ಬಂಟ್ವಾಳ: 26ರಂದು ನೂತನ ಕೋರ್ಟ್ ಕಟ್ಟಡ ಉದ್ಘಾಟನೆ
ಬಂಟ್ವಾಳ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಬಂಟ್ವಾಳ ವಕೀಲರ ಸಂಘದ ಆಶ್ರಯದಲ್ಲಿ ಬಂಟ್ವಾಳದ ಹಿರಿಯ ವ್ಯವಹಾರಿಕಾ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನೂತನ ನ್ಯಾಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭ 26ರಂದು ಬೆಳಗ್ಗೆ 10.30ಕ್ಕೆ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ತಿಳಿಸಿದರು.
ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯದೀಶ ಹಾಗೂ ದ.ಕ. ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ಡಾ. ಕೆ.ಭಕ್ತ ವತ್ಸಲ ನೂತನ ಕಟ್ಟಡವನ್ನು ಉದ್ಘಾಟಿಸುವರು. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಅಬ್ದುಲ್ ನಜೀರ್, ಬಿ.ವಿ. ಪಿಂಟೋ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಆರೋಗ್ಯ ಸಚಿವ ಯು.ಟಿ. ಖಾದರ್, ಯುವಜನ ಸೇವಾ ಸಚಿವ ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚೌಡಾಪುರ್ಕರ್ ಅರುಣ್ ಭಾಗವಹಿಸುವರು.
ಇಲ್ಲಿಗೆ ಸಿವಿಲ್ ನ್ಯಾಯಾಲಯ ಬೇಕೆಂಬುದು ತೀರಾ ಹಳೆಯ ಬೇಡಿಕೆಯಾಗಿದ್ದು, ಕೆಲವರ್ಷಗಳ ಹಿಂದೆ ಪ್ರತಿಯೊಂದು ಸಿವಿಲ್ ವ್ಯಾಜ್ಯಗಳ ವಿಲೇವಾರಿಗೆ ಮಂಗಳೂರನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇತ್ತು. ಬಹುಬೇಡಿಕೆಯ ಹಿನ್ನೆಲೆಯಲ್ಲಿ 2008ರಲ್ಲಿ ಇಲ್ಲಿಗೆ ಸಿವಿಲ್ ನ್ಯಾಯಾಲಯ ಮಂಜೂರಾತಿಯಾಗಿದ್ದರೂ ಹಳೆ ಕಟ್ಟಡದಲ್ಲೇ ಕಾರ್ಯಾಚರಿಸುತ್ತಿತ್ತು. ಇದೀಗ ಬಿ.ಸಿ. ರೋಡಿನ ಮುಖ್ಯ ನ್ಯಾಯಾಲಯದ ಮೇಲಂತಸ್ತಿನಲ್ಲಿ ರು. 2.50 ಕೋಟಿ ವೆಚ್ಚದಲ್ಲಿ ಹಿರಿಯ ವ್ಯವಹಾರಿಕ ನ್ಯಾಯಾಲಯದ ನೂತನ ಕಟ್ಟಡ ಸಿದ್ಧಗೊಂಡಿದ್ದು, 26ಕ್ಕೆ ಲೋಕಾರ್ಪಣೆಯಾಗಲಿದೆ. ವಕೀಲರ ಸಂಘದ ಉಪಾಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಗಣೇಶ್ ಬಿ., ಜೊತೆ ಕಾರ್ಯದರ್ಶಿ ಕೇಶವಿಗಿರೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

