ಹೊನ್ನಾಳಿ: ಗ್ರಾಮೀಣ ಹಂತಗಳಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಗುರುತಿಸಿ ಅಂತಹ ಮಕ್ಕಳ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಹತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಾಮಾನ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಬಡ ಕೂಲಿಕಾರ್ಮಿಕರು ಹೆಚ್ಚಾಗಿದ್ದು, ಅವರು ತಮ್ಮ ಕೆಲಸಗಳಲ್ಲೇ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಹಾಗಾಗಿ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಲ್ಲಿ ವಿಫಲರಾಗಿರುತ್ತಾರೆ ಅಂತಹ ಸಂದರ್ಭದಲ್ಲಿ ಶಿಕ್ಷಕರು ಪ್ರತಿಭಾವಂತ ಮಕ್ಕಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ಪ್ರದೇಶದ ಪೋಷಕರು ಪೇಟೆಯ ಖಾಸಗಿ ಶಾಲೆಗಳ ಆಕರ್ಷಣೆಗೆ ಒಳಗಾಗಿ ದೂರ ಊರಿಗಳಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಪದ್ಧತಿಯನ್ನು ಕೈಬಿಡಿ ಎಂದ ಅವರು, ತಮ್ಮ ಗ್ರಾಮಗಳಲ್ಲಿಯೇ ಇರುವ ಸರ್ಕಾರಿ ಶಾಲೆಗಳಿಗೆ ಕಳುಹಿಸಿ ಅಲ್ಲಿನ ಶಿಕ್ಷಕರೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ತಮ್ಮ ಮಕ್ಕಳ ಕಲಿಕೆಯ ಕಡೆಗೆ ಗಮನಹರಿಸಿ ಎಂದರು.
ಎಪಿಎಂಸಿ ಅಧ್ಯಕ್ಷ ಧರ್ಮಪ್ಪ, ಬಿ. ಕೋಮೇಶ್ವರಪ್ಪ, ರತ್ನಮ್ಮ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿ. ಮಲ್ಲಿಕಾರ್ಜುನ್ ಮಾತನಾಡಿದರು. ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಭರಮಪ್ಪ ಮೈಸೂರು, ಕ್ಷೇತ್ರ ಸಂಪನ್ಮೂಲಾಧಿಕಾರಿ ನಿರಂಜನ ಮೂರ್ತಿ ಇದ್ದರು.