ದಕ್ಷಿಣ ಕನ್ನಡ

ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆ ಬಹಿಷ್ಕಾರ

Published On :

ಬಂಟ್ವಾಳ: 'ಚುನಾವಣೆಗೆ ಮೊದಲು ರಸ್ತೆ ದುರಸ್ತಿ ಮಾಡಿಕೊಡಿ, ತಪ್ಪಿದರೆ ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ'.
ಇದು ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ- ಕರ್ಪೆ ಪರಿಸರದ ಸಾರ್ವಜನಿಕರ ಆಕ್ರೋಶದ ನುಡಿ. ತೀರ ಹದಗೆಟ್ಟಿರುವ ಸಿದ್ದಕಟ್ಟೆ- ಕರ್ಪೆ ರಸ್ತೆ ದುರಸ್ತಿಗೊಳಿಸಿ ಎಂಬ ಮನವಿಯನ್ನು ಪುರಸ್ಕರಿಸದ ಆಡಳಿತ ವ್ಯವಸ್ಥೆ ವಿರುದ್ಧ ರೋಸಿಹೋದ ಸಾರ್ವಜನಿಕರು ಇತ್ತೀಚೆಗೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕೆಲ ತಾಸುಗಳ ಕಾಲ ಮೂಡುಬಿದಿರೆ- ಬಿ.ಸಿ.ರೋಡ್ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು.
ಕಳೆದ ಸುಮಾರು ಹದಿನೈದು ವರ್ಷಗಳಿಂದ ಈ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಹೊಂಡಮಯವಾದ ರಸ್ತೆಯನ್ನು ದುರಸ್ತಿಗೊಳಿಸದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಂಬಂಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಜಿಲ್ಲಾ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆ ಸ್ಪಂದಿಸದ ಹಿನ್ನೆಲೆಯಲ್ಲಿ ಮೂಡುಬಿದಿರೆ- ಬಿ.ಸಿ.ರೋಡ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದರಲ್ಲದೆ ರಸ್ತೆಯಲ್ಲೇ ಮಲಗಿದ ಘಟನೆಯೂ ಈ ವೇಳೆ ನಡೆಯಿತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯೆ ನಳಿನಿ ಬಿ. ಶೆಟ್ಟಿ  ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಅನುದಾನದ ಕೊರತೆಯಿಂದ ರಸ್ತೆ ದುರಸ್ತಿ ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಸಿದ್ಧಕಟ್ಟೆ- ಕರ್ಪೆ- ಅಣ್ಣಳಿಕೆ ಸಂಪರ್ಕದ 13 ಕಿ.ಮೀ. ರಸ್ತೆಯನ್ನು ಅಗಲೀಕರಿಸಿ ಮರುಡಾಂಬರಿಕರಣಕ್ಕಾಗಿ ರು. 8 ಕೋಟಿ ಪ್ರಸ್ತಾವನೆಯನ್ನು ಸಚಿವ ಬಿ. ರಮಾನಾಥ ರೈ ಸರ್ಕಾರಕ್ಕೆ ಕಳುಹಿಸಿದ್ದು, ಮಂಜೂರಾತಿ ಹಂತದಲ್ಲಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಸಂಗಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭಾಕರ ಪ್ರಭು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿದರು.
ಮಧ್ಯಾಹ್ನದ ಹೊತ್ತಿಗೆ ಸ್ಥಳಕ್ಕಾಗಮಿಸಿದ ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ್ ಅವರು ರಸ್ತೆ ಅಭಿವೃದ್ಧಿ ಬಗ್ಗೆ ಇಲಾಖಾಧಿಕಾರಿಗಳಲ್ಲಿ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ಕೊನೆಗೊಳಿಸಲಾಯಿತು. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ಬಿಜೆಪಿ ಪ್ರಮುಖರಾದ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಸುಲೋಚನ ಜಿ.ಕೆ. ಭಟ್, ತಾ.ಪಂ. ಸದಸ್ಯೆ ರೇವತಿ ಆರ್. ಪೂಜಾರಿ, ರತ್ನಕುಮಾರ್ ಚೌಟ, ಗ್ರಾ.ಪಂ. ಸದಸ್ಯರಾದ ಸಂದೇಶ ಶೆಟ್ಟಿ, ಸತೀಶ್ ಪೂಜಾರಿ, ಎಸ್.ಪಿ. ಶ್ರೀಧರ್, ರಿಕ್ಷಾ ಚಾಲಕ- ಮಾಲೀಕರು, ಪಿಕಪ್ ವಾಹನ ಚಾಲಕ- ಮಾಲೀಕರು, ಬಸ್ ಚಾಲಕ ಡಾ. ರಾಮರಾಯ ಪ್ರಭು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.