ಕೇಂದ್ರದ ಬೆಲೆ ಏರಿಕೆ ನೀತಿಗೆ ಆಕ್ರೋಶ
ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸ್ಟೇಶನ್ ರಸ್ತೆಯ ಡಾ. ಅಂಬೇಡ್ಕರ ವೃತ್ತದಿಂದ ಮಿನಿವಿಧಾನಸೌಧದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಹಾಗೂ ಧುರೀಣರು, ಬೆಲೆ ಏರಿಕೆ ಇಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಿನಲ್ಲಿ ಸಾರಿಗೆ ದರ ಹೆಚ್ಚಿಸಿದೆ. ಇದರಿಂದಾಗಿ ಜನಸಾಮಾನ್ಯರು ಅವಲಂಬಿತವಾಗಿರುವ ನಿತ್ಯೋಪಯೋಗಿ ವಸ್ತುಗಳ ಬೆಲೆಯಲ್ಲಿಯೂ ಏರಿಕೆಯಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸಾರಿಗೆ ದರ ಏರಿಸುವ ಮೂಲಕ ಕಾಂಗ್ರೆಸ್ ಧುರೀಣರು ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನು ಗಾಳಿಗೆ ತೂರಿದ್ದಾರೆ. ಸಾರಿಗೆ ದರ ಏರಿಕೆ ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಜನಸಾಮಾನ್ಯರ ಮೇಲೆ ಭಾರ: ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ, ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ಭಾರಿ ಹೊರೆ ಹಾಕಿದೆ. ಇದೀಗ ಮತ್ತೆ ಪೆಟ್ರೋಲ್ ಬೆಲೆಯಲ್ಲಿ ರು. 2 ಏರಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಶೇ. 1.6ರಷ್ಟು ಸಾರಿಗೆ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆ ನೀಡಿದೆ ಎಂದು ದೂರಿದರು. ಎಪಿಎಲ್ ಪಡಿತರ ಚೀಟಿ ಹೊಂದಿದ 34 ಲಕ್ಷ ಕುಟುಂಬಗಳಿಗೆ ಮುಂದಿನ ದಿನಗಳಲ್ಲಿ ಅಕ್ಕಿ ವಿತರಿಸುವುದಿಲ್ಲವೆಂಬ ರಾಜ್ಯ ಸರ್ಕಾರದ ಹೇಳಿಕೆ ಕಾಳಸಂತೆಕೋರರೊಂದಿಗೆ ಒಪ್ಪಂದ ಮಾಡಿಕೊಂಡಂತಿದೆ ಎಂದು ಶಂಕೆ ವ್ಯಕ್ತಪಡಿಸಿದ ಸಂಸದ ಜೋಶಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ಮೂಲಕ ಅನುಸರಿಸಿದ ಜನವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರಾದ ಡಿ.ಕೆ. ಚವ್ಹಾಣ, ಸುಧೀರ ಸರಾಫ, ಶಿವು ಮೆಣಸಿನಕಾಯಿ, ಮುಖಂಡರಾದ ರಂಗಾ ಬದ್ದಿ, ನಾಗೂಸಾ ಕಲಬುರ್ಗಿ, ವೀರೇಶ ಸಂಗಳದ, ಭಾಸ್ಕರ ಜಿತೂರಿ, ನಿಂಗಪ್ಪ ಬಡಿಗೇರ, ಸತೀಶ ಶೇಜವಾಡಕರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

