ರೇಲ್ವೆಯಲ್ಲಿ ಖಾಸಗಿ, ವಿದೇಶಿ ಹೂಡಿಕೆ
ಪುತ್ತೂರು: ದೇಶಾದ್ಯಂತ ರೇಲ್ವೆ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳು, ಸಾರ್ವಜನಿಕರು ಹಾಗೂ ವಿದೇಶಿ ಹೂಡಿಕೆಗೆ ಒತ್ತು ನೀಡಲಾಗುವುದು. ಜನತೆಯ ಅನುಕೂಲತೆಗಾಗಿ ಖಾಸಗಿ ಸಂಸ್ಥೆಗಳಿಗೆ ರೇಲ್ವೆ ನಿಲ್ದಾಣಗಳ ಉಸ್ತುವಾರಿ ಹಾಗೂ ಖಾಸಗಿ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದು ಕೇಂದ್ರ ರೇಲ್ವೆ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕೇಂದ್ರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಪುತ್ತೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾತ್ರಾ ಸ್ಥಳಗಳಿಗೆ ಖಾಸಗಿ ರೈಲು: ಕೆಲವೊಂದು ಯಾತ್ರಾಸ್ಥಳಗಳಿಗೆ ಖಾಸಗಿ ರೈಲುಗಳ ಓಡಾಟ ನಡೆಸಲು ಖಾಸಗಿ ಸಂಸ್ಥೆಗಳಿಗೆ ಅವಕಾಶ ಕಲ್ಪಿಸುವ ಮೂಲಕ ಹೊಸ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ನಡೆಸಲಾಗುವುದು. ಇಂತಹ ಯೋಜನೆಗಳಿಂದ ಇಲಾಖೆಗೆ ಬೇಕಾದ ಅಗತ್ಯದ ಸಂಪನ್ಮೂಲ ಕ್ರೋಢೀಕರಣ ನಡೆಸಲು ಸಾಧ್ಯವಾಗುವುದು ಎಂದು ತಿಳಿಸಿದರು.
ಪುತ್ತೂರು, ಸುಬ್ರಹ್ಮಣ್ಯ ನಿಲ್ದಾಣ ಮೇಲ್ದರ್ಜೆಗೆ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೇಲ್ವೆ ಅಭಿವೃದ್ಧಿಗಾಗಿ ಸಂಪೂರ್ಣ ಕ್ರಮ ಕೈಗೊಳ್ಳಲಾಗುವುದು. ಪುತ್ತೂರು ಹಾಗೂ ಸುಬ್ರಹ್ಮಣ್ಯ ರೇಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ತಕ್ಷಣದಿಂದಲೇ ಪ್ರಾರಂಭ ಮಾಡಲಾಗುವುದು ಎಂದು ಡೀವಿ ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ಹೋರಾಟ ಮಾಡಿರುವ ರೇಲ್ವೆ ಕೆಲಸಗಳ ಬಗ್ಗೆ ಮುತುವರ್ಜಿ ವಹಿಸಿ ಸ್ಥಗಿತವಾಗಿರುವ ಯೋಜನೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಇಲ್ಲಿಗೆ ಹೆಚ್ಚುವರಿ ವ್ಯವಸ್ಥೆಗಳನ್ನು ತಿಳಿದುಕೊಂಡು ಪೂರೈಕೆ ಮಾಡಲಾಗುವುದು. ಕಾಸರಗೋಡು- ಕಾಂಞಗಾಡ್ ನಡುವೆ ರೈಲು ಓಡಾಟ ಬೇಡಿಕೆ ಅತ್ಯಂತ ಅಗತ್ಯದ್ದಾಗಿದ್ದು, ಅಗತ್ಯದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪುತ್ತೂರು ವಿವೇಕಾನಂದ ಕಾಲೇಜು ರಸ್ತೆಯಲ್ಲಿ ರೈಲು ಮಾರ್ಗವಿದ್ದು, ರಸ್ತೆ ಅತ್ಯಂತ ಕಿರಿದಾಗಿದೆ. ಇದರ ಅಗಲೀಕರಣ ನಡೆಸಲಾಗುವುದು. ಪುತ್ತೂರು ಎಪಿಎಂಸಿ ರಸ್ತೆಯಲ್ಲಿರುವ ರೇಲ್ವೆ ಗೇಟ್ ಅವ್ಯವಸ್ಥೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದವರು ಭರವಸೆ ನೀಡಿದರು.
ಭಾನುವಾರ ಬೆಂಗಳೂರಿನಲ್ಲಿ ಸಭೆ: ರಾಜ್ಯದಲ್ಲಿ ರೇಲ್ವೆ ಅಭಿವೃದ್ಧಿಗಾಗಿ ಬೆಂಗಳೂರಿನ ತನ್ನ ಮನೆಯಲ್ಲಿ ಅಧಿಕಾರಿಗಳ ಸಭೆಯನ್ನು ಭಾನುವಾರ ನಡೆಸುವುದಾಗಿ ತಿಳಿಸಿದ ಡೀವಿ, ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡು ರಾಜ್ಯದಲ್ಲಿ ರೇಲ್ವೇ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

