ಧಾರವಾಡ

24ರಂದು ಲೋಕಸಭೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆ

Published On :

ಹುಬ್ಬಳ್ಳಿ: ದಿಲ್ಲಿಯಲ್ಲಿ ಡಿ. 24ರಂದು ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ರಾಜ್ಯ ಘಟಕದ ಅಧ್ಯಕ್ಷರ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿತ ಹಾಗೂ ಚುನಾವಣೆ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಭೆ ನೇತೃತ್ವ ವಹಿಸುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿ ಅವರು ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗದರ್ಶನಗಳ ಕುರಿತು ಮಾಹಿತಿ ನೀಡುವರು ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ವರದಿಯನ್ನು ಜ. 17ರಿಂದ 19ರ ವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನೀಡಲಾಗುವುದು. ನಂತರ ಆಯ್ಕೆ ಪ್ರಕ್ರಿಯೆ ಅಂತಿಮ ತೀರ್ಮಾನ ನಡೆಯಲಿದೆ ಎಂದು ಹೇಳಿದರು.
ಸಿಇಟಿ: ವೃತ್ತಿ ಶಿಕ್ಷಣ ಕಾಯ್ದೆ 2006ನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಈ ಕಾಯ್ದೆಯನ್ನು ಸರ್ಕಾರ ತಟಸ್ಥವಾಗಿಡಬೇಕು ಎಂದು ಸಂಸದ ಜೋಶಿ ಒತ್ತಾಯಿಸಿದರು.
2006ರಲ್ಲಿನ ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಈ ಕಾಯ್ದೆ ರೂಪಿಸಲಾಯಿತಾದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಯ್ದೆ ಜಾರಿಗೊಳಿಸಲಿಲ್ಲ. ನಂತರ ಬಿಜೆಪಿ ಐದು ವರ್ಷಗಳವರೆಗೆ ನಡೆಸಿದ ಅಧಿಕಾರದ ಸಂದರ್ಭದಲ್ಲಿಯೂ ಕಾಯ್ದೆಯನ್ನು ತಟಸ್ಥವಾಗಿಟ್ಟಿತ್ತು ಎಂದರು.
ಸುಪ್ರೀಂಕೋರ್ಟ್ ಆದೇಶ ಇದ್ದರೂ ಯಾವುದೇ ರಾಜ್ಯಗಳು ಈ ಕಾಯ್ದೆ ಜಾರಿಗೆ ಮುಂದಾಗಿಲ್ಲ. ಕರ್ನಾಟಕವೂ ತಟಸ್ಥ ನೀತಿ ಅನುಸರಿಸುವ ಮೂಲಕ ಕಾಯ್ದೆ ಜಾರಿಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು. ದೇಶದಾದ್ಯಂತ ಏಕರೂಪ ನೀತಿ ಜಾರಿಗೆ ತರಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು. ಸಚಿವ ಸಂಪುಟದಲ್ಲಿರುವ ಕೆಲ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಪದಾಧಿಕಾರಿಗಳ ಹಿತಾಸಕ್ತಿಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ವಿದ್ಯಾರ್ಥಿಗಳ ಹಿತ ಬಲಿಕೊಡಲು ಮುಂದಾಗಿರುವುದು ಖಂಡನೀಯ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಶಿಕ್ಷಣಕ್ಕಾಗಿ ಸದ್ಯ ಇರುವ 1.10 ಲಕ್ಷ ಸರ್ಕಾರಿ ಕೋಟಾ ಸೀಟುಗಳ ಸಂಖ್ಯೆ ಈ 2006ರ ಕಾಯ್ದೆ ಜಾರಿಯಿಂದ 55 ರಿಂದ 60 ಸಾವಿರಕ್ಕೆ ಕುಸಿಯಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.