ವಿವಿ ಕಾಯ್ದೆ ತಿದ್ದುಪಡಿ ಸದನದಲ್ಲಿ ಪ್ರಸ್ತಾಪ
ಮಂಗಳೂರು: ವಿಶ್ವವಿದ್ಯಾಲಯ ಕಾಯ್ದೆ ತಿದ್ದುಪಡಿಗೊಳಿಸಿ ಸಿಂಡಿಕೇಟ್ ಮತ್ತು ಸೆನೆಟ್ಗೆ ವಿದ್ಯಾರ್ಥಿ ಪ್ರತಿನಿಧಿ ಆಯ್ಕೆಗೆ ಆವಕಾಶ ಕಲ್ಪಿಸಬೇಕು, ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಐಚ್ಛಿಕ ವಿಷಯ ಕಲಿಕೆಗೆ ಅವಕಾಶ ಕಲ್ಪಿಸುವಂತೆ ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸುವುದಾಗಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಎನ್ಎಸ್ಯುಐ ಶನಿವಾರ ನಗರದ ಅಲೋಶಿಸ್ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಐವನ್ ಡಿಸೋಜರನ್ನು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ, ವಿವಿ ಸಿಂಡಿಕೇಟ್ ಮತ್ತು ಸೆನೆಟ್ ವಿದ್ಯಾರ್ಥಿ ಪ್ರಾತಿನಿಧ್ಯವನ್ನು 14 ವರ್ಷ ಹಿಂದೆ ವಿವಿ ಕಾಯ್ದೆಗೆ ತಿದ್ದುಪಡಿ ತಂದು ತೆಗೆದುಹಾಕಲಾಗಿತ್ತು ಎಂದು ತಿಳಿಸಿದರು.
ವಿವಿ ಕುಂದುಕೊರತೆ ಚರ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಅವಶ್ಯಕತೆ ಇದೆ. ಆದ್ದರಿಂದ ಮತ್ತೆ ವಿವಿ ಕಾಯ್ದೆಗೆ ತಿದ್ದುಪಡಿ ತರುವಂತೆ ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.
ಕುಂದುಕೊರತೆ ಸಮಿತಿ: ವಿವಿ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಕುಂದುಕೊರತೆ ನಿವಾರಣಾ ಸಮಿತಿ ರಚಿಸುವಂತೆ ಸರ್ಕಾರವನ್ನು ಅಧಿವೇಶನದಲ್ಲಿ ಆಗ್ರಹಿಸಲಾಗಿದೆ. ಅರೆ ನ್ಯಾಯಾಂಗ ವ್ಯವಸ್ಥೆಯನ್ನೂ ಶಿಕ್ಷಣ ಕ್ಷೇತ್ರದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿದ್ದೇನೆ. ಶಿಕ್ಷಣ ಜತೆ ಇತರೆ ಚಟುವಟಿಕೆಗೂ ಒತ್ತು ನೀಡುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಹೇಳಿದರು.
ಎನ್ಎಸ್ಯುಐಗೆ ಕಿವಿ ಮಾತು: ಸಚಿವ ರಮಾನಾಥ ರೈ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೆಲವು ಸಂಘಟನೆಗಳು ಸುಳ್ಳು ಸುದ್ದಿ ಹರಡುವ ಮೂಲಕ ದೇಶದ್ರೋಹದ ಕೆಲಸ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳ ಮಧ್ಯೆ ಅವಿಶ್ವಾಸ, ಕಂದಕ ನಿರ್ಮಿಸುವ ಕೆಲಸ ಮಾಡುತ್ತಿವೆ. ಎನ್ಎಸ್ಯುಐ ಇದಕ್ಕೆ ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದರು.
ಬೇರೆ ಪಕ್ಷ ನೋಡಿ ಕಲಿಯಿರಿ: ಬಿಜೆಪಿ, ಕಮ್ಯೂನಿಸ್ಟ್ ಪಕ್ಷದಲ್ಲಿ ತಳಮಟ್ಟದಿಂದ ವ್ಯವಸ್ಥಿತವಾಗಿ ಸಂಘಟಿಸುತ್ತಾರೆ. ಕಾಂಗ್ರೆಸ್ನಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದವರು ದೂರ ಹೋಗಿದ್ದಾರೆ. ಅಂಥವರನ್ನು ಮತ್ತೆ ಸಂಘಟಿಸುವ ಕೆಲಸವಾಗಬೇಕು. ನಮ್ಮಲ್ಲಿ ಸಂಘಟನೆ ವ್ಯವಸ್ಥಿತವಾಗಿ ಆಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೋ ಹೇಳಿದರು.
ವೇದಿಕೆಯಲ್ಲಿ ಮುಖಂಡರಾದ ಕೋಡಿಜಾಲು ಇಬ್ರಾಹಿಂ, ಮಮತಾ ಗಟ್ಟಿ, ಶಶಿಧರ ಹೆಗ್ಡೆ, ಮಿಥುನ್ ರೈ, ಅಶಿಶ್ ಪಿರೇರಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

