ಕಿಮ್ಸ್ ವೈದ್ಯರ ಕರ್ತವ್ಯಲೋಪ: ಧರಣಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಆ. 2
ಉತ್ತರ ಕರ್ನಾಟಕದ ಬಡರೋಗಿಗಳಿಗೆ ಬೆನ್ನೆಲುಬಾಗಿರುವ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯಲೋಪವೆಸಗಿದ ವೈದ್ಯರನ್ನು ಕೂಡಲೇ ಅಮಾನತ್ತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಜೈಭೀಮ ಸೇನಾ ಕಾರ್ಯಕರ್ತರು ಕಿಮ್ಸ್ ಎದುರು ಪ್ರತಿಭಟನೆ ನಡೆಸಿದರು.
ಕಿಮ್ಸ್ ವೈದ್ಯರು ಸರ್ಕಾರದಿಂದ ಪ್ರತಿ ತಿಂಗಳು ಲಕ್ಷಾಂತರ ಸಂಬಳ ಪಡೆಯುತ್ತಾರೆ. ಆದರೆ ಕಿಮ್ಸ್ನಲ್ಲಿ ಕಾರ್ಯನಿರ್ವಹಿಸುವ ಬದಲು ಹೆಚ್ಚಿನ ಸಮಯವನ್ನು ತಮ್ಮ ಖಾಸಗಿ ಆಸ್ಪತ್ರೆಯಲ್ಲಿ ಕಳೆಯುತ್ತಾರೆ. ಹಿರಿಯ ವೈದ್ಯರ ಅನುಪಸ್ಥಿತಿಯಲ್ಲಿ ಕಿಮ್ಸ್ನಲ್ಲಿ ಕಿರಿಯ ವೈದ್ಯರು ಕಾರ್ಯನಿರ್ವಹಿಸುತ್ತಾರಾದರೂ, ಅವರ ಅನುಭವದ ಕೊರತೆಯಿಂದಾಗಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಂದ ಅವರು ಇಲ್ಲಿವರೆಗೆ ಪಡೆದ ಸಂಬಳವನ್ನು ಸರ್ಕಾರ ವಸೂಲಿ ಮಾಡಬೇಕು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಲಿ. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸೇನೆಯ ಉಪಾಧ್ಯಕ್ಷ ಬಸಂತಕುಮಾರ ಅನಂತಪುರ, ಜಯರಾಮ ತಿಮ್ಮಸಂದ್ರ, ರವಿ ಹನುಮಸಾಗರ, ಶಂಕರ ಪವಾರ, ನಿಜಾಮ ಮನಿಯಾರ ಮತ್ತಿತರರು ಇದ್ದರು.
ವೈದ್ಯಾಧಿಕಾರಿಗಳು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ
ಹುಬ್ಬಳ್ಳಿ: ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಿಮ್ಸ್ನ ವೈದ್ಯಾಧಿಕಾರಿಗಳು ಹಾಗೂ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕದ ದೊಡ್ಡ ಆಸ್ಪತ್ರೆಯಾಗಿರುವ ಕಿಮ್ಸ್ನಲ್ಲಿ ವೈದ್ಯರು ರೋಗಿಗಳೊಂದಿಗೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದಾರೆ. ಔಷಧಿ- ಮಾತ್ರೆಗಳನ್ನು ಸರಿಯಾಗಿ ಪೂರೈಸದ ಕಾರಣ ಬಡರೋಗಿಗಳು ಹೊರಗಿನ ಔಷಧ ಅಂಗಡಿಗಳಿಂದ ಔಷಧಿ ಖರೀದಿಸುವಂತಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ದೂರಿದರು.
ಕಿಮ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚಿನ ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವುದರಿಂದ ಕಿಮ್ಸ್ನಲ್ಲಿ ಅರ್ಧ ಗಂಟೆಯೂ ಕೆಲಸ ಮಾಡುತ್ತಿಲ್ಲ. ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಲಷ್ಟೇ ಬೆಳಗಿನ ಜಾವ ಕಿಮ್ಸ್ಗೆ ಬರುವ ವೈದ್ಯರು, ನಂತರ ತಮ್ಮ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಾರೆ. ಕಿಮ್ಸ್ ವೈದ್ಯರ ಈ ವರ್ತನೆ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷರೂ ಆಗಿರುವ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿಗೆ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

