ಬಗ್ಗೆ ಮುಖ್ಯಮಂತ್ರಿ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ. ಬಳಿಕ ಬಿಜೆಪಿ ತನ್ನ ನಿಲವು ಪ್ರಕಟಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

