ದಕ್ಷಿಣ ಕನ್ನಡ

ಬಗೆಹರಿಯದ ಕಾಣಿಯೂರು- ಬೆಳಂದೂರು ಕಾಲೇಜು ವಿವಾದ; ಪ್ರತಿಭಟನೆ ಮುಂದುವರಿಕೆ

Published On :

ಪುತ್ತೂರು: ಕಾಣಿಯೂರು ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ ಶನಿವಾರವೂ ಮುಂದುವರಿದಿದ್ದು, ಇವರಿಗೆ ಬೆಂಬಲ ವ್ಯಕ್ತಪಡಿಸಿ ಪುತ್ತೂರಿನ ವಿವೇಕಾನಂದ ಕಾಲೇಜು ಎಬಿವಿಪಿ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರಸ್ತುತ ಬೆಳಂದೂರಿನಲ್ಲಿ ಪ್ರಥಮ ದರ್ಜೆ ಕಾಲೇಜು ತರಗತಿಗಳು ನಡೆಯುತ್ತಿದ್ದರೆ, ಕಾಣಿಯೂರಿನಲ್ಲಿ ವಿದ್ಯಾರ್ಥಿಗಳು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಳೆದ ಹಲವು ದಿನಗಳಿಂದ ವಿವಾದಕ್ಕೀಡಾಗಿದ್ದ ಕಾಣಿಯೂರಿನಿಂದ ಬೆಳಂದೂರಿಗೆ ಕಾಲೇಜು ವರ್ಗಾವಣೆ ವಿಚಾರ ಇತ್ಯರ್ಥಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಬೆಳಂದೂರಿನಲ್ಲಿ ಸಿಮೆಂಟ್‌ಶೀಟ್ ಹಾಗೂ ಪ್ಲಾಸ್ಟಿಕ್‌ನಿಂದ ತಾತ್ಕಾಲಿಕ ಶೆಡ್ ನಿರ್ಮಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಇದರಿಂದಾಗಿ ನಾವು ಸ್ಥಳಾಂತರ ಮಾಡುವುದಿಲ್ಲ, ನಮಗೆ ಇಲ್ಲಿಯೇ ತರಗತಿ ನಡೆಸಿ ಎಂದು ಕಾಣಿಯೂರಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ ಕಾಣಿಯೂರಿಗೆ ಭೇಟಿ ನೀಡಿದ ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕ ಎಸ್. ಅಂಗಾರ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಶನಿವಾರ ತಾಲೂಕು ಕಾಲೇಜು ಬಂದ್‌ಗೆ ಎಬಿವಿಪಿ ಕರೆಕೊಟ್ಟಿತ್ತು. ಕಾಣಿಯೂರು ಕಾಲೇಜು ವಿದ್ಯಾರ್ಥಿಗಳು ಬೆಳಗ್ಗಿನಿಂದಲೇ ಕಾಲೇಜು ಆವರಣದಲ್ಲಿ ಪ್ರತಿಭಟನೆ ಕುಳಿತಿದ್ದರು. ಸುಮಾರು 11 ಗಂಟೆ ವೇಳೆಗೆ ಬೆಳ್ಳಾರೆ, ಸುಬ್ರಹ್ಮಣ್ಯ ಮೊದಲಾದ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿ ಧರಣಿ ಕುಳಿತರು. ರಸ್ತೆ ತೆರವುಗೊಳಿಸುವಂತೆ ಕಡಬ ಪೊಲೀಸರು ಮನವಿ ಮಾಡಿದರೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದರು.  ಕಾಣಿಯೂರು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಶನಿವಾರ ಪುತ್ತೂರಿನ ವಿವೇಕಾನಂದ ಕಾಲೇಜ್‌ನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಅತಿ ಶೀಘ್ರವಾಗಿ ಅಧಿಕಾರಿಗಳು ಸಭೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ವಿಫಲವಾದಲ್ಲಿ ಎಬಿವಿಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಪ್ರತಿಭಟನೆಯ ನೇತೃತ್ವವನ್ನು ಎಬಿವಿಪಿ ವಿದ್ಯಾರ್ಥಿ ಮುಖಂಡರಾದ ಯತೀಶ್, ನಿದೀಶ್ ಉಡುಪ, ಸಚಿನ್ ಇಂದಾಜೆ, ಪ್ರಜ್ವಲ್ ಬಂಗೇರ, ಶ್ರೀಧರ ಎನ್., ಅಜಿತ ಬೆಳ್ಳಾರೆ ಮತ್ತಿತರರು ವಹಿಸಿದ್ದರು. ಪ್ರತಿಭಟನೆಯ ಬಳಿಕ ಜಂಟಿ ನಿರ್ದೇಶಕರು ಹಾಗೂ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.