ಪ್ರಶಾಂತ ನಾಮಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ, ಕಾರವಾರ, ಮಾ. 26
ಲೋಕಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆಗೆ ಅಂತಿಮ ದಿನವಾದ ಬುಧವಾರ ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ ದೇಶಪಾಂಡೆ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಮಧ್ಯಾಹ್ನ 1.15ಕ್ಕೆ ಕಾರವಾದ ಮಾಲಾದೇವಿ ಮೈದಾನದಿಂದ ಸಾವಿರಾರು ಬೆಂಬಲಿಗರೊಡನೆ ತೆರೆದ ವಾಹನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಜೊತೆಗೆ ಪ್ರಶಾಂತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ನಂತರ 1.30ಕ್ಕೆ ಜಿಲ್ಲಾ ಚುನಾವಣಾಧಿಕಾರಿ ಎಂ.ಟಿ. ರೇಜು ಅವರಿಗೆ ನಾಮಪತ್ರ ಸಲ್ಲಿಸಿದರು.
ಪತ್ನಿ ಆವನಿ ಪ್ರಶಾಂತ ದೇಶಪಾಂಡೆ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೆಕರ್, ಪಕ್ಷದ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆಯ ವೇಳೆ ಪ್ರಶಾಂತಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಯ ನಂತರ ಪತ್ರಕರ್ತರ ಜೊತೆ ಮಾತನಾಡಿದ ಪ್ರಶಾಂತ ದೇಶಪಾಂಡೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಉದ್ದಕ್ಕೂ ಪ್ರವಾಸ ಮಾಡಿದ್ದೇನೆ. ಇಲ್ಲಿಯ ಸಮಸ್ಯೆಗಳ ಬಗ್ಗೆ ಹಾಗೂ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಪೂರ್ಣ ಅರಿವಿದೆ. ಜಿಲ್ಲೆಯ ಅರಣ್ಯ ಅತಿಕ್ರಮಣದಾರರಿಗೆ ಸಂಪೂರ್ಣವಾಗಿ ಅರಣ್ಯ ಹಕ್ಕು ಪತ್ರ ವಿತರಣೆ ಆಗಬೇಕಿದೆ. ವಿವಿಧ ಯೋಜನೆಗಳಿಂದ ನಿರಾಶ್ರಿತರಾಗಿರುವ ಜನರಿಗೆ ತಕ್ಕ ಪರಿಹಾರ ಸಿಗಬೇಕಿದೆ. ಮುಖ್ಯವಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗ ಆಗಬೇಕಿದೆ. ಮೀನುಗಾರರ ಹಾಗೂ ರೈತರ ಅಭಿವೃದ್ಧಿ ಆಗಬೇಕಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಅಭ್ಯರ್ಥಿಗಳು ನಮಗೆ ಪ್ರತಿಸ್ಪರ್ಧಿಗಳಾಗಿದ್ದಾರೆ. ಆದರೆ ಕೇತ್ರದಲ್ಲಿ ಕಾಂಗ್ರೆಸ್ ಬೇರು ಮಟ್ಟದಿಂದ ಗಟ್ಟಿಯಾಗಿದೆ. ನಮ್ಮ ಕಾರ್ಯಕರ್ತರು ಪಕ್ಷದ ಗೆಲವಿಗಾಗಿ ದುಡಿಯುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆಲವು ನಿಶ್ಚಿತ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಹಿರಿಯ ಅನುಭವಿಗಳಾದ ಆರ್.ವಿ. ದೇಶಪಾಂಡೆ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸುತ್ತಿದೆ. ಬಿಜೆಪಿ ವೈಫಲ್ಯ ಕಾಂಗ್ರೆಸ್ಗೆ ವರದಾನವಾಗಲಿದೆ ಎಂದರು.
ಗಮನಸೆಳೆದ ಅದ್ಧೂರಿ ಮೆರವಣಿಗೆ
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ ದೇಶಪಾಂಡೆ ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಪಕ್ಷದ ಪ್ರಮುಖ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ಮಾಲಾದೇವಿ ಮೈದಾನದಲ್ಲಿ ಬೆಳಗ್ಗೆ 11ರಿಂದಲೆ ಜಿಲ್ಲೆಯ ವಿವಿಧ ಮೂಲಗಳಿಂದ ಪಕ್ಷದ ಕಾರ್ಯಕರ್ತರು ಆಗಮಿಸತೊಡಗಿದರು. 12 ಗಂಟೆ ಸುಮಾರಿಗೆ ಸಾವಿರಾರು ಜನರು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಪಕ್ಷದ ಅಭ್ಯರ್ಥಿ ಪ್ರಶಾಂತ ದೇಶಪಾಂಡೆ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಕುಮಟಾ ಶಾಸಕಿ ಶಾರದಾ ಶೆಟ್ಟಿ, ಭಟ್ಕಳ ಶಾಸಕ ಮಂಕಾಳ ವೈದ್ಯ, ಕಿತ್ತೂರು ಶಾಸಕ ಡಿ.ಬಿ. ಇನಾಮದಾರ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೌಡ, ಉಪಾಧ್ಯಕ್ಷೆ ಲಲಿತಾ ಪಟಗಾರ, ಜಿಪಂನ ಬಹುತೇಕ ಸದಸ್ಯರು, ಬ್ಲಾಕ್ ಕಾಂಗ್ರೆಸ್ನ ಬಹುತೇಕ ಅಧ್ಯಕ್ಷರು, ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು ಒಂದು ಗಂಟೆ ಕಾಲ ಮೆರವಣಿಗೆ ನಡೆಯಿತು. ಜಿಲ್ಲೆಯ ವಿವಿಧೆಡೆಯಿಂದ ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಸುಡು ಬಿಸಿಲಿನಲ್ಲೂ ಜಿಲ್ಲಾಧಿಕಾರಿ ಕಚೇರಿ ಸುತ್ತ ಕಾಂಗ್ರೆಸ್ನ ಸಾವಿರಾರು ಕಾರ್ಯಕರ್ತರು ನಿಂತಿದ್ದು ಕಂಡುಬಂತು.
ಮಾರ್ಗರೆಟ್ ಬಣದವರ ಗೈರು: ಪ್ರಶಾಂತ ದೇಶಪಾಂಡೆ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಮೆರವಣಿಗೆಯಲ್ಲಿ ಮಾರ್ಗರೆಟ್ ಆಳ್ವ ಬಣದ ಪ್ರಮುಖರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಪಕ್ಷದಲ್ಲಿ ಎಲ್ಲವೂ ಸರಿ ಇದೆ. ಒಗ್ಗಟ್ಟು ಇದೆ ಎಂದು ದೇಶಪಾಂಡೆ ಬಹಿರಂಗವಾಗಿ ಹೇಳಿಕೆ ನೀಡಿದ್ದರೂ, ಮಾರ್ಗರೆಟ್ ಆಳ್ವ ಬಣದ ಪ್ರಮುಖರು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಇರುವುದು ಅಚ್ಚರಿಗೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

