ದೇಶಕ್ಕೆ ಅನಿವಾರ್ಯ ಮೋದಿ ನಾಯಕತ್ವ: ಜೋಶಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 21
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ದೇಶಕ್ಕೆ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷದ ಸಂಘಟನೆ ಬಲಗೊಳ್ಳಬೇಕಾದ ಅಗತ್ಯವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಭಾನುವಾರ, ಧಾರವಾಡ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಎನ್ಡಿಎ ಅಧಿಕಾರಕ್ಕೆ ಬರುವುದು ಖಚಿತ ಎಂದು ಗುಪ್ತಚರ ವರದಿ ಸೇರಿದಂತೆ ಅಂತಾರಾಷ್ಟ್ರೀಯ ಸಮೀಕ್ಷಾ ವರದಿಗಳು ದೃಢಪಡಿಸುತ್ತಿವೆ. 9 ವರ್ಷಗಳಿಂದ ದೇಶವನ್ನು ಆಳಿದ ಯುಪಿಎನಿಂದಾಗಿ ದೇಶದ ಅರ್ಥ ವ್ಯವಸ್ಥೆಗೆ ಅಧೋಗತಿಗೆ ತಲುಪಿದೆ. ವಾಜಪೇಯಿ ಆಡಳಿತಾವಧಿಯಲ್ಲಿ ರು. 47 ಇದ್ದ ಡಾಲರ್ ಮೌಲ್ಯ ಕಾಂಗ್ರೆಸ್ ಆಡಳಿತದಿಂದ ಕೆಳಗಿಳಿಯುವ ಹೊತ್ತಿಗೆ ಪ್ರಧಾನಿ ಮನ್ಮೋಹನ್ಸಿಂಗ್ ಅವರ ವಯಸ್ಸಿನ ಅಂಕಿಗೆ ತಲುಪುವ ಸಾಧ್ಯತೆ ಇದೆ. ದೇಶದ ಸುರಕ್ಷತೆ ವಿಚಾರದಲ್ಲಿಯೂ ಪ್ರಧಾನಿ ಮನ್ಮೋಹನ ಸಿಂಗ್ ಚೀನಾ ಮತ್ತು ಪಾಕಿಸ್ತಾನ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲೂ ಕಾಂಗ್ರೆಸ್ ಪರಿಸ್ಥಿತಿ ಹದಗೆಡುತ್ತಿದೆ. ಅಧಿಕಾರಕ್ಕೆ ಬಂದ ಎರಡು ತಿಂಗಳಿನಲ್ಲೇ ಸಮನ್ವಯ ಸಮಿತಿ ರಚಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಮೇಲೆ ನಿಯಂತ್ರಣ ಸಾಧಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರಗಳು ಅಸ್ತಿತ್ವ ಇರುವ ರಾಜ್ಯಗಳಲ್ಲಿ ಮಾತ್ರ ಸಮನ್ವಯ ಸಮಿತಿ ಇರುತ್ತದೆ. ಆದರೆ ರಾಜ್ಯದಲ್ಲಿ ಒಂದೇ ಪಕ್ಷ ಆಡಳಿತದಲ್ಲಿದ್ದರೂ ಸಮನ್ವಯ ಸಮಿತಿ ರಚಿಸುವ ಮೂಲಕ ಸರ್ಕಾರದ ಮೇಲೆ ಹಿಡಿತ ಸಾಧಿಸುವ ಕೆಲಸ ಕಾಂಗ್ರೆಸ್ನಿಂದ ಆಗುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ತಾನಾಗಿಯೇ ಬಿಜೆಪಿಗೆ ಹೋರಾಟದ ವಿಷಯಗಳನ್ನು ಎತ್ತಿ ಕೊಡುತ್ತಿದೆ. ಗ್ರಾಮಸಭೆ ನಡೆಸದ ಗ್ರಾಪಂ ಸದಸ್ಯರನ್ನು ಅನರ್ಹಗೊಳಿಸುವ ಸರ್ಕಾರದ ಆದೇಶದ ವಿರುದ್ಧ ಜು. 25ರಂದು ಗ್ರಾಪಂ ಸದಸ್ಯರಿಂದ ಮುತ್ತಿಗೆ ಹಾಕಲಾಗುವುದು. ಜು. 30ರಂದು ಚಿಲ್ಲರೆ ಮಾರುಕಟ್ಟೆಯಲ್ಲಿ ನೇರ ವಿದೇಶಿ ಬಂಡವಾಳ ಹೂಡಿಕೆ ಪ್ರಸ್ತಾವನೆ ವಿರುದ್ಧ ಬೆಂಗಳೂರಿನ ಚಿಲ್ಲರೆ ವ್ಯಾಪಾರಸ್ಥರನ್ನು ಸಂಘಟಿಸಿ ಪ್ರತಿಭಟನೆ ಕೈಗೆತ್ತಿಕೊಳ್ಳಲಾಗುವುದು. ವಿಧಾನಪರಿಷತ್ನಲ್ಲಿ ವಿದೇಶಿ ಬಂಡವಾಳ ಹೂಡಿಕೆ ಮಸೂದೆಗೆ ಸಮ್ಮತಿ ದೊರೆಯದಂತೆ ಬಿಜೆಪಿ ನೋಡಿಕೊಳ್ಳಲಿದೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮೂಲ ಕಾಂಗ್ರೆಸ್ಸಿಗರಲ್ಲಿ ಜನತಾ ಪರಿವಾರದಿಂದ ಬಂದಿರುವ ಸಿದ್ದರಾಮಯ್ಯ ಅವರ ಮೇಲೆ ವಿಶ್ವಾಸ ಇಲ್ಲ. ಸಿದ್ದರಾಮಯ್ಯ ಒಬ್ಬರೇ ಜನಪ್ರಿಯ ಯೋಜನೆಗಳನ್ನು ಘೋಷಿಸಿ ರಾಜಕೀಯದಲ್ಲಿ ಉತ್ತುಂಗಕ್ಕೆ ಏರಬಾರದು ಎನ್ನುವ ಉದ್ದೇಶದಿಂದ ಒಂದೇ ಪಕ್ಷ ಆಡಳಿತದಲ್ಲಿದ್ದರೂ ಸಮನ್ವಯ ಸಮಿತಿ ರಚಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಕಳಕಪ್ಪ ಬಂಡಿ, ಸೀಮಾ ಮಸೂತಿ, ಬಿಜೆಪಿ ವಿಭಾಗೀಯ ಪ್ರಮುಖ ಲಿಂಗರಾಜ ಪಾಟೀಲ, ನಿಕಟಪೂರ್ವ ಧಾರವಾಡ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಷಣ್ಮುಖಪ್ಪ ಗುರಿಕಾರ, ಮಲ್ಲಿಕಾರ್ಜುನ ಸಾವಕಾರ್, ಜಿಪಂ ಸದಸ್ಯೆ ರತ್ನವ್ವ ಕಳ್ಳಿಮನಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

