ಧಾರವಾಡ-ಸವದತ್ತಿ ರಸ್ತೆ ಕಳಪೆ
ಕನ್ನಡಪ್ರಭ ವಾರ್ತೆ, ಧಾರವಾಡ, ಜು. 2
ಧಾರವಾಡ-ಸವದತ್ತಿ ರಸ್ತೆ ನಿರ್ಮಾಣ ಕಾಮಗಾರಿ ಪೂರ್ತಿ ಕಳಪೆಯಿಂದ ಕೂಡಿದ್ದು, ಮೇಲ್ಮಟ್ಟದ ಅಧಿಕಾರಿಗಳಿಗೆ ಈ ಕುರಿತು ದೂರು ನೀಡುವುದಲ್ಲದೆ ಸರ್ಕಾರ ತಕ್ಷಣವೇ ತನಿಖೆ ನಡೆಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ಮಂಗಳವಾರ ರಸ್ತೆಯ ಕಾಮಗಾರಿ ನಡೆಯುವ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಒಂದು ಮೀಟರ್ ಎತ್ತರ ರಸ್ತೆ ಕಾಮಗಾರಿ ಆಗಬೇಕಿತ್ತು. ಆದರೆ, ಕೆಳಗೆ ಕಪ್ಪು ಮಣ್ಣು ಹಾಕಿದ್ದು ರಸ್ತೆ ಕುಸಿಯುತ್ತಿದೆ. ರಸ್ತೆ ಕಾಮಗಾರಿಯಲ್ಲಿ ಸೇತುವೆ ಬಳಿ ನಾಮಫಲಕಗಳನ್ನು ಹಾಕದಿರುವುದರಿಂದ, ಪರ್ಯಾಯ ರಸ್ತೆ ಪೂರ್ತಿ ಮಣ್ಣಿನಿಂದ ಕೂಡಿದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಎರಡು ವರ್ಷಗಳ ಹಿಂದೆಯೇ ಅಂದಿನ ಬಿಜೆಪಿ ಸರ್ಕಾರ ಈ ರಸ್ತೆಯ ನಿರ್ಮಾಣಕ್ಕೆ ಅಗತ್ಯವಿರುವ ರು. 84 ಕೋಟಿ ಬಿಡುಗಡೆ ಮಾಡಿದೆ. 2013ರ ಜೂನ್ ತಿಂಗಳಿಗೆ ಇದರ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡು, ಸಾರ್ವಜನಿಕರ ಉಪಯೋಗಕ್ಕೆ ಸಿದ್ಧಗೊಳ್ಳಬೇಕಿತ್ತು. ಆದರೆ, ರಸ್ತೆ ನಿರ್ಮಾಣವು ವಿಳಂಬಗೊಂಡಿದೆ. ಕಾಮಗಾರಿ ಗುಣಮಟ್ಟದ ಕುರಿತು ಅನೇಕ ದೂರುಗಳು ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆ ನಿರ್ಮಾಣದ ಸಮಯದಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗದಂತೆ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ, ಗುತ್ತಿಗೆದಾರರು ಈ ಯಾವ ಕ್ರಮಗಳನ್ನು ತೆಗೆದುಕೊಂಡಿಲ್ಲ. ಒಟ್ಟಿನಲ್ಲಿ ಈ ರಸ್ತೆಯ ಕಾಮಗಾರಿ ಮತ್ತು ರಸ್ತೆಯ ವಿಚಾರದಲ್ಲಿ ನಡೆದಿರುವ ಪ್ರಮಾದಗಳ ಕುರಿತು ಸರ್ಕಾರ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ತನಿಖೆ ನಡೆಸುವ ವಿಚಾರದಲ್ಲಿ ವಿಳಂಬ ಧೋರಣೆ ತಾಳಿದರೆ ಹೋರಾಟ ಅನಿವಾರ್ಯ ಎಂದು ಜೋಶಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕಿ ಸೀಮಾ ಮಸೂತಿ, ಬಿಜೆಪಿ ಮುಖಂಡರಾದ ಈರೇಶ ಅಂಚಟಗೇರಿ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಈಶ್ವರ ಶಿವಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

