ಡೆಂಘೀ: ಜನರಲ್ಲಿ ಜಾಗೃತಿ ಅವಶ್ಯ
ಧಾರವಾಡ: ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಈ ರೋಗದ ಕುರಿತು ಜನಸಾಮಾನ್ಯರಲ್ಲಿ ತಿಳಿವಳಿಕೆ ಅತಿ ಆವಶ್ಯ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ವಿ.ಡಿ. ಕರ್ಪೂರಮಠ ಹೇಳಿದರು.
ಇಲ್ಲಿಯ ರುಡ್‌ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿದ ಅವರು, ಡೆಂಘೀ ಜ್ವರದ ಲಕ್ಷಣ, ತಡೆಯುವ ಉಪಾಯ ಹಾಗೂ ಮತ್ತಿತರ ವಿಷಯದ ಕುರಿತು ಮಾಹಿತಿ ನೀಡಿದರು. ಡೆಂಘೀ ಜ್ವರ ವೈರಸ್‌ನಿಂದ ಉಂಟಾಗುವ ಕಾಯಿಲೆ. ಇದು ಸೊಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನ ಅಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ.
ರೋಗದ ಲಕ್ಷಣಗಳು: ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣಗಳು. ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.
ಚಿಕಿತ್ಸೆ ಏನು?: ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ, ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗೆ ಅನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂಥ ಲಕ್ಷಣಗಳು ಕಂಡುಬಂದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆ ಹಾಗೂ ಮಹಾನಗರ ಪಾಲಿಕೆ ಆಸ್ಪತ್ರೆಗಳಿಗೆ ಹೋಗಿ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಉಚಿತ ಚಿಕಿತ್ಸೆ ಪಡೆಯಬೇಕು.
ರೋಗದ ನಿಯಂತ್ರಣ: ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಘೀ ರೋಗದ ನಿಯಂತ್ರಣ ಮಾಡಲು ಇರುವ ಮಾರ್ಗ. ಈ ಸೊಳ್ಳೆಗಳು ನೀರು ಶೇಖರಿಸಿಡುವ ಸಿಮೆಂಟ್ ತೊಟ್ಟೆ, ಕಲ್ಲು ಚಪ್ಪಡೆಯಿಂದ ನಿರ್ಮಿಸಿದ ತೊಟ್ಟೆ, ಡ್ರಮ್, ಬ್ಯಾರಲ್ ಮಣ್ಣಿನ ಮಡಿಕೆ, ಉಪಯೋಗಿಸದ ಒರಳು ಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಇದರಿಂದ ಡೆಂಘೀ ಜ್ವರದಿಂದ ಪಾರಾಗಬಹುದು ಎಂದು ಡಾ. ಕರ್ಪೂರಮಠ ವಿವರಿಸಿದರು. ಸಂಸ್ಥೆಯ ನಿರ್ದೇಶಕ ಮಹಾಂತೇಶ ವೀರಾಪುರ ಅಧ್ಯಕ್ಷತೆ ವಹಿಸಿದ್ದರು. ಪ್ರದೀಪ ಮೇಲ್ಗಡೆ ಸ್ವಾಗತಿಸಿದರು. ಜಗದೀಶ ಪೂಜಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

