ಧಾರವಾಡ

ಮೋದಿ ಪ್ರಧಾನಿಯಾಗುವುದು ಖಚಿತ: ಶೆಟ್ಟರ್

Published On :

ಹುಬ್ಬಳ್ಳಿ: ನರೇಂದ್ರ ಮೋದಿ ದೇಶದ ಪ್ರಧಾನಿಯಾಗುವುದರಲ್ಲಿ ಸಂದೇಹವೇ ಇಲ್ಲ. ಕೇಂದ್ರ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನ ಕೇಂದ್ರ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ. ಮೋದಿಯವರನ್ನು ಪ್ರಧಾನಿಯಾಗಿಸಲು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.
ಪಕ್ಷದ ಹುಬ್ಬಳ್ಳಿ ಕಾರ್ಯಾಲಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ 5ನೇ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಬಿಜೆಪಿ ಸರ್ಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ರು. 200 ಕೋಟಿ ವಿಶೇಷ ಅನುದಾನ ನೀಡಿದ್ದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆದಾಗ್ಯೂ ಇನ್ನೂ ಅನೇಕ ಕಾಮಗಾರಿಗಳು ಬಾಕಿ ಉಳಿದಿದ್ದರಿಂದ ರು. 26 ಕೋಟಿ ಹೆಚ್ಚಿನ ಅನುದಾನ ನೀಡಲಾಗಿದೆ. ಈ ಕಾಮಗಾರಿ ಕೈಗೆತ್ತಿಕೊಳ್ಳುವ ಕುರಿತಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತಿಳಿಸಲಾಗಿದೆ ಎಂದರು.
ತಿಳಿಸಿಕೊಡುವ ಕಾರ್ಯವಾಗಲಿ: ಪಾಲಿಕೆಯ ಬಿಜೆಪಿ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡುವುದರ ಜತೆಗೆ, ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿ ಉತ್ತಮ ಗುಣಮಟ್ಟದ್ದಾಗಿರುವಂತೆ ನಿಗಾ ವಹಿಸಬೇಕು. ಇದೇ ವೇಳೆ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ತಿಳಿಸಿ ಕೊಡುವ ಕೆಲಸವಾಗಬೇಕು ಎಂದರು.
ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಲಿಂಗರಾಜ ಪಾಟೀಲ, ನರೇಂದ್ರ ಮೋದಿಯವರಿಂದ ಮಾತ್ರ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯ. ಮೋದಿಯವರನ್ನು ಪ್ರಧಾನಿಯಾಗಿಸಲು ಕಾರ್ಯಕರ್ತರು ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಪ್ರಚಾರ ಮಾಡಬೇಕು ಎಂದರು. ನಾಗೇಶ ಕಲಬುರ್ಗಿ, ವೀರಣ್ಣ ಸವಡಿ, ಮಲ್ಲಿಕಾರ್ಜುನ ಸಾವುಕಾರ, ಪ್ರಕಾಶ ಗೋಡಬೋಲೆ, ಡಾ. ಪಾಂಡುರಂಗ ಪಾಟೀಲ, ವೆಂಕಟೇಶ ಮೇಸ್ತ್ರಿ, ವಿಜಯಾನಂದ ಹೊಸಕೋಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.