ದಕ್ಷಿಣ ಕನ್ನಡ

ಮುಖ್ಯ ಶಿಕ್ಷಕರಿಗೆ ಅತಿಥಿ ಶಿಕ್ಷಕರ ನೇಮಕಾತಿ ಜವಾಬ್ದಾರಿ

Published On :

ಬಂಟ್ವಾಳ: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸುವ ತನ್ನ ಆದೇಶದಲ್ಲಿ ದಿಢೀರ್ ಬದಲಾವಣೆ ಮಾಡಿರುವ ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯವರ ಬದಲಾಗಿ ಆಯಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಹಿಸಿದೆ.
ಸೆ.13ರಂದು ಈ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಬಿ.ಪಟಗಾರ್, ಈ ಕೆಳಗಿನ ಮಾರ್ಪಾಡುಗಳನ್ನು ಸುತ್ತೋಲೆಯಲ್ಲಿ ವಿವರಿಸಿದ್ದಾರೆ. ಗ್ರಾಮಮಟ್ಟ, ಗ್ರಾಮ ಪಂಚಾಯತಿಮಟ್ಟ, ಹೋಬಳಿ ಮಟ್ಟ ಮತ್ತು ತಾಲೂಕು ಮಟ್ಟದಂತೆ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳುವುದು, ಒಂದು ಗ್ರಾಮದಲ್ಲಿ ಇಬ್ಬರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ ಇಬ್ಬರು ಅಭ್ಯರ್ಥಿಗಳ ಪೈಕಿ, ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದರಿಗೆ ಆದ್ಯತೆ ನೀಡುವುದು. ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಒಂದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ  ಮತ್ತು ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸದೇ ಇದ್ದು, ಒಂದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಬೇಕೆಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಆರಂಭದಲ್ಲೇ ಗೊಂದಲ: ಆ.14 ರ ಸುತ್ತೋಲೆಯಲ್ಲಿ 2013-14 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಶಿಕ್ಷಣ ಇಲಾಖೆ, ಸೆ.11 ಕ್ಕೆ ಕೌನ್ಸಿಲಿಂಗ್ ಅನ್ನೂ ನಿಗದಿ ಪಡಿಸಿತ್ತು. ಆದರೆ ಸುತ್ತೋಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿ, ಕೌನ್ಸಿಲಿಂಗ್ ಕುರಿತಾದ ಪ್ರಕ್ರಿಯೆಗಳು ಆರಂಭಗೊಂಡ ಬಳಿಕ, ಏಕಾಏಕಿ ಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಸೂಚಿಸಿತ್ತು. ಅದರಂತೆ ಸ್ವೀಕರಿಸಿದ್ದ ಅರ್ಜಿಗಳನ್ನೆಲ್ಲಾ ಇಲಾಖೆಯಲ್ಲೇ ಉಳಿಸಿಕೊಂಡ ಅಧಿಕಾರಿಗಳು ಇದೀಗ, ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಶಾಲೆಗಳಿಗೆ ತಲುಪಿಸಿದೆ. ಆಯಾ ಪ್ರಾಥಮಿಕ, ಪ್ರೌಢಶಾಲಾ ಮುಖ್ಯ ಶಿಕ್ಷಕರು ಅತಿಥಿ ಶಿಕ್ಷಕರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.
ಕಳೆದ ಜೂನ್ನಲ್ಲೇ ಶಿಕ್ಷಕರನ್ನು ನೇಮಿಸಬೇಕಾಗಿದ್ದ ಸರ್ಕಾರ ತಡವಾಗಿ ಸುತ್ತೋಲೆ ಹೊರಡಿಸಿದೆ. ಅದರಲ್ಲೂ ಕೆಲ ಗೊಂದಲಗಳಿಂದ ತಡವರಿಸಿರುವುದರಿಂದ ಅತಿಥಿ ಶಿಕ್ಷಕರ ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.