ಧಾರವಾಡ

ಪಾರದರ್ಶಕ, ಜನಪರ ಆಡಳಿತ

Published On :

ಹುಬ್ಬಳ್ಳಿ: ಪಾರದರ್ಶಕ ಹಾಗೂ ಜನಪರಸ್ನೇಹಿ ಆಡಳಿತ ನಡೆಸುವುದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಆಯುಕ್ತ ಅಧಿಕಾರಿ ರಮಣದೀಪ ಚೌಧರಿ ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿದ್ದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳಿನ್ ಅವರಿಂದ ಸೋಮವಾರ ಅಧಿಕಾರ ವಹಿಸಿಕೊಂಡ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಆಯುಕ್ತ ಚೌಧರಿ ಮಾತನಾಡಿದರು.
ತ್ಯಾಜ್ಯ ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾದರಿಯಲ್ಲಿ ಅವಳಿ ನಗರದಲ್ಲಿಯೂ ವಿಕೇಂದ್ರೀಕರಣ ಕ್ರಮ ಕೈಗೊಳ್ಳಲಾಗುವುದು. ತ್ಯಾಜ್ಯ ಮರುಬಳಕೆಗೆ ಆದ್ಯತೆ ನೀಡಲಾಗುವುದು ಎಂದರು.
ಮುಖ್ಯ ರಸ್ತೆ ದುರಸ್ತಿ, ಡೆಂಘೀ ಸೇರಿದಂತೆ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಶುದ್ಧ ಕುಡಿವ ನೀರು ಪೂರೈಕೆ ತಮ್ಮ ಮೊದಲ ಆದ್ಯತೆ. ವಾಣಿಜ್ಯ ಮಳಿಗೆಗಳಲ್ಲಿ ಪಾರ್ಕಿಂಗ್ ಜಾಗ ಅತಿಕ್ರಮಣವಾಗಿದ್ದರೆ ಅತಿಕ್ರಮಣ ತೆರವಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.  ಮಳೆಗಾಲ ಪ್ರಾರಂಭಗೊಂಡಿದ್ದರಿಂದ ಎಲ್ಲೆಡೆ ಸಾಂಕ್ರಾಮಿಕ ರೋಗ ಹಬ್ಬುವ ಸಾಧ್ಯತೆ ಹೆಚ್ಚು ಇರುತ್ತದೆ. ಆದಕಾರಣ ಎಲ್ಲೆಡೆ ಸ್ವಚ್ಛತೆ ಕಾಯ್ದುಕೊಂಡು ರೋಗಗಳು ಹಬ್ಬದಂತೆ ತ್ವರಿತ ಕ್ರಮ ತೆಗೆದುಕೊಳ್ಳುವುದು ಅವಶ್ಯಕ. ರಸ್ತೆ ದುರಸ್ತಿ ಸೇರಿದಂತೆ ಪಾಲಿಕೆ ವತಿಯಿಂದ ನಡೆಯುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರದೇ ಇದ್ದರೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೀದಿ ನಾಯಿ ಹಾಗೂ ಬೀದಿ ದನಗಳ ಹಾವಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಮಹಾನಗರ ಪಾಲಿಕೆಯಲ್ಲಿರುವ ಸಿಬ್ಬಂದಿ ಕೊರತೆ ನೀಗಿಸಲು ತ್ವರಿತ ಕ್ರಮ ತೆಗೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಗೆ ಮನವಿ ಸಲ್ಲಿಸಲಾಗುವುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಿರಿಯ ಅಭಿಯಂತರರಿದ್ದು, ಅಗತ್ಯಬಿದ್ದರೆ ನಿಯೋಜನೆ ಮೇರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಕರೆಸಿಕೊಳ್ಳಲಾಗುವುದು ಎಂದು ಹೇಳಿದರು.  ಈ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ರಮಣದೀಪ ಚೌಧರಿ ಕಾರ್ಯನಿರ್ವಹಿಸಿದ್ದರು. ಇವರ ಪತ್ನಿ, ಐಎಎಸ್ ಅಧಿಕಾರಿ ಖುಷ್ಬು ಚೌಧರಿ ಅವರು ಸಹ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.