ಮಹಿಳಾ ರಕ್ಷಣೆಗೆ ಕಠಿಣ ಕಾನೂನು ಅಗತ್ಯ
ಕ.ಪ್ರ.ವಾರ್ತೆ, ದಾವಣಗೆರೆ, ಮಾ.8
ಭಾರತದ ಸಂವಿಧಾನದಲ್ಲಿ ಮಹಿಳೆಯರ ರಕ್ಷಣೆಗೆ ಸಾಕಷ್ಟು ಅವಕಾಶ ಮಾಡಿಕೊಟ್ಟಿದ್ದರೂ, ಲಿಂಗ ಸಮಾನತೆ ಎಂಬುದುಮರೀಚಿಕೆಯಾಗಿದೆ. ಸದ್ಯದ ಕಾನೂನುಗಳಿಂದ ಮಹಿಳೆಯರಿಗೆ ಸೂಕ್ತ ರಕ್ಷಣೆಯೇ ಸಿಗುತ್ತಿಲ್ಲ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ. ಚಂದ್ರಮಲ್ಲೇಗೌಡ ವಿಷಾದ ವ್ಯಕ್ತಪಡಿಸಿದರು.
ನಗರದ ರಾ.ಲ. ಕಾನೂನು ಕಾಲೇಜಿನಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಒಂದು ದಿನದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದರು.
ಸಮಾನ ಅವಕಾಶ: ಅನಾದಿಯಿಂದ ಮಹಿಳೆ ಸಾಕಷ್ಟು ಶೋಷಣೆಗೆ ಒಳಗಾಗುತ್ತಾ ಬಂದಿದ್ದಾಳೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡೇ ಭಾರತದ ಸಂವಿಧಾನದಲ್ಲಿ ಸರ್ವರಿಗೂ ಸಮಾನ ಅವಕಾಶ ನೀಡಿದೆ. ಆದರೆ ಇಂದು ಲಿಂಗ ಸಮಾನತೆ ಎಂಬುದು ಮರೀಚಿಕೆಯಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಶೋಷಣೆಯಿಂದ ಮಹಿಳೆಯರಿಗೆ ರಕ್ಷಣೆಯೇ ಸಿಗುತ್ತಿಲ್ಲ ಎಂದು ಅವರು ಹೇಳಿದರು.
ಮಹಿಳೆಯರ ರಕ್ಷಣೆಗೆ ಅತ್ಯಂತ ಕಠಿಣ ಕಾನೂನು ರೂಪಿಸಿ, ಜಾರಿಗೊಳಿಸಬೇಕಾದ ಅಗತ್ಯವಿದೆ. ಮಹಿಳೆಯರ ಅಭಿವೃದ್ಧಿಗೆ ಸರ್ಕಾರ ಹಲವಾರು ಕಾನೂನು ರೂಪಿಸಿ, ಜಾರಿಗೆ ತಂದಿದ್ದರೂ ಅವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಆರ್ಥಿಕ, ಶೈಕ್ಷಣಿಕವಾಗಿ ಮಹಿಳೆಯರು ಹಿಂದುಳಿದಿದ್ದು, ಅಂತಹವರನ್ನು ಮುಖ್ಯ ವಾಹಿನಿಗೆ ತರಲು ಪೂರಕ ವಾತಾವರಣ ಕಲ್ಪಿಸಬೇಕಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶದ ಮಹಿಳೆಯರು ಒಂದಿಷ್ಟು ಅಭಿವೃದ್ಧಿ ಸಾಧಿಸುತ್ತಿದ್ದಾರೆ. ಆದರೆ, ಗ್ರಾಮೀಣ ಮಹಿಳೆಯರಿಗೆ ಅದು ಸಾಧ್ಯವಾಗಿಲ್ಲ. ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಜಾಗೃತಿ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸಬೇಕಿದೆ ಎಂದರು.
ನೆರವು ಪಡೆಯಿರಿ: ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ಟಿ. ದೇವೇಂದ್ರನ್ ಮಾತನಾಡಿ, ಅಗತ್ಯ ಸಂದರ್ಭಗಳಲ್ಲಿ ಮಹಿಳೆಯರು ಕಾನೂನು ಸೇವಾ ಪ್ರಾಧಿಕಾರದ ನೆರವು ಪಡೆಯಬೇಕು. ಕಾನೂನು ಅರಿವು ಕಾರ್ಯಾಗಾರಗಳಲ್ಲಿ ಮಹಿಳೆಯರು, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಇತರರಿಗೆ ಮಹಿಳಾ ಪರ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಭ್ರೂಣಹತ್ಯೆ, ಬಾಲ್ಯವಿವಾಹ, ಬಾಲ ಕಾರ್ಮಿಕತೆಯಂತಹ ಸಾಮಾಜಿಕ ಪಿಡುಗು, ಅನಿಷ್ಟಗಳ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಇಂತಹ ಪದ್ಧತಿ ತಡೆಗಟ್ಟಲು ಸರ್ಕಾರ, ಸಂಬಂಧಿಸಿದ ಇಲಾಖೆಗಳ ಜೊತೆ ಸಾರ್ವಜನಿಕರೂ ಕೈಜೋಡಿಸಿದಾಗ ಇಂತಹ ಕಾನೂನುಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸುಭಾಷ್ ಶಿವಪ್ಪ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಇಒ ಎ.ಬಿ. ಹೇಮಚಂದ್ರ, ಹಿರಿಯ ಕಾನೂನು ತಜ್ಞ ಪ್ರೊ. ಎಸ್.ಎಚ್. ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಆರ್. ಸುಮಿತ್ರಾದೇವಿ, ಬೋಧಕ- ಬೋಧಕೇತರ ಸಿಬ್ಬಂದಿ, ಕಾನೂನು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

