ಧಾರವಾಡ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ:ಶಾಸಕ ಜಾರಕಿಹೊಳಿ ವಿಶ್ವಾಸ

Published On :

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ದೊರೆಯಲಿದ್ದು, ಕಾಂಗ್ರೆಸ್ ಪಕ್ಷವು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಶಾಸಕ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರದ ಐದು ವರ್ಷಗಳ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಪರವಾದ ಎಲೆ ಇದೆ. ಸದ್ಯ ನಡೆಯುತ್ತಿರುವ ರಾಜಕೀಯ ವಿಶ್ಲೇಷಕರ ಸಮೀಕ್ಷೆ ಕೂಡ ಕಾಂಗ್ರೆಸ್‌ಗೆ ಪೂರಕವಾಗಿದ್ದು, ಸ್ಪಷ್ಟ ಬಹುಮತ ದೊರೆಯಲಿದೆ. ಒಟ್ಟು 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದರು.
ಸೋನಿಯಾ ಆಶೀರ್ವಾದ ಇದ್ದವರೆ ಸಿಎಂ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಶೀರ್ವಾದ ಯಾರಿಗೆ ಇರುತ್ತದೆಯೋ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಸತೀಶ ಜಾರಕಿಹೊಳಿ ಹೇಳಿದರು. ಟಿಕೆಟ್ ಹಂಚಿಕೆ ವೇಳೆ ಎಲ್ಲ ಪಕ್ಷಗಳಲ್ಲಿ ಕೆಲ ಗೊಂದಲ ಇರುವುದು ಸಹಜ. ಟಿಕೆಟ್ ವಂಚಿತರನ್ನು ಸಮಾಧಾನಗೊಳಿಸಲಾಗುತ್ತದೆ. ಯಾರಿಗೆ ಟಿಕೆಟ್ ನೀಡಬೇಕೆನ್ನುವುದು ಹೈಕಮಾಂಡ್ ತೀರ್ಮಾನವೇ ಅಂತಿಮ. ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.
ಕುಟುಂಬದ ಆಧಾರದ ಮೇಲೆ ಚುನಾವಣೆ ಎದುರಿಸಲ್ಲ: ಜಾರಕಿಹೊಳಿ ಸಹೋದರರು ಕುಟುಂಬದ ಆಧಾರದ ಮೇಲೆ ಚುನಾವಣೆಯನ್ನು ಎದುರಿಸುವ ಪ್ರಶ್ನೆಯೇ ಇಲ್ಲ. ನಾವು ಐದು ಸಹೋದರರು ಕಾಂಗ್ರೆಸ್, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇವೆ ಎಂದ ಮಾತ್ರಕ್ಕೆ ಕುಟುಂಬದ ಆಧಾರದ ಮೇಲೆ ಚುನಾವಣೆ ಎದುರಿಸುವುದಿಲ್ಲ. ಪಕ್ಷದ ಆಧಾರದ ಮೇಲೆಯೇ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಜಾರಕಿಹೊಳಿ ತಿಳಿಸಿದರು.
17 ರಂದು ಕಾಂಗ್ರೆಸ್ ಸಮಾವೇಶ: ಚುನಾವಣಾ ಪ್ರಚಾರಾರ್ಥವಾಗಿ ಯಮಕನಮರಡಿಯಲ್ಲಿ ಏ.17ರಂದು ಕಾಂಗ್ರೆಸ್ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಎದ್ದಿದೆ. ಜಿಲ್ಲೆಯಲ್ಲಿ 18 ವಿಧಾನಸಭೆ ಕ್ಷೇತ್ರಗಳ ಪೈಕಿ 10-12 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನನಗೆ ಬಿಜೆಪಿಯೇ ಎದುರಾಳಿ. ಆದರೆ, ಬಿಜೆಪಿಗೆ ಪ್ರಬಲ ಅಭ್ಯರ್ಥಿಗಳೇ ದೊರೆಯುತ್ತಿಲ್ಲ. ಕಾಂಗ್ರೆಸ್ ಕೂಡ 2-3 ಸ್ಥಳಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಅಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.