ಧಾರವಾಡ

ವಾರ್ಷಿಕ ದಶಲಕ್ಷ ಮಂದಿ ತಂಬಾಕಿಗೆ ಬಲಿ

Published On :

ಧಾರವಾಡ: ತಂಬಾಕು ಸೇವನೆಯಿಂದ ಭಾರತದಲ್ಲಿ ವಾರ್ಷಿಕ ದಶಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತ್ತೀಚಿನ ವರದಿಯಂತೆ ದೇಶದಲ್ಲಿ ಪ್ರತಿ 8 ಸೆಕೆಂಡಿಗೆ ತಂಬಾಕು ಸಂಬಂಧಿ ರೋಗಿಗಳಲ್ಲಿ ಓರ್ವ ಸಾವನ್ನಪ್ಪುತ್ತಿದ್ದಾನೆ ಎಂದು ಖ್ಯಾತ ಕ್ಯಾನ್ಸರ್ ಸರ್ಜನ್ ಡಾ೤ ವಿ.ಎಸ್. ವಿಶಾಲರಾವ್ ಹೇಳಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಜಂಟಿಯಾಗಿ ಕ್ಯಾನ್ಸರ್ ನಿಯಂತ್ರಣ ಯೋಜನೆ ಅಡಿ 'ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ (ಕಾಟ್ಪಾ)' ಕುರಿತು ಧಾರವಾಡ, ಹಾವೇರಿ, ಗದಗ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿರುವುದು ಕಳವಳಕಾರಿ ಅಂಶ. ಈ ಪೈಕಿ ಮೂರನೇ ಒಂದರಷ್ಟು ಮಂದಿ ಅಕಾಲಿಕವಾಗಿ ಸಾವನ್ನಪ್ಪುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣ ಮಾಡಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ. ಅದೇ ರೀತಿ ಕರ್ನಾಟಕ ಸರ್ಕಾರ ಸಿಗರೇಟ್ ಮತ್ತು ಇತರೆ ತುಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದೆ.
ಪೊಲೀಸ್ ಇಲಾಖೆ ಈ ಕುರಿತು ಮುತುವರ್ಜಿ ವಹಿಸಿ ಕಾಯ್ದೆ ಅನುಷ್ಠಾನಕ್ಕೆ ತರಬೇಕಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಈ ಅಂಶ ಗಮನದಲ್ಲಿಟ್ಟುಕೊಂಡು ಪೊಲೀಸರು ಕರ್ತವ್ಯ ನಿರ್ವಹಿಸಿ ಸಮಾಜದ ಉತ್ತಮ ಆರೋಗ್ಯಕ್ಕೆ ನಾಂದಿ ಹಾಡಬೇಕಿದೆ ಎಂದು ಡಾ೤ ವಿಶಾಲರಾವ್ ಹೇಳಿದರು.
ಪ್ರಸುತ್ತ ಗುಟ್ಕಾ ಸೇವನೆಯನ್ನು ರಾಜ್ಯದಲ್ಲಿ ನಿಷೇಧಿಸಿದ್ದರೂ ಗುಟ್ಕಾ ಕಂಪನಿಗಳು ಬೇರೆ ರೀತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಸುಪ್ರೀಂ ಕೋರ್ಟ್ ಆದೇಶದಂತೆ ಪೂರ್ತಿಯಾಗಿ ಗುಟ್ಕಾ ನಿಷೇಧವಾಗಬೇಕಿದೆ. ಅಲ್ಲದೇ, ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಹಾಗೂ ಸಿಗರೇಟ್ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಫಲಕಗಳನ್ನು ಹಾಕಬೇಕು. ಅಲ್ಲದೇ, ತಂಬಾಕು ಸೇವನೆ ಮಾಡುವರಿಗೆ ದಂಡ ವಿಧಿಸಿಯಾದರೂ ಅದರಿಂದ ಮುಕ್ತರಾಗುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಡಾ೤ ವಿ.ಎಸ್. ವಿಶಾಲರಾವ್ ಹೇಳಿದರು.
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ೤ ಶರಣಪ್ಪ ಮಾತನಾಡಿ, ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ಪೊಲೀಸ್ ಠಾಣೆಯಲ್ಲಿ ಕಾಟ್ಪಾ ಕಾಯ್ದೆ ಜಾರಿಗೆ ತಂದು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದ ಪ್ರಕರಣಗಳನ್ನು ಪ್ರತಿ ತಿಂಗಳು ದಾಖಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತಂಬಾಕು ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ ಸಾರ್ವಜನಿಕರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪದ್ಮನಯನ, ಹಾವೇರಿ ಜಿಲ್ಲೆ ಎಸ್ಪಿ ಎನ್. ಶಶಿಕುಮಾರ, ಡಿವೈಎಸ್ಪಿಗಳಾದ ಆರ್.ಎಸ್. ಬನಹಟ್ಟಿ, ಬಿ.ವೈ. ಬೆಳ್ಳುಬ್ಬಿ ಇದ್ದರು. ಇದೇ ಸಂದರ್ಭದಲ್ಲಿ ಗುಟಕಾ ಸೇವನೆಯಿಂದ ಕ್ಯಾನ್ಸರ್‌ಗೆ ತುತ್ತಾಗಿ ನರಳುತ್ತಿರುವ ಕುಮುಟದ ರಾಮದೇವಪ್ಪ ತಮ್ಮ ಜೀವನದ ಕಹಿ ಅನುಭವಗಳನ್ನು ಹಂಚಿಕೊಂಡರು.
--
ಪಾಲಿಕೆ ಆಯುಕ್ತರಾಗಿ 22ರಂದು ರಮಣದೀಪ ಅಧಿಕಾರ ಸ್ವೀಕಾರ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 19
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಆಯುಕ್ತ ರಮಣದೀಪ ಚೌಧರಿ ಸೋಮವಾರ (ಜು. 22) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಸದ್ಯ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2008ರ ಸಾಲಿನ ಐಎಎಸ್ ಅಧಿಕಾರಿ ರಮಣದೀಪ ಚೌಧರಿ ಇದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆಯುಕ್ತ ರಮಣದೀಪ ಚೌಧರಿ ಅವರ ಪತ್ನಿ ಖುಷ್ಬು ಗೋಯಲ್ ಚೌಧರಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದು, ಅವರೂ ಸೋಮವಾರ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.